ಬುಧವಾರ, ನವೆಂಬರ್ 20, 2019
27 °C

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ ಜೀವಾವಧಿ

Published:
Updated:

ಕಲಬುರ್ಗಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದರಿಂದ ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯ ಕಪನೂರ ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗಣಪತಿ ತುಕಾರಾಮ ಎಂಬಾತನಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಪೋಕ್ಸೊ ಕಾಯ್ದೆಯಡಿ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹ 1 ಲಕ್ಷ ದಂಡ ವಿಧಿಸಿದೆ.

2017ರ ಸೆಪ್ಟೆಂಬರ್‌ 24ರಂದು ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರೊಬ್ಬರ ಮಗಳು ಬುತ್ತಿ ಕೊಡಲು ಬಂದಿದ್ದಳು. ಈ ಸಂದರ್ಭದಲ್ಲಿ ತನ್ನ ತಂದೆಯ ಬಗ್ಗೆ ವಿಚಾರಿಸಿದಾಗ ಗಣಪತಿ, ನಿಮ್ಮ ತಂದೆ ಹೊರಗಡೆ ಹೋಗಿದ್ದಾರೆ. ಬರುತ್ತಾರೆ ಎಂದು ಹೇಳಿ ಬಾಲಕಿಯನ್ನು ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಗ್ರಾಮೀಣ ಠಾಣೆಯ ಅಂದಿನ ಪೊಲೀಸ್‌ ಇನ್‌ಸ್ಪೆಕ್ಟರ್‌ ಎ. ವಾಜಿದ್‌ ಪಟೇಲ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಾದ ವಿವಾದ ಆಲಿಸಿದ ನ್ಯಾಯಾಧೀಶ ಗೋಪಾಲಪ್ಪ ಎಸ್‌. ಅವರು ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸಿದರು. ದಂಡದ ಹಣದಲ್ಲಿ ₹ 50 ಸಾವಿರವನ್ನು ಬಾಲಕಿಗೆ ನೀಡಬೇಕು ಎಂದು ಆದೇಶಿಸಿದ್ದಾರೆ. ನೊಂದ ಬಾಲಕಿಗೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ ₹ 5 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. 

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೋಕ್ಸೊ) ಎಲ್‌.ವಿ.ಚಟ್ನಾಳಕರ ವಾದ ಮಂಡಿಸಿದ್ದರು.

ಪ್ರತಿಕ್ರಿಯಿಸಿ (+)