ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಕಳ್ಳ ಸಾಗಾಣಿಕೆ ತಡೆಗೆ ಒಗ್ಗೂಡಿ; ದೀಪನ್

Last Updated 31 ಜುಲೈ 2022, 6:06 IST
ಅಕ್ಷರ ಗಾತ್ರ

ಕಲಬುರಗಿ: ‘ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಅದನ್ನು ತಡೆಯಲು ಸಾಧ್ಯವಾಗುತ್ತದೆ’ ಎಂದು ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್. ದೀಪನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದನಗರದ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಶನಿವಾರ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಹೆಣ್ಣುಮಕ್ಕಳ ಲೈಂಗಿಕ ಕ್ರಿಯೆಗೆ ದುರ್ಬಳಕೆ, ಅಂಗಾಂಗಗಳ ಮಾರಾಟ, ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಗಳಿಗೆ ಮಾನವ ಕಳ್ಳ ಸಾಗಾಣಿಕೆ ನಡೆಯುತ್ತದೆ. ಈ ಬಗ್ಗೆ ತನಿಖೆ ಮಾಡಿ, ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ’ ಎಂದರು.

‘ಮಾನವ ಕಳ್ಳ ಸಾಗಾಣಿಕೆಯಲ್ಲಿ ತಂತ್ರಜ್ಞಾನದ ಬಳಕೆ ಉಪಯೋಗ ಮತ್ತು ದುರುಪಯೋಗ ಕುರಿತು ಶಾಲಾ ಮಕ್ಕಳಲ್ಲಿ ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು. ಈ ಕುರಿತು ಜನರು ಜವಾಬ್ದಾರಿಯುತವಾಗಿ ತಡೆಗಟ್ಟುವಂತಹ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಯು.ನವೀನ ಕುಮಾರ್ ಮಾತನಾಡಿ, ‘ಈ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಿ, ಕಾಳಜಿಯುತವಾಗಿ ಕೆಲಸ ನಿರ್ವಹಿಸಬೇಕು. ಮಕ್ಕಳಿಗೆ ಸದ್ಗುಣ, ಸಂಪ್ರದಾಯಗಳನ್ನು ಹೇಳಬೇಕು’ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ್ ಸುಂಬುಡ ಮಾತನಾಡಿ, ‘ಮಕ್ಕಳ ಅಪಹರಣ ಹಾಗೂ ಮಾರಾಟ ಜಾಲ ದೊಡ್ಡ ಮಾಫಿಯಾವಾಗಿ ಬೆಳೆಯುತ್ತಿದೆ. ಇದರ ಕುರಿತು ಪಾಲಕರು ಹಾಗೂ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮಾಹಿತಿ ನೀಡಬೇಕು’ ಎಂದರು.

ಶಿಶು ಅಭಿವೃದ್ಧಿ ಕಾರ್ಯಕ್ರಮ ಅಧಿಕಾರಿ ಪ್ರವೀಣ್ ಹೇರೂರ ಮಾತನಾಡಿ, ‘ಈಚಿನ ದಿನಗಳಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡುಮಾನವ ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ. ಆಕರ್ಷಣೆಗೆ ಒಳಪಡಿಸಿ, ನಂಬಿಸಿ, ಮೋಸ ಮಾಡಿ ಜಾಲದಲ್ಲಿ ಸಿಕ್ಕಿಸಿ ಸಾಗಿಸುತ್ತಿದ್ದಾರೆ’ ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೀಮರಾಯ ಕಣ್ಣೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಣ್ಣ ದೇಸಾಯಿ, ಪ್ರಾಧ್ಯಾಪಕ ಡಾ.ಶ್ರೀಶೈಲ ಘೂಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಕುಮಾರ್, ಸಹಾಯಕ ಶಿಕ್ಷಣ ಅಧಿಕಾರಿ ಎಸ್.ಬಿ ಪಾಟೀಲ, ಮಹಿಳಾ ಪೊಲೀಸ್ ಠಾಣೆ ಆರಕ್ಷಕ ನದಾಫ್, ಕಾನೂನು ಅಧಿಕಾರಿ ಭರತೇಶ ಬಿ. ಶೀಲವಂತರ್ ಇದ್ದರು.

ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಪ್ರಯುಕ್ತ ರಂಗ ಮಂದಿರದಿಂದ ಜಗತ್ ವೃತ್ತದವರೆಗೆ ಜಾಗೃತಿ ಜಾಥಾ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT