ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ಮೋದಿ ಭಾವಚಿತ್ರ, ಕೇಂದ್ರದ ಭೂತದಹನ ಯತ್ನ ವಿಫಲ

ಭಾವನಾತ್ಮಕ ವಿಚಾರಗಳ ರಾಜಕಾರಣ ಖಂಡಿಸಿ ಸಿಪಿಐ ಪ್ರತಿಭಟನೆ
Published 21 ಜನವರಿ 2024, 6:59 IST
Last Updated 21 ಜನವರಿ 2024, 6:59 IST
ಅಕ್ಷರ ಗಾತ್ರ

ಕಲಬುರಗಿ: ಕೇಂದ್ರ ಸರ್ಕಾರ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಸಿಪಿಐ ಜಿಲ್ಲಾ ಘಟಕದ ಮುಖಂಡರು ಕೇಂದ್ರ ಸರ್ಕಾರದ ಭೂತದಹನ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಶನಿವಾರ ನಡೆಯಿತು.

ಸಿಪಿಐ ರಾಜ್ಯ ಘಟಕ ಕರೆ ನೀಡಿದ್ದ ಭೂತದಹನ, ಪ್ರತಿಭಟನೆಗೆ ಜಿಲ್ಲಾ ಘಟಕ ಬೆಂಬಲಿಸಿತ್ತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ಪ್ರತಿಕೃತಿ ಹಾಗೂ ನರೇಂದ್ರ ಮೋದಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ಬಳಿಕ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು.

ಬಿಜೆಪಿಯು ರಾಜಕೀಯ ಲಾಭಕ್ಕಾಗಿ ರಾಮಮಂದಿರದಂತಹ ಭಾವನಾತ್ಮಕ ವಿಚಾರವನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದೆ. ಇದು ಸಂವಿಧಾನ ವಿರೋಧಿಯಾಗಿದೆ. ರಾಜಕಾರಣದಲ್ಲಿ ಜನರು ಬದುಕು ಕಟ್ಟಿಕೊಳ್ಳುವಂತಹ ವಿಚಾರಗಳಿಗೆ ಮನ್ನಣೆ ಸಿಗಬೇಕಿದೆ ಎಂದು ಪ್ರತಿಭಟನಕಾರರು ಹೇಳಿದರು.

ರಾಜ್ಯದ ಬಹುತೇಕ ತಾಲ್ಲೂಕುಗಳು ಬರ ಪೀಡಿತವಾಗಿದ್ದು, ಬೆಳೆಗಳನ್ನು ಕಳೆದುಕೊಂಡ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಬೇಕು. ಕಾರ್ಪೊರೇಟರ್‌ಗಳ ಪರ ಇರುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಹಾಗೂ ರೈತರ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂಬರುವ ಬಜೆಟ್‌ನಲ್ಲಿ ಜನರಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಿ, ಅವುಗಳನ್ನು ಜಾರಿಗೆ ತರಲು ಮುಂದಾಗಬೇಕು. ನರೇಗಾ ಕೆಲಸವನ್ನು 200 ದಿನಗಳಿಗೆ ಏರಿಸಿ, ಕನಿಷ್ಠ ಕೂಲಿ ದರವನ್ನು ₹ 600ಕ್ಕೆ ಹೆಚ್ಚಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಸತಿ ರಹಿತರಿಗೆ ಮನೆಗಳನ್ನು ನೀಡಬೇಕು. ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ, ಅಕ್ಷರ ದಾಸೋಹ ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ಆಶ್ವಾಸನೆ ನೀಡಿದಂತೆ ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ನೀಡಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕಾಲೊನಿಗಳ ಅಭಿವೃದ್ಧಿಗೆ ಪ್ರತ್ಯೇಕ ಕ್ರಿಯಾ ಯೋಜನೆಗಳನ್ನು ರೂಪಿಸಿ, ಅಗತ್ಯವಾದಷ್ಟು ಹಣಕಾಸಿನ ನೆರವು ನೀಡಬೇಕು. ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಮಹೇಶ ಕುಮಾರ ರಾಠೋಡ, ಪ್ರಭುದೇವ ಯಳಸಂಗಿ, ಪದ್ಮಾವತಿ ಪಾಟೀಲ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಶಿವಲಿಂಗಮ್ಮ, ಶರಣಬಸಪ್ಪ ಗಣಜಲಖೇಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT