ಬುಧವಾರ, ನವೆಂಬರ್ 25, 2020
26 °C
ಶ್ರೀಶೈಲ ಸುಲಫಲಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಆಗ್ರಹ

ಅಪ್ಪಗೆ ಪದ್ಮವಿಭೂಷಣ, ಕರ್ನಾಟಕ ರತ್ನ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪ, ದಾಕ್ಷಾಯಿಣಿ ಅಪ್ಪ ಮತ್ತು 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು

ಕಲಬುರ್ಗಿ: ‘ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮತ್ತು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ್ಪ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಬೇಕು’ ಎಂದು ಸುಲಫಲಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ಆವರಣದ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಶನಿವಾರ ನಡೆದ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ, ದಾಕ್ಷಾಯಿಣಿ ಅಪ್ಪ ಮತ್ತು ಭಾವಿ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಜನ್ಮದಿನೋತ್ಸವ ಕಾರ್ಯಕ್ರಮಲ್ಲಿ ಅವರು ಮಾತನಾಡಿದರು.

‘ಶೈಕ್ಷಣಿಕವಾಗಿ ಹಿಂದುಳಿದ ಕಲಬುರ್ಗಿ ಪ್ರದೇಶವನ್ನು ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸುವಲ್ಲಿ ಅಪ್ಪ ಅವರ ಕಾರ್ಯಗಳನ್ನು ಗಮನಿಸಿ, ರಾಜ್ಯ ಸರ್ಕಾರವು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಬೇಕು. ಪದ್ಮವಿಭೂಷಣ ಪ್ರಶಸ್ತಿಯನ್ನು ತಕ್ಷಣವೇ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿ ರಾಜ್ಯ ಸರ್ಕಾರವು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಬೇಕು’ ಎಂದು ಅವರು ಕೋರಿದರು.

‘ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಲು ಅವಕಾಶ ನೀಡಬೇಕು. ಅಲ್ಲದೇ, ಮುಂದಿನ ಅವಧಿಗೂ ಮುಖ್ಯಮಂತ್ರಿಯನ್ನಾಗಿ ಮಾಡಲು ಅವಕಾಶ ಮಾಡಿಕೊಡಬೇಕು’ ಎಂದರು.

‘ಶರಣಬಸವೇಶ್ವರ ಸಂಸ್ಥಾನ ಮತ್ತು ಶರಣಬಸವೇಶ್ವರ ವಿದ್ಯಾವರ್ದಕ ಸಂಘದ 7ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಅವರ ನಿಧನದ ನಂತರ ಸಂಸ್ಥಾನ ಮತ್ತು ಸಂಘವು ₹ 40 ಸಾವಿರ ಸಾಲದ ಹೊರೆ ಹೊಂದಿತ್ತು. ನಂತರ ಅಪ್ಪ ಅವರು ಎಲ್ಲಾ ಸಾಲವನ್ನು ಪಾವತಿಸಿ, ನಂತರ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸುವ ಮೂಲಕ ಶಿಕ್ಷಣ ಕ್ರಾಂತಿ ಮಾಡಿದರು. ಶರಣಬಸವ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರು’ ಎಂದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಮಾತನಾಡಿ, ‘ಶರಣಬಸವಪ್ಪ ಅಪ್ಪ ಅವರಿಗೆ ಶೀಘ್ರದಲ್ಲೇ ಅತ್ಯುನ್ನತ ಗೌರವ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಬಗ್ಗೆ ಚುನಾಯಿತ ಪ್ರತಿನಿಧಿಗಳು ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಕೇಂದ್ರ ಸರ್ಕಾರದ ಬಳಿ ನಿಯೋಗದಲ್ಲಿ ಹೋಗಿ  ಅಪ್ಪ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರಕಿಸಲು ಪ್ರಯತ್ನಿಸಲಾಗುವುದು’ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ,  ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ದಯಾಘನ್ ಧಾರವಾಡಕರ್, ರಾಜಶೇಖರ ಸ್ವಾಮೀಜಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ಧರಾಮಪ್ಪ ಪಾಟೀಲ ಧಂಗಾಪೂರ ಮಾತನಾಡಿದರು.

ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಶಿವರಾಜ ಶಾಸ್ತ್ರಿ ಹೇರೂರ ಅವರ ‘ಶ್ರೀ ಶರಣಬಸವ ಮಹಾದಾಸೋಹ ದರ್ಶನಂ’ ಮಹಾಕಾವ್ಯ, ಗೋದುತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ. ನೀಲಾಂಬಿಕಾ ಪೊಲೀಸ್‌ಪಾಟೀಲ ಅವರು ಸಂಪಾದಿಸಿದ ‘ಮಹಾಪ್ರಸಾದಿ’, ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮಿ ಪಾಟೀಲ ಮಾಕಾ ಅವರ ‘ಇನ್ ದ ಟ್ರೂ ಸ್ಪಿರಿಟ್ ಆಫ್ ದಾಸೋಹ’, ಶರಣಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೀತಾ ಇಂಗಿನಶೆಟ್ಟಿ ಅವರು ಸಂಪಾದಿಸಿದ ‘ಮಹಾದಾಸೋಹಿ’ ಗ್ರಂಥಗಳನ್ನು ಬಿಡುಗಡೆ ಮಾಡಲಾಯಿತು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ‘ಶರಣ ಸಿರಿ’ ಎಂಬ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಶರಣಬಸವೇಶ್ವರವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅಧ್ಯಕ್ಷತೆ ವಹಿಸಿದ್ದರು. ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡಾ. ಸುರೇಶ ನಂದಗಾಂವ ಮತ್ತು ಪ್ರೊ. ಚವ್ಹಾಣ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು