ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ಹಯ್ಯ ಉಪನ್ಯಾಸ; ಅನುಮತಿ ಕೊಟ್ಟು ಮತ್ತೆ ಹಿಂಪಡೆದ ಗುಲಬರ್ಗಾ ವಿವಿ

ಉನ್ನತ ಶಿಕ್ಷಣ ಇಲಾಖೆಯಿಂದ ಕುಲಪತಿಗೆ ಮೌಖಿಕ ಸೂಚನೆ
Last Updated 15 ಅಕ್ಟೋಬರ್ 2019, 15:02 IST
ಅಕ್ಷರ ಗಾತ್ರ

ಕಲಬುರ್ಗಿ: ದೆಹಲಿಯ ಜವಹರಲಾಲ್‌ ನೆಹರೂ ವಿಶ್ವವಿದ್ಯಾಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್‌ ಅವರ ಉಪನ್ಯಾಸಕ್ಕೆ ನೀಡಿದ್ದ ಅನುಮತಿಯನ್ನು ಮಂಗಳವಾರ ಮತ್ತೆ ವಾಪಸ್ ಪಡೆದು ವಿ.ವಿ. ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಹಾಕಲಾಗಿತ್ತು.

ಇದರಿಂದಾಗಿ ಕಾರ್ಯಕ್ರಮ ಆಯೋಜಿಸಿದ್ದ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯು ವಿ.ವಿ. ಹೊರಗಡೆ ಉಪನ್ಯಾಸ ಆಯೋಜಿಸಲು ನಿರ್ಧರಿಸಿತು. ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದ ಬಳಿ ಇರುವ ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರ್ಸ್‌ ಸಭಾಂಗಣದಲ್ಲಿ ಮಧ್ಯಾಹ್ನ 12ಕ್ಕೆ ಉಪನ್ಯಾಸ ಆಯೋಜನೆಯಾಗಲಿದೆ ಎಂದು ವಿಶ್ವವಿದ್ಯಾಲಯಕ್ಕೆ ಬರುತ್ತಿದ್ದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಇನ್ನೇನು ಉಪನ್ಯಾಸ ಆರಂಭವಾಗಬೇಕು ಎನ್ನುವಷ್ಟರಲ್ಲಿ ಅಲ್ಲಿಗೂ ಧಾವಿಸಿದ ಪೊಲೀಸರು, ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದಿಲ್ಲ. ಅಲ್ಲದೇ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಕಾರ್ಯಕ್ರಮ ರದ್ದುಗೊಳಿಸಿ ಎಂದು ಸೂಚಿಸಿದರು.

ಅಲ್ಲದೇ, ಜಿಲ್ಲಾಧಿಕಾರಿ ಬಿ.ಶರತ್ ಹಾಗೂ ಪೊಲೀಸ್‌ ಕಮಿಷನರ್‌ ಎಂ.ಎನ್‌.ನಾಗರಾಜ ಅವರೂ ಕಾರ್ಯಕ್ರಮ ರದ್ದುಗೊಳಿಸುವಂತೆ ಸಂಘಟಕರಿಗೆ ತಿಳಿಸಿದರು. ಕಾರ್ಯಕ್ರಮ ನಡೆಸಲು ಸಭಾಂಗಣ ನೀಡದಂತೆ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರ್ಸ್‌ನ ಅಧ್ಯಕ್ಷರಿಗೆ ತಾಕೀತು ಮಾಡಿದರು. ಇದರಿಂದ ಅನಿವಾರ್ಯವಾಗಿ ಕನ್ಹಯ್ಯಕುಮಾರ್ ಉಪನ್ಯಾಸವನ್ನು ರದ್ದುಗೊಳಿಸಲಾಯಿತು.

ವಿಶ್ವವಿದ್ಯಾಲಯಕ್ಕೆ ಸರ್ಪಗಾವಲು: ಮಂಗಳವಾರ ಸಂಜೆಯೇ ಕಾರ್ಯಕ್ರಮ ರದ್ದುಗೊಳಿಸಿ ಎಂದು ಉನ್ನತ ಶಿಕ್ಷಣ ಇಲಾಖೆಯಿಂದ ಹಂಗಾಮಿ ಕುಲಪತಿ ಪ್ರೊ.ಪರಿಮಳಾ ಅಂಬೇಕರ್‌ ಅವರಿಗೆ ಸೂಚನೆ ರವಾನೆಯಾಗಿತ್ತು. ಈ ಬಗ್ಗೆ ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಪ‍್ರೊ.ಎಸ್‌.ಪಿ.ಮೇಲಕೇರಿ ಅವರಿಗೂ ಕಾರ್ಯಕ್ರಮ ನಡೆಸದಂತೆ ಸೂಚಿಸಿದ್ದರು. ಇದಕ್ಕೆ ಪ್ರತಿರೋಧ ಒಡ್ಡಿದ್ದ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟ ಕಾರ್ಯಕ್ರಮ ನಡೆಸಿಯೇ ತೀರುವುದಾಗಿ ಪಟ್ಟು ಹಿಡಿದು ಸಭಾಂಗಣದಲ್ಲಿ ಬ್ಯಾನರ್‌ ಕಟ್ಟಲು ಮುಂದಾದರು. ಪರಿಸ್ಥಿತಿ ಕೈಮೀರುತ್ತಿದೆ ಎಂಬುದನ್ನು ಅರಿತ ಕುಲಪತಿ ಈ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದರು.

ಮಂಗಳವಾರ ಬೆಳಿಗ್ಗೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರ್ಯಕ್ರಮ ನಡೆಯಬೇಕಿದ್ದ ವಿಶ್ವವಿದ್ಯಾಲಯದ ಆವರಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಿದರು. ವಿದ್ಯಾರ್ಥಿಗಳನ್ನು ಒಳಗೆ ಬಿಡಲಿಲ್ಲ. ಏತನ್ಮಧ್ಯೆ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಲು ಯತ್ನಿಸಿದರು. ಆದರೆ, ಪೊಲೀಸರು ಪ್ರತಿಭಟನೆ ನಡೆಸಲು ಬಿಡಲಿಲ್ಲ.

ವಿವೇಚನಾ ಅಧಿಕಾರ ಬಳಸಿದೆ: ಕುಲಪತಿ

ಸೋಮವಾರ ಸಿಂಡಿಕೇಟ್‌ ಸಭೆಯಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಆ ನಂತರ ಉನ್ನತ ಶಿಕ್ಷಣ ಇಲಾಖೆಯಿಂದ ಕಾರ್ಯಕ್ರಮ ನಡೆಸಲು ಅನುಮತಿ ನಡೆಸದಂತೆ ಸೂಚನೆ ಬಂತು. ಅಲ್ಲದೇ, ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ಅಹಿತಕರ ಘಟನೆಗಳು ನಡೆಯುವುದು ಬೇಡ ಎಂಬ ಉದ್ದೇಶದಿಂದ ನನ್ನ ವಿವೇಚನೆ ಬಳಸಿ ಕಾರ್ಯಕ್ರಮ ರದ್ದುಗೊಳಿಸುವ ನಿರ್ಣಯ ಕೈಗೊಂಡೆ ಎಂದು ಹಂಗಾಮಿ ಕುಲಪತಿ ಪ್ರೊ.ಪರಿಮಳಾ ಅಂಬೇಕರ್‌ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT