ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ | ಕೇಂದ್ರ ಸರ್ಕಾರಕ್ಕೆ ಕೋರ್ಟ್‌ ಚಾಟಿ: ಡಾ. ಅಜಯ್‌ ಸಿಂಗ್

Published 23 ಏಪ್ರಿಲ್ 2024, 13:44 IST
Last Updated 23 ಏಪ್ರಿಲ್ 2024, 13:44 IST
ಅಕ್ಷರ ಗಾತ್ರ

ಕಲಬುರಗಿ: ‘ಕರ್ನಾಟಕಕ್ಕೆ ಬರ ಪರಿಹಾರ ನೀಡಲು ತಾರತಮ್ಯ ತೋರಿದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬಿಸಿ ಒಂದು ವಾರದೊಳಗೆ ಬರ ಪರಿಹಾರ ನೀಡಲು ಸೂಚಿಸಿದ್ದು, ರಾಜ್ಯದ ಜನರಿಗೆ ಸಿಕ್ಕ ಗೆಲುವು’ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಡಾ. ಅಜಯ್‌ ಸಿಂಗ್ ಹೇಳಿದರು.

‘ಬರ ಪರಿಹಾರ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಾರದೊಳಗೆ ಪರಿಹಾರ ನೀಡುವಂತೆ ಸೂಚಿಸಿದೆ. ನ್ಯಾಯಾಲಯದ ಈ ತೀರ್ಪು ಬರಗಾಲದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಬಹುದೊಡ್ಡ ಜಯವಾಗಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಪ್ರತಿ ವರ್ಷ ರಾಜ್ಯದಿಂದ ₹4.75 ಲಕ್ಷ ಕೋಟಿ ತೆರಿಗೆ ಕೇಂದ್ರ ಸರ್ಕಾರ ಪಡೆದುಕೊಳ್ಳುತ್ತದೆ. ಪ್ರತಿಯಾಗಿ ₹ 52 ಸಾವಿರ ಕೋಟಿ ಮಾತ್ರ ವಾಪಾಸ್ ನೀಡಿ ಅನ್ಯಾಯ ಮಾಡುತ್ತಿದೆ. ದೆಹಲಿಗೆ ತೆರಳಿ ಪ್ರತಿಭಟನೆಯೂ ಮಾಡಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವು ರಾಜ್ಯದ ತೆರಿಗೆ ಪಾಲು ಸಂಪೂರ್ಣವಾಗಿ ಬಿಡುಗಡೆ ಮಾಡಬೇಕು’ ಎಂದರು.

‘ಕೇಂದ್ರ ಸರ್ಕಾರ ರೈತ ವಿರೋಧಿಯಾಗಿದ್ದರಿಂದ ಕಳೆದ 10 ವರ್ಷಗಳಲ್ಲಿ ಸುಮಾರು 1.47 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ನೀಡಿದ್ದ ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿಯ ಭರವಸೆ ಈಡೇರಿಸಲಿಲ್ಲ. ರೈತರ ಆದಾಯ ದ್ವಿಗುಣಗೊಳ್ಳಲಿಲ್ಲ. ರೈತರ ಮೇಲೆ ಗೋಲಿಬಾರ್ ಮಾಡಿ, ಟ್ರ್ಯಾಕ್ಟರ್ ಹತ್ತಿಸಿದ್ದರು. ಕೃಷಿಕರ ಸಾಲ ಮನ್ನಾ ಮಾಡದೆ, ಉದ್ಯಮಿಗಳ ₹14 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು’ ಎಂದು ಆರೋಪಿಸಿದರು.

‘ಪ್ರಧಾನಿ ಮೋದಿ ಅವರು ಚುನಾವಣೆಗೆ ಮಾತ್ರ ಕಲ್ಯಾಣ ಕರ್ನಾಟಕಕ್ಕೆ ಬರುತ್ತಾರೆ. ಚುನಾವಣೆ ಮುಗಿಯುತ್ತಿದ್ದಂತೆ ಇತ್ತ ತಿರುಗಿಯೂ ನೋಡುವುದಿಲ್ಲ. ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಬಿಟ್ಟರೆ, ಈ ಭಾಗಕ್ಕೆ ಕೇಂದ್ರ ಸರ್ಕಾರ ಯಾವುದೇ ಕೊಡುಗೆ ನೀಡಲಿಲ್ಲ’ ಎಂದು ಟೀಕಿಸಿದರು.

‘ಮೋದಿ ಅವರು ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಹತಾಶೆ ಸ್ಥಿತಿಗೆ ಬಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಸೂತ್ರ ಇರಲು ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಮೂಲಕ ಹಿಂದೂ-ಮುಸ್ಲಿಮರ ನಡುವೆ ಜಗಳ ಹಚ್ಚುವ ಮೂಲಕ ಚುನಾವಣೆ ನಡೆಸಲು ಮುಂದಾಗಿದ್ದಾರೆ’ ಎಂದು ಆಪಾದಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ್ ರೆಡ್ಡಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಅಲ್ಲಂ ವೀರಭದ್ರಪ್ಪ, ನೀಲಕಂಠರಾವ ಮೂಲಗೆ, ಮಹಾತೇಶ್ ಕೌಲಗಿ, ಶರಣು ಭೂಸನೂರ್, ಈರಣ್ಣ ಝಳಕಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT