ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರೀಯ ವಿವಿಯಲ್ಲಿ ಪೊಲೀಸ್‌ ಹೊರ ಠಾಣೆ

Last Updated 25 ಜನವರಿ 2019, 13:01 IST
ಅಕ್ಷರ ಗಾತ್ರ

ಕಲಬುರ್ಗಿ: ಆಳಂದ ತಾಲ್ಲೂಕು ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ತಾತ್ಕಾಲಿಕವಾಗಿ ಪೊಲೀಸ್‌ ಹೊರಠಾಣೆ (ಔಟ್‌ ಪೋಸ್ಟ್‌) ಆರಂಭಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಸುಬೋಧ್‌ ಯಾದವ ಅವರು ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದರು.

ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಸೌಲಭ್ಯ ಕಲ್ಪಿಸುವ ವಿಷಯವಾಗಿ ಗುರುವಾರ ಇಲ್ಲಿ ಸಭೆ ನಡೆಸಿದ ಅವರು,‘ಸರ್ಕಾರದ ಅನುಮೋದನೆ ದೊರೆತ ನಂತರ ಅಲ್ಲಿ ಪೂರ್ಣಪ್ರಮಾಣದ ಹೊರಠಾಣೆ ನಿರ್ಮಿಸಬೇಕು’ ಎಂದರು.

‘ಮುಂದಿನ ವರ್ಷಗಳಲ್ಲಿ 15 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಹಾಗೂ ಬೋಧಕರು ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಾಸಿಸುವ ಸಾಧ್ಯತೆ ಇದ್ದು, ನಿತ್ಯ 2.3 ಕೋಟಿ ಲೀಟರ್‌ ಕುಡಿಯುವ ನೀರಿನ ಅವಶ್ಯಕತೆ ಇದೆ ಎಂದು ಕುಲಪತಿ ತಿಳಿಸಿದ್ದಾರೆ. ಬಹುಗ್ರಾಮ ಯೋಜನೆಯಿಂದ ನಿತ್ಯ ನೀಡುತ್ತಿರುವ ಒಂದು ಕೋಟಿ ಲೀಟರ್‌ ನೀರು ಸಾಲುತ್ತಿಲ್ಲ’ ಎಂದು ಹೇಳಿದರು.

‘2050ರ ವೇಳೆಗೆ ಅವಶ್ಯವಿರುವ ಕುಡಿಯುವ ನೀರಿನ ಪ್ರಮಾಣದ ಆಧಾರದ ಮೇಲೆ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಬೆಣ್ಣೆತೊರಾ ಅಥವಾ ಅಮರ್ಜಾ ಜಲಾಶಯದಿಂದ ಕುಡಿಯುವ ನೀರಿನ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಮುಖ್ಯ ಎಂಜಿನಿಯರ್ ದಿನೇಶ್ ಮಾತನಾಡಿ, ಅಮರ್ಜಾ ಜಲಾಶಯದಲ್ಲಿ 1.4 ಟಿಎಂಸಿ ಅಡಿ ನೀರು ಲಭ್ಯವಿದೆ. ಅಮರ್ಜಾದಿಂದಲೇ ನೀರು ಪೂರೈಸಬಹುದು ಎಂದರು.

ಕುಲಪತಿ ಪ್ರೊ.ಎಚ್. ಎಂ. ಮಹೇಶ್ವರಯ್ಯ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಮುಕ್ತಾರ್, ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್ ಶಿವನಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT