ಕಲಬುರಗಿ ಬಂದ್: ಬಸ್ ನಿಲ್ದಾಣ ಮುಂಭಾಗ ರೈತ ಸಂಘಟನೆ ಪ್ರತಿಭಟನೆ

ಕಲಬುರಗಿ: ನೆಟೆ ರೋಗದಿಂದ ತೊಗರಿ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಪರ ಸೇರಿ ವಿವಿಧ ಸಂಘಟನೆಗಳು ಮಂಗಳವಾರ ಕಲಬುರಗಿ ಬಂದ್‌ಗೆ ಕರೆ ನೀಡಿದ್ದು, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಕಾರ್ಯಕರ್ತರು ನಸುಕಿನಲ್ಲಿ ಪ್ರತಿಭಟನೆ ನಡೆಸಿದರು.
ನಸುಕಿನ 5 ಗಂಟೆಗೆ ಕೇಂದ್ರ ಬಸ್ ನಿಲ್ದಾಣದ ಮುಂಭಾಗ ಜಮಾಯಿಸಿದ ಎಐಕೆಕೆಎಂಎಸ್‌ನ ಕಾರ್ಯಕರ್ತರು, ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಆಟೊ ಚಾಲಕರು, ಬಸ್ ಚಾಲಕ ಮತ್ತು ನಿರ್ವಾಹಕರು ರೈತರ ಪರವಾಗಿ ನಿಂತು ಬಂದ್‌ಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
'ನೆಟೆ ರೋಗದಿಂದ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಮನಹರಿಸಿ, ಧನ ಸಹಾಯಕ್ಕೆ ಮುಂದಾಗುತ್ತಿಲ್ಲ. ಸರ್ಕಾರವನ್ನು ಬಡಿದೆಬ್ಬಿಸಲು ಬಂದ್‌ಗೆ ಕರೆ ಕೊಡಲಾಗಿದೆ. ದೇಶಕ್ಕೆ ಅನ್ನ ಕೊಡುತ್ತಿರುವ ರೈತರು ಸಾವಿನ ಹಾದಿ ತುಳಿಯುತ್ತಿದ್ದು, ಇದನ್ನು ತಡೆಯಲು ಸಾರ್ವಜನಿಕರು ಅವರ ಪರವಾಗಿ ಧ್ವನಿ ಎತ್ತಿ ಜತೆಗೆ ನಿಲ್ಲಬೇಕು' ಎಂದು ಪ್ರತಿಭಟನಾಕಾರರು ಕೋರಿದರು.
'ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ(ಜ.19) ಜಿಲ್ಲೆಗೆ ಆಗಮಿಸಲಿದ್ದಾರೆ. ಈ ವೇಳೆ ತೊಗರಿ ಬೆಳೆ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬ ಸದಸ್ಯರಿಗೆ ಪರಿಹಾರ ನೀಡಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು' ಎಂದು ಎಚ್ವರಿಸಿದರು.
ಪೊಲೀಸರು ಬಿಗಿ ಬಂದೋ ಬಸ್ತ್ ಮಾಡಿದ್ದು, ಬಸ್ ಮತ್ತು ಆಟೊಗಳು ಎಂದಿನಂತೆ ಓಡಾಡುತ್ತಿವೆ.
ಬಂದ್‌ಗೆ ಸಂಘಟನೆಗಳ ಬೆಂಬಲ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ, ಅಖಿಲ ಭಾರತ ಕಿಸಾನ್ ಸಭಾ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು), ಜನವಾದಿ ಮಹಿಳಾ ಸಂಘಟನೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ), ರಾಜ್ಯ ಕಟ್ಟಡ ಕಾರ್ಮಿಕ ಸಂಘಟನೆ, ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ), ದಲಿತ ಸಂಘಟನೆಗಳ ಒಕ್ಕೂಟ, ಆಹಾರ ಧಾನ್ಯಗಳ ಮತ್ತು ಬೀಜ ವ್ಯಾಪಾರಿಗಳ ಸಂಘ, ಬೀದಿ ಬದಿ ವ್ಯಾಪಾರಿಗಳ ಸಂಘ, ಕಿರಾಣಾ ಬಜಾರ್ ವ್ಯಾಪಾರಸ್ಥರ ಸಂಘ, ಕನ್ನಡ ಪರ ಸಂಘಟನೆಗಳು ಮತ್ತು ಅಡತ್ ಹಮಾಲರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.