ಶನಿವಾರ, ಮೇ 21, 2022
23 °C
ಕೆಆರ್‌ಐಡಿಎಲ್‌ ಅಧಿಕಾರಿಗಳಿಗೆ ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಭೋದ್‌ ಯಾದವ್‌ ಎಚ್ಚರಿಕೆ

ಕಾಮಗಾರಿ ಮಾಹಿತಿ ನೀಡದಿದ್ದರೆ ಕ್ರಿಮಿನಲ್ ಕೇಸ್: ಸುಭೋದ್‌ ಯಾದವ್‌ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್) ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಾರ್ಯದರ್ಶಿ ಸುಬೋಧ್ ಯಾದವ್ ಎಚ್ಚರಿಕೆ ನೀಡಿದರು.

ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳ ಕುರಿತು ಕೆಆರ್‌ಐಡಿಎಲ್ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಿದರು.

ಹಲವು ಕಾಮಗಾರಿಗಳ ಮಾಹಿತಿ ಅಪೂರ್ಣವಾಗಿದ್ದು, ಅಂತಹ ಕಾಮಗಾರಿಗಳ ಪೂರ್ಣ ಮಾಹಿತಿ ಒದಗಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಮಗಾರಿಗಳು ಅಪೂರ್ಣವಾಗಿದ್ದು, ಹಳೆ ಕೆಲಸವನ್ನು ಪೂರ್ಣಗೊಳಿಸದೇ ಹೊಸ ಕಾಮಗಾರಿ ಏಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರಶ್ನಿಸಿದರು. ಹಳೆ ಕಾಮಗಾರಿ ಪೂರ್ಣಗೊಳಿಸಿದ ದಾಖಲೆ ಸಲ್ಲಿಸಿ ನಂತರ ಹೊಸ ಕಾಮಗಾರಿ ತೆಗೆದುಕೊಳ್ಳಬೇಕು ಎಂದು ತಾಕೀತು ಮಾಡಿದರು. 

ರಾಯಚೂರಿನಲ್ಲಿರುವ ಹಾಸ್ಟೆಲ್ ಕಟ್ಟಡಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಹಂಚನಾಳ ಗ್ರಾಮದಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಕಾಂಪೌಂಡ್ ನಿರ್ಮಿಸುವಲ್ಲಿ ಎದುರಾಗುತ್ತಿರುವ ಸಮಸ್ಯೆ ಕುರಿತು ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಬೇಕು ಎಂದರು.

ಯಾದಗಿರಿ ಜಿಲ್ಲೆಯಲ್ಲಿಯೂ ಬಾಕಿ ಉಳಿದಿರುವ ಕಾಮಗಾರಿಗಳನ್ನು ಜನವರಿ 31ರೊಳಗಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಳ್ಳಾರಿ ಜಿಲ್ಲೆಯ ಕಾಮಗಾರಿಗಳು ಪ್ರಗತಿಯಲ್ಲಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನೂ ಹೆಚ್ಚಿನ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಾಲಯ್ಯ ಮಾತನಾಡಿ, ಅಧಿಕಾರಿಗಳು ಸರ್ಕಾರದ ಕೆಲಸವನ್ನು ದೇವರ ಕೆಲಸವೆಂದು ತಿಳಿದು ಮಾಡಬೇಕು. ಇಲ್ಲದಿದ್ದರೆ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕದ ಆರು ಜಿಲ್ಲೆಯ ಕೆಆರ್‌ಐಡಿಎಲ್ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು