ಸೋಮವಾರ, ಜೂನ್ 14, 2021
25 °C

ಕಲಬುರ್ಗಿ: ಮಾಜಿ ಹಂಗಾಮಿ ಕುಲಪತಿ ಪ್ರೊ. ಮೇಲಕೇರಿ ಕೋವಿಡ್‌ನಿಂದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಮಾಜಿ ಹಂಗಾಮಿ ಕುಲಪತಿ ಪ್ರೊ.ಎಸ್‌.ಪಿ. ಮೇಲಕೇರಿ (61) ಅವರು ಕೋವಿಡ್‌ನಿಂದ ಶನಿವಾರ ನಗರದ ಇಎಸ್‌ಐಸಿ ಆಸ್ಪತ್ರೆಯಲ್ಲಿ ನಿಧನರಾದರು.

ತೀವ್ರ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಮೇಲಕೇರಿ ಅವರು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋವಿಡ್‌ ಇರುವುದು ದೃಢಪಟ್ಟಿತ್ತು. ಅವರಿಗೆ ತಾಯಿ, ಪತ್ನಿ, ಮೂವರು ಪುತ್ರಿಯರು, ಪುತ್ರ ಇದ್ದಾರೆ.

ಕುಲಪತಿಯಾಗಿದ್ದ ಪ್ರೊ.ಎಸ್‌.ಆರ್. ನಿರಂಜನ ಅವರ ಅವಧಿ ಮುಗಿದ ಬಳಿಕ ಮೇಲಕೇರಿ ಹಂಗಾಮಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. ಮನೋವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯಸ್ಥರಾಗಿ, ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಮುಖ್ಯಸ್ಥರಾಗಿ, ಸಮಾಜ ವಿಜ್ಞಾನ ನಿಕಾಯದ ಡೀನರಾಗಿ ಕಾರ್ಯನಿರ್ವಹಿಸಿದ್ದರು.

ಸಿಂಗಪುರ, ಅಮೆರಿಕ, ಥೈಲ್ಯಾಂಡ್, ಶ್ರೀಲಂಕಾ, ಮಲೇಷ್ಯಾಕ್ಕೆ ತೆರಳಿ ಪ್ರಬಂಧ ಮಂಡಿಸಿದ್ದರು. ಮನೋವಿಜ್ಞಾನಕ್ಕೆ ಸಂಬಂಧಿಸಿದಂತೆ ಬುದ್ಧನ ವಿಚಾರಧಾರೆಗಳ ಬಗ್ಗೆ ಸಂಶೋಧನೆ ನಡೆಸಿದ್ದರು. ಅಸ್ಪೃಶ್ಯತೆಯನ್ನು ಸಾಮಾಜಿಕ ಮನೋವಿಜ್ಞಾನದ ನೆಲೆಯಲ್ಲಿ ಆಳವಾದ ಅಧ್ಯಯನ ನಡೆಸಿದ್ದರು.

ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಜಿ.ಎಂ.ವಿದ್ಯಾಸಾಗರ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಕೇರಿ ಅವರನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಪ್ರಾಧ್ಯಾಪಕ ಹುದ್ದೆಯಿಂದ ಅಮಾನತು ಮಾಡಲಾಗಿತ್ತು.

ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯಕುಮಾರ್‌ ಅವರನ್ನು ಸಂವಿಧಾನದ ಕುರಿತು ಉಪನ್ಯಾಸ ನೀಡಲು ಮೇಲಕೇರಿ ವಿ.ವಿ.ಗೆ ಆಹ್ವಾನಿಸಿದ್ದರು. ಇದಕ್ಕೆ ಎಬಿವಿಪಿ, ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ವಿ.ವಿ. ಆವರಣದಲ್ಲಿ ಕಾರ್ಯಕ್ರಮ ಆಯೋಜನೆಗೆ ಸಿಂಡಿಕೇಟ್ ಅನುಮತಿ ನಿರಾಕರಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು