ಬುಧವಾರ, ಆಗಸ್ಟ್ 17, 2022
28 °C
ಗ್ರಾಮ ಪ‍ಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

‘ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ‘ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಅಕ್ರಮ ಚಟುವಟಿಕೆ ನಿಯಂತ್ರಿಸಲು ರಾಜ್ಯ ಚುನಾವಣಾ ಆಯೋಗ ಜಾರಿಗೊಳಿಸಿರುವ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ, ಪೊಲೀಸ್, ಅಬಕಾರಿ ಹಾಗೂ ಇತರ ಇಲಾಖೆಯ ಅಧಿಕಾರಿಗಳೊಂದಿಗೆ ಬುಧವಾರ ಪೂರ್ವಭಾವಿ ಸಭೆ ನಡೆಸಿದ ಅವರು, ‘ಮತದಾನ ಶಾಂತಿಯುತವಾಗಿ ಜರುಗಲು ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಮತಗಟ್ಟೆಗಳ ಕುರಿತು ಪೊಲೀಸ್ ಅಧಿಕಾರಿಗಳು ಮತ್ತು ತಹಶೀಲ್ದಾರರು ಜಂಟಿಯಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು’ ಎಂದರು.

‘ಜಿಲ್ಲೆಯ ಗಡಿ ಭಾಗದಲ್ಲಿ ಸೆಕ್ಟರ್ ಅಧಿಕಾರಿಗಳು ಮತ್ತು ಎಂಸಿಸಿ ಅಧಿಕಾರಿಗಳ ತಂಡದ ಸಹಕಾರದೊಂದಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಮದ್ಯ ಸಾಗಾಣಿಕೆ ಆಗದಂತೆ ಕಟ್ಟೆಚ್ಚರ ವಹಿಸಬೇಕು. ಮದ್ಯ ಮಾರಾಟಕ್ಕೆ ಪರವಾನಗಿ ಹೊಂದಿರುವ ಅಂಗಡಿಗಳು, ದಾಸ್ತಾನು ಮತ್ತು ಮಾರಾಟದ ಸಂಪೂರ್ಣ ಅಂಕಿ– ಅಂಶವುಳ್ಳ ಮಾಹಿತಿಯನ್ನು ನೀಡಬೇಕು’ ಎಂದು ಅಬಕಾರಿ ಇಲಾಖೆಯ ಪ್ರಭಾರಿ ಉಪ ಆಯುಕ್ತರಾದ ಶಶಿಕಲಾ ಒಡೆಯರ್ ಅವರಿಗೆ ಸೂಚಿಸಿದರು.

‘ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮತಪಟ್ಟಿಗೆ ಮೂಲಕ ಚುನಾವಣೆ ನಡೆಸಬೇಕಿರುವ ಕಾರಣ ಬ್ಯಾಲೆಟ್ ಪೇಪರ್ ಸಿದ್ಧಪಡಿಸಬೇಕು. ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯ ಸಮರ್ಪಕವಾಗಿ ನಿರ್ವಹಿಸಬೇಕು. ಚುನಾವಣಾ ಪ್ರಚಾರಕ್ಕೆ ಐದಕ್ಕಿಂತ ಹೆಚ್ಚಿನ ಜನ ಇರಬಾರದು. ಬೈಕ್ ರ‍್ಯಾಲಿ ಮಾಡುವಂತಿಲ್ಲ. ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ‘ಈಗಾಗಲೇ ಚಾಲನೆಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದರೆ ಅದನ್ನು ಮುಂದುವರಿಸಬೇಕು. ಹೊಸದಾಗಿ ಆವುದೇ ಕಾಮಗಾರಿಗಳು ಆರಂಭಿಸುವಂತಿಲ್ಲ. ಅಲ್ಲದೇ ಹೊಸದಾಗಿ ನೇಮಕಾತಿ ಆದೇಶ ನೀಡುವಂತಿಲ್ಲ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್, ಡಿಸಿಪಿ ಕಿಶೋರಬಾಬು, ಸಹಾಯಕ ಆಯುಕ್ತರಾದ ರಾಮಚಂದ್ರ ಗಡಾದೆ, ರಮೇಶ ಕೋಲಾರ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳ ತಹಶೀಲ್ದಾರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು