ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಲು ಸಿಪಿಐಎಂ ಒತ್ತಾಯ

Last Updated 13 ಏಪ್ರಿಲ್ 2022, 13:56 IST
ಅಕ್ಷರ ಗಾತ್ರ

ಕಲಬುರಗಿ: ‘ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್‌ ಪಾಟೀಲ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಹೊಣೆಗಾರರೆಂದು ಮರಣ ಪತ್ರ ಬರೆದು, ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಅವರನ್ನು ತಕ್ಷಣ ಬಂಧಿಸಬೇಕು‘ ಎಂದು ಭಾರತ ಕಮ್ಯುನಿಸ್ಟ್ (ಮಾರ್ಕ್ಸ್‌ವಾದಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಇದೊಂದು ಅತ್ಯಂತ ಗಂಭೀರ ಪ್ರಕರಣವಾಗಿದೆ. ಆದ್ದರಿಂದ, ರಾಜ್ಯ ಸರ್ಕಾರ ಈ ಕೂಡಲೇ ಸಚಿವ ಈಶ್ವರಪ್ಪ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ಗುತ್ತಿಗೆ ಕೆಲಸದಲ್ಲಿ ರಾಜ್ಯ ಸರ್ಕಾರದ ಸಚಿವರು, ಶಾಸಕರು, ಅಧಿಕಾರಿಗಳು, ಒಟ್ಟು ಕಾಮಗಾರಿಯ ಶೇ 40ರಷ್ಟು ಕಮಿಷನ್ ಪಡೆಯುತ್ತಿರುವುದಾಗಿ ಮತ್ತು ಇದರಿಂದ ಕಾಮಗಾರಿ ನಿರ್ವಹಣೆಗೆ, ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗಿದೆಯೆಂದು, ಇದನ್ನು ತಡೆಯಲು ಅಗತ್ಯ ಕ್ರಮವಹಿಸುವಂತೆ ಸ್ವತಃ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಬಹಿರಂಗ ಪತ್ರ ಬರೆದು ಕಳೆದ ಐದಾರು ತಿಂಗಳುಗಳ ಹಿಂದೆಯೇ ಒತ್ತಾಯಿಸಿದ್ದರು. ಪ್ರಧಾನಿಗೆ ಮತ್ತು ಮುಖ್ಯಮಂತ್ರಿ ಆ ಕುರಿತು ಸೂಕ್ತ ಕ್ರಮವಹಿಸಿದ್ದರೆ ಸಂತೋಷ್‌ ಪಾಟೀಲ ಆತ್ಮಹತ್ಯೆ ತಡೆಯಬಹುದಿತ್ತು’ ಎಂದಿದ್ದಾರೆ.

‘ಈಗಲಾದರೂ ಇನ್ನಷ್ಟು ಗುತ್ತಿಗೆದಾರರು ಅತ್ಮಹತ್ಯೆಗಿಳಿಯದಂತೆ ಮತ್ತು ಅವರ ಕುಟುಂಬಗಳು ಬೀದಿ ಪಾಲಾಗದಂತೆ ತಡೆಯಲು ಈ ಕಮಿಷನ್ ಹಗರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೊಳಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಸಂಪುಟದಿಂದ ವಜಾ ಮಾಡಿ’

ಸಚಿವ ಈಶ್ವರಪ್ಪ ಅವರ ಕಿರುಕುಳ ತಾಳದೆ ಸಂತೋಷ್‌ ಪಾಟೀಲ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಪ್ರಯುಕ್ತ ಸಚಿವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ರೇಣುಕಾ ಸಿಂಗೆ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ‘ಹಿರಿಯ ರಾಜಕಾರಣಿ ಈಶ್ವರಪ್ಪನವರು ಕೊಲೆಯ ಪ್ರಕರಣದಲ್ಲಿ ತಮ್ಮ ಹೆಸರು ಕಾಣಿಸಿಕೊಂಡಿರುವುದರಿಂದ ತಕ್ಷಣವೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಪೊಲೀಸರಿಗೆ ಶರಣಾಗಬೇಕು. ಇಲ್ಲದಿದ್ದರೆ ಜನತೆ ಬೀದಿಗಿಳಿದು ಹೋರಾಡುವುದು ಅನಿವಾರ್ಯ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT