ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಬೆಳೆ ಪರಿಹಾರಕ್ಕೆ ಆಗ್ರಹ

ರೈತ– ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರ ಮೆರವಣಿಗೆ, ಡಿ.ಸಿ ಕಚೇರಿ ಮುಂದೆ ಧರಣಿ
Last Updated 16 ನವೆಂಬರ್ 2018, 13:54 IST
ಅಕ್ಷರ ಗಾತ್ರ

ಕಲಬುರ್ಗಿ: ಮುಂಗಾರು ವೈಫಲ್ಯದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಕೂಡಲೇ ಪರಿಹಾರ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ– ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಮೆರವಣಿಗೆ ನಡೆಸಿದರು.

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲಕಾಲ ಧರಣಿ ನಡೆಸಿದರು. ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಘೋಷಣೆ ಕೂಗಿದರು.

ಈ ಬಾರಿ ಹಿಂಗಾರು ಕೂಡ ವಿಫಲವಾಗಿದೆ. ಇನ್ನೊಂದೆಡೆ ಸಾಲಗಾರರ ಕಿರುಕುಳ ಹೆಚ್ಚಾಗಿದೆ. ರಾಜ್ಯ ಸರ್ಕಾರ ಇದನ್ನು ಗಮನಿಸಿ ಸಾಲಮನ್ನಾ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ರೈತರಿಗೆ ನೋಟಿಸ್‌ ನೀಡುವ ಬ್ಯಾಂಕುಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೃಷಿ ಕಾರ್ಮಿಕರ ಸ್ಥಿತಿ ಕೂಡ ಚಿಂತಾಜನಕವಾಗಿದ್ದು, ಜೀವನೋಪಾಯಕ್ಕೆ ಗುಳೆ ಹೋಗುತ್ತಿದ್ದಾರೆ. ಬರಪೀಡಿತ ತಾಲ್ಲೂಕುಗಳಲ್ಲಿ ಕೂಡಲೇ ಕಾಮಗಾರಿಗಳನ್ನು ಆರಂಭಿಸಬೇಕು. ಕೃಷಿ ಕಾರ್ಮಿಕರು, ಸ್ತ್ರೀಶಕ್ತಿ ಸಂಘಟನೆಗಳು, ನಿರುದ್ಯೋಗಿಯಾದ ರೈತರ ಮಕ್ಕಳ ಸಾಲವನ್ನೂ ಮನ್ನಾ ಮಾಡಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.

ಚಳಿಗಾಲ ಆರಂಭದಲ್ಲೇ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಬೇಸಿಗೆಯಲ್ಲಿ ಪರಿಸ್ಥಿತಿ ಇನ್ನೂ ಚಿಂತಾಜನಕವಾಗಲಿದೆ. ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಜನ ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮಮಟ್ಟದಲ್ಲಿ ಗೋಶಾಲೆ, ಮೇವು ಬ್ಯಾಂಕ್‌ ತೆರೆಯಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ವಿವಿಧ ಯೋಜನೆಗಳ ಅಡಿ ನೀರಾವರಿಗೆ ಅನುಕೂಲ ಕಲ್ಪಿಸಬೇಕು. ಕೆರೆ–ಕಟ್ಟೆಗಳ ಹೂಳೆತ್ತಿಸಿ ನೀರು ಸಂಗ್ರಹಿಸಲು ಅನುವು ಮಾಡಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಗುಣಮಟ್ಟದ ಹಾಗೂ ನ್ಯಾಯಸಮ್ಮತ ಆಹಾರ ಪದಾರ್ಥ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಸಂಘಟನೆಯ ಸಂಚಾಲಕ ಗಣಪತರಾವ ಕೆ. ಮಾನೆ, ಕಾರ್ಯದರ್ಶಿ ಎಚ್‌.ವಿ.ದಿವಾಕರ, ಜಿಲ್ಲಾ ಸಮಿತಿ ಸದಸ್ಯ ರಾಜೇಂದ್ರ ಅತನೂರ, ಸದಸ್ಯರಾದ ವಿಶ್ವನಾಥ ಸಿಂಗೆ, ಗುಂಡಣ್ಣ ಎಂ. ಕುಂಬಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT