ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ, ಆಕ್ರೋಶ

ಕೋಲಿ ಕಬ್ಬಲಿಗ, ತಳವಾರ ಜಾತಿಗಳಿಗೆ ಎಸ್.ಟಿ ಪ್ರಮಾಣ ಪತ್ರ ನೀಡಲು ಒತ್ತಾಯ
Last Updated 16 ಸೆಪ್ಟೆಂಬರ್ 2022, 16:01 IST
ಅಕ್ಷರ ಗಾತ್ರ

ಕಲಬುರಗಿ: ಕೋಲಿ ಕಬ್ಬಲಿಗ ಹಾಗೂ ತಳವಾರ ಜಾತಿಗಳಿಗೆ ಎಸ್.ಟಿ ಪ್ರಮಾಣ ಪತ್ರ ನೀಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿ ನೇತೃತ್ವದಲ್ಲಿ ಅರೆಬೆತ್ತಲೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಿಂದ ಬಂದಿದ್ದ ಸಮುದಾಯದ ಸಾವಿರಾರು ಜನರು ಜಗತ್ ವೃತ್ತದಲ್ಲಿ ಸಮಾವೇಶಗೊಂಡಿದ್ದರು.

ಹೋರಾಟ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಲಚ್ಚಪ್ಪ ಎಸ್‌. ಜಮಾದಾರ ಮಾತನಾಡಿ, ‘ಸಮುದಾಯಕ್ಕೆ ನಿರಂತರವಾಗಿ ಅನ್ಯಾಯ ಆಗುತ್ತಿದೆ. ಚುನಾವಣೆಗಳಲ್ಲಿ ಭರವಸೆ ನೀಡುವ ರಾಜಕೀಯ ನಾಯಕರು, ಚುನಾವಣೆ ನಂತರ ನಮ್ಮ ಸಮುದಾಯವನ್ನು ಮರೆಯುತ್ತಿದ್ದಾರೆ’ ಎಂದರು.

‘ಈಗಿನ ರಾಜ್ಯ ಬಿಜೆಪಿ ಸರ್ಕಾರ ಕುಂಟುತ್ತಾ ಸಾಗುತ್ತಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ನಮ್ಮ ಸಮುದಾಯಕ್ಕೆ ಎಸ್‌.ಟಿ ಪ್ರಮಾಣಪತ್ರ ನೀಡಬೇಕು. ಇಲ್ಲದಿದ್ದರೆ, ಮುಂದಿನ ಚುನಾವಣೆಯಲ್ಲಿ ಸಮುದಾಯದ ಶಕ್ತಿ ಏನೆಂಬುದನ್ನು ಪ್ರದರ್ಶಿಸ ಬೇಕಾಗುತ್ತದೆ’ ಎಂದು ಅವರು ಎಚ್ಚರಿಕೆ ನೀಡಿದರು.

‘ಸಂಸದ ಉಮೇಶ ಜಾಧವ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಲೀಕಯ್ಯ ಗುತ್ತೇದಾರ, ಬಾಬುರಾವ ಚಿಂಚನಸೂರ ಅವರು ಸಮುದಾಯಕ್ಕೆ ಮಾತು ಕೊಟ್ಟು ಮರೆತಿದ್ದಾರೆ. ಚುನಾವಣೆಯಲ್ಲಿ ನಮ್ಮ ಸಮುದಾಯದ ಮತ ಸೆಳೆಯಲಷ್ಟೇ ಭರವಸೆ ನೀಡಿದ್ದಾರೆ. ಈಗ ನಮ್ಮ ಬೇಡಿಕೆ ಬಗ್ಗೆ ಚಕಾರ ಎತ್ತುತ್ತಿಲ್ಲ’ ಎಂದರು.

ತೊನಸನನಹಳ್ಳಿ ಪೀಠಾಧ್ಯಕ್ಷ ಮಲ್ಲಣ್ಣಪ್ಪ ಸ್ವಾಮೀಜಿ, ಗೊರಗುಂದಿ ಪೀಠಾಧ್ಯಕ್ಷ ವರಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ ಎಂತಹ ಹೋರಾಟಕ್ಕೂ ಸಿದ್ಧರಿದ್ದೇವೆ. ಮುಖ್ಯಮಂತ್ರಿಗೆ ಮತ್ತೊಮ್ಮೆ ಮನವಿ ಸಲ್ಲಿಸುತ್ತೇವೆ. ಆಗಲೂ ಬೇಡಿಕೆ ಈಡೇರದಿದ್ದರೆ, ಕಲಬುರಗಿ ಬಂದ್‌ ಆಚರಿಸಲು ಚಿಂತನೆ ನಡೆಸಿದ್ದೇವೆ’ ಎಂದರು.

ಭಾಷಣದ ನಂತರ ತಮಟೆ ಸದ್ದಿನೊಂದಿಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಧಿಕ್ಕಾರ ಕೂಗುತ್ತಾ ಸಾಗಿದ ಪ್ರತಿಭಟನಾಕಾರರುಜಗತ್ ವೃತ್ತದಿಂದ ಎಸ್‌ವಿಪಿ ವೃತ್ತ ತಲುಪಿದರು. ಅಲ್ಲಿ ರಸ್ತೆಯಲ್ಲೇ ಕೂತು ಪ್ರತಿಭಟಿಸಿದರು. ಆಗ ಕೆಲ ಹೊತ್ತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಯಿತು.

ನಂತರ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹೋರಾಟ ಸಮಿತಿ ಅಧ್ಯಕ್ಷ ಕೋಶಾಧ್ಯಕ್ಷ ಪಿಂಟು ಜಮಾದಾರ, ಉಪಾಧ್ಯಕ್ಷರಾದ ರಾಮಲಿಂಗ ನಾಟಿಕರ, ಮಲ್ಲಿಕಾರ್ಜುನ ಗುಡಬಾ, ಕಲಬುರಗಿ ನಗರ ಘಟಕದ ಅಧ್ಯಕ್ಷ ಶಿವು ಯಾಗಾಪುರ, ಜಿಲ್ಲಾ ಘಟಕದ ಅಧ್ಯಕ್ಷ ಶಿವು ಧಣ್ಣಿ, ಅಫಜಲಪುರ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ ಜಮಾದಾರ ಸೇರಿದಂತೆ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT