ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ವೀರಶೈವ ಲಿಂಗಾಯತ ಕಾಂಗ್ರೆಸ್- ಬಿಜೆಪಿ ಮುಖಂಡರ ನಡುವೆ ವಾಗ್ವಾದ

Last Updated 1 ಆಗಸ್ಟ್ 2022, 8:50 IST
ಅಕ್ಷರ ಗಾತ್ರ

ಕಲಬುರಗಿ: ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನು ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಸೋಮವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ನಡೆದ ಪ್ರತಿಭಟನೆಯ ವೇಳೆ ಸಮುದಾಯದ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ವಾಗ್ವಾದ ನಡೆಯಿತು.

ನಗರದ ಕನ್ನಡ ಭವನದ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಲವರು 'ಸಮುದಾಯದವರಿಂದ ಮತಗಳನ್ನು ಪಡೆದು ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡದ ಬಿಜೆಪಿ ಸರ್ಕಾರಕ್ಕೆ ದಿಕ್ಕಾರ' ಎಂದು ಕೂಗಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ ಅವರು ಸರ್ಕಾರದ ವಿರುದ್ಧ ಘೋಷಣೆ ಕೂಗದಂತೆ ಗದರಿಸಿದರು.

ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತಲುಪುತ್ತಿದ್ದಂತೆ ಸಮುದಾಯದ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. 'ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳು ಕೂಗುವಂತೆ ಇದ್ದರೆ ನಮ್ಮನ್ನು ಏಕೆ ಕರೆದದ್ದು' ಎಂದು ಮಾಜಿ ಶಾಸಕ ಮತ್ತು ಬಿಜೆಪಿ ಮುಖಂಡ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಪ್ರಶ್ನಿಸಿದರು. ಕಾಂಗ್ರೆಸ್ ಮುಖಂಡರು 'ನಾವು ಘೋಷಣೆ ಕೂಗಿಲ್ಲ. ಬೇರೆಯವರು ಕೂಗಿದ್ದಾರೆ' ಎಂದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಸಮುದಾಯದ ಮುಖಂಡರು ಮಧ್ಯಪ್ರವೇಶಿಸಿ, 'ಮಾಧ್ಯಮದವರು ನಮ್ಮ ಮುಂದೆ ಇದ್ದಾರೆ. ನಾವು ಈ ರೀತಿ ಕೂಗಾಡಿದರೆ ತಪ್ಪು ಸಂದೇಶ ಹೋಗುತ್ತದೆ. ನಿಮ್ಮ ಗಲಾಟೆ ನಿಲ್ಲಿಸಿ' ಎಂದು ಸೂಚಿಸಿದರು.

ಬಳಿಕ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ ಮೋದಿ, 'ಸಮುದಾಯದ ಎಲ್ಲಾ ಪಂಗಡಗಳನ್ನು ‌ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಪಕ್ಷಾತೀತವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ಯಾವುದೇ ಹೋರಾಟ, ಪ್ರತಿಭಟನೆ ಮಾಡಿ ಸರ್ಕಾರವನ್ನು ಒತ್ತಾಯಿಸುತ್ತಿಲ್ಲ. ನಾವೆಲ್ಲರೂ ಇಲ್ಲಿ ಪಕ್ಷಾತೀತವಾಗಿ ಸೇರಿದ್ದೇವೆ' ಎಂದು ಸಮಂಜಸ ನೀಡಿದರು.

ಚಾಮರಾಜನಗರ: ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನು ಇತರ ಹಿಂದುಳಿದ ವರ್ಗ (ಒಬಿಸಿ) ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT