ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎಸ್‌ಪಿ ಕಾನೂನುಬದ್ಧಗೊಳಿಸಲು ಒತ್ತಾಯಿಸಿ 20ಕ್ಕೆ ಪ್ರತಿಭಟನೆ

Last Updated 17 ಸೆಪ್ಟೆಂಬರ್ 2022, 16:29 IST
ಅಕ್ಷರ ಗಾತ್ರ

ಕಲಬುರಗಿ: ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸಬೇಕು. ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸಬೇಕು. ಕೃಷಿ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಸಗಟು ಹಾಗೂ ಚಿಲ್ಲರೆ ವ್ಯಾಪಾರವನ್ನು ಸಂಪೂರ್ಣವಾಗಿ ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಇದೇ 20ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ರೈತ–ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿ. ದಿವಾಕರ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆ ಏರುತ್ತಿರುವ ಈ ಸಂದರ್ಭದಲ್ಲಿ ಗ್ರಾಮೀಣ ಬಡ ಜನತೆಯ ಜೀವನದ ಮೇಲೆ ಆಳ್ವಿಕರು ಬರೆಯನ್ನು ಎಳೆಯುತ್ತಿದ್ದಾರೆ. ಒಂದೆಡೆ ಬೀಜ, ರಸಗೊಬ್ಬರಗಳ ಬೆಲೆಯನ್ನು ದುಬಾರಿ ಮಾಡಿ ಮತ್ತು ಅದರ ಮೇಲೆ ಇರುವ ಸಬ್ಸಿಡಿಯನ್ನು ಹಿಂದಕ್ಕೆ ತೆಗೆದುಕೊಂಡು ಕೃಷಿಯು ದುಬಾರಿಯಾಗಿದೆ. ಇನ್ನೊಂದೆಡೆ ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ಸಿಗದೆ ರೈತರು ಕಂಗಾಲಾಗುವ ಸ್ಥಿತಿ ಬಂದೊದಗಿದೆ’ ಎಂದರು.

‘ಆದ್ದರಿಂದ ಸರ್ಕಾರವೇ ಬೆಳೆಗಳನ್ನು ಕೊಂಡುಕೊಂಡು ರೈತರಿಗೆ ಪ್ರತಿ ಎಕರೆಗೆ ತಗಲುವ ವೆಚ್ಚವನ್ನು ಒಳಗೊಂಡು ಒಂದೂವರೆ ಪಟ್ಟು ಬೆಂಬಲ ಬೆಲೆಯನ್ನು ಸೇರಿಸಿ ಬೆಲೆ ನಿಗದಿ ಮಾಡಲು ಎಂಎಸ್‌ಪಿಯನ್ನು ಕಾನೂನು ಬದ್ಧಗೊಳಿಸುವುದು ಅತ್ಯಾವಶ್ಯಕವಾಗಿದೆ. ಇದರೊಂದಿಗೆ ಕೃಷಿ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಸಗಟು ಹಾಗೂ ಚಿಲ್ಲರೆ ವ್ಯಾಪಾರವನ್ನು ಸಂಪೂರ್ಣವಾಗಿ ಸರ್ಕಾರವೇ ವಹಿಸಿಕೊಳ್ಳಬೇಕು. ಕೇಂದ್ರದ ಬಿಜೆಪಿ ಸರ್ಕಾರವು ಕಳೆದ ವರ್ಷ ಮೂರು ಕರಾಳ ಕಾನೂನುಗಳನ್ನು ಹಿಂಪಡೆಯುವ ಸಂದರ್ಭದಲ್ಲಿ ದೇಶದಾದ್ಯಂತ ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುತ್ತೇವೆ ಎಂದು ಹೇಳಿ ಪ್ರಮಾಣ ಮಾಡಿತ್ತು. ಆದರೆ ಕೊಟ್ಟ ಮಾತನ್ನು ಮುರಿದ ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸಲೇ ಇಲ್ಲ’ ಎಂದುಟೀಕಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್. ಬಿ., ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ ಸಿಂಗೆ, ಜಿಲ್ಲಾ ನಾಯಕರಾದ ಎಸ್. ಸಂದೀಪ್ ಹಾಗೂ ದೀಪಾ ಡಿಗ್ಗಿಕರ್ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT