ಕಲಬುರಗಿ: ಮಹಾರಾಷ್ಟ್ರದ ಉಜ್ಜನಿ ಮತ್ತು ವೀರ್ ಜಲಾಶಯದಿಂದ ಭೀಮಾ ನದಿಗೆ ಕಳೆದ ನಾಲ್ಕು ದಿನಗಳಿಂದ 1 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ಸ್ ನೀರು ಹರಿಸಲಾಗುತ್ತಿದ್ದು, ಅಫಜಲಪುರ ತಾಲ್ಲೂಕಿನ ಘತ್ತರಗಾ ಹಾಗೂ ಗಾಣಗಾಪುರ ಸೇತುವೆಗಳು ಮುಳುಗಡೆಯಾಗಿವೆ. ಎರಡು ದಿನ ಸೇತುವೆ ಮೇಲಿನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಘತ್ತರಗಾ-ಜೇರಟಗಿ ಮತ್ತು ಗಾಣಗಾಪುರ-ಇಟಗಾ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಪೊಲೀಸ್ ಸಿಬ್ಬಂದಿ ಠಿಕಾಣಿ ಹೂಡಿದ್ದು, ತಡರಾತ್ರಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದಂತೆ ಮುಂಜಾಗ್ರತೆಯ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.