ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಪ್ರಾಂತ ರೈತ ಸಂಘದ ಪ್ರತಿಭಟನೆ

Published 19 ಫೆಬ್ರುವರಿ 2024, 16:09 IST
Last Updated 19 ಫೆಬ್ರುವರಿ 2024, 16:09 IST
ಅಕ್ಷರ ಗಾತ್ರ

ಕಲಬುರಗಿ: ಮೊಟ್ಟೆ ಹಗರಣದ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ, ಮೊಟ್ಟೆ ಪೂರೈಕೆ ಏಜೆನ್ಸಿ ವಿರುದ್ಧ ಪ್ರಕರಣ ಹಾಗೂ ಸಿಡಿಪಿಒ, ಡಿಡಿ ವಿರುದ್ಧ ಪ್ರಕರಣ ದಾಖಲಿಸಿ, ಅಮಾನತುಗೊಳಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ‘ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಮೊಟ್ಟೆ ಪೂರೈಸುವ ಏಜೆಂಟರು, ಸಿಡಿಪಿಒಗಳು, ಮೇಲ್ವಿಚಾರಕರು ಸೇರಿಕೊಂಡು ಕೋಟಿಗಟ್ಟಲೇ ಭ್ರಷ್ಟಾಚಾರ ನಡೆಸಿದ್ದಾರೆ. ಮೊಟ್ಟೆಗಳನ್ನು ಪೂರೈಸದಿದ್ದರೂ ಅಂಗನವಾಡಿ ಕಾರ್ಯಕರ್ತೆಯರನ್ನು ಹೆದರಿಸಿ, ಪೂರೈಸಲಾಗಿದೆ ಎಂಬ ನಕಲಿ ರಸೀದಿ ಪಡೆದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜತೆಗೆ ಅಕ್ಕಿ, ಬೇಳೆ, ಬೆಲ್ಲ, ಎಣ್ಣೆ, ಕಾಳಗಳನ್ನು ಕಡಿಮೆ ಪ್ರಮಾಣದಲ್ಲಿ ಪೂರೈಸಿ, ಪೂರ್ಣಪ್ರಮಾಣದಲ್ಲಿ ಪೂರೈಸಲಾಗಿದೆ ಎಂಬ ನಕಲಿ ರಸೀದಿಯನ್ನು ಪಡೆದು, ಭ್ರಷ್ಟಾಚಾರ ಎಸಗಿದ್ದಾರೆ’ ಎಂದು ಆರೋಪಿಸಿದರು.

ಜೇವರ್ಗಿ ಮತ್ತು ಅಫಜಲಪುರ ತಾಲ್ಲೂಕಿನಲ್ಲಿ ಹೆಚ್ಚು ಭ್ರಷ್ಟಾಚಾರವಾಗಿದ್ದು, ಈ ತಾಲ್ಲೂಕುಗಳಲ್ಲಿ ವಿಶೇಷ ತನಿಖೆಯಾಗಬೇಕು. ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ(ಐಸಿಡಿಎಸ್) ಕಾರ್ಯಕ್ರಮದ ಉದ್ದೇಶವನ್ನೇ ಹಾಳುಗೆಡವಿದ್ದಾರೆ. ಈ ದೊಡ್ಡ ಪ್ರಮಾಣದ ಭ್ರಷ್ಟಾಚಾರವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ, ಉನ್ನತಮಟ್ಟದಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು. ಮೊಟ್ಟೆ ಪೂರೈಸುವ ಮೂಲಕ ಮಕ್ಕಳಿಗೆ ನ್ಯಾಯ ಒದಗಿಸಬೇಕು ಎಂದು ದೂರಿದರು.‌

ದೂರು ನೀಡಿ ತಿಂಗಳು ಕಳೆದರೂ ಕ್ರಮಕೈಗೊಂಡಿಲ್ಲ. ಇದು ಭ್ರಷ್ಟಾಚಾರ ಮುಚ್ಚಿಹಾಕುವ ಹುನ್ನಾರವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರ ಕ್ರಮ ಜರುಗಿಸದಿದ್ದರೆ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT