ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಿತಿ ರಚಿಸಿ ಕಾರ್ಯೋನ್ಮುಖರಾಗಿ: ಅಧಿಕಾರಿಗಳೊಂದಿಗೆ ಸಚಿವ ನಿರಾಣಿ ಸಭೆ

Last Updated 1 ಜುಲೈ 2021, 3:43 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಕೋನದಿಂದ ವಿಜನ್–2050 ದಸ್ತಾವೇಜು ಸಿದ್ದಪಡಿಸಲು ಆತುರ ಮಾಡದೆ ಯಾವುದೇ ಕ್ಷೇತ್ರ ಬಿಟ್ಟು ಹೋಗದಂತೆ ಕ್ಷೇತ್ರವಾರು ಸಮಿತಿ ರಚಿಸಿ ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಅರ್. ನಿರಾಣಿ ತಿಳಿಸಿದರು.

ಕಲಬುರ್ಗಿ ವಿಜನ್-2050 ಕುರಿತಂತೆ ಶಿಕ್ಷಣ ವಿಷಯದ ಕುರಿತು ಬುಧವಾರ ಶಿಕ್ಷಣ ತಜ್ಞರು, ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತನಾಡಿದರು.

ಪ್ರಸ್ತುತ 14 ಉಪ ಸಮಿತಿಗಳನ್ನು ರಚಿಸಲಾಗಿದೆ. ಇದರ ಹೊರತಾಗಿ ಯಾವುದೇ ಕ್ಷೇತ್ರಗಳು ಬಿಟ್ಟುಹೋದಲ್ಲಿ ಅದನ್ನು ಪರಿಗಣಿಸಬೇಕು. 30 ವರ್ಷದ ದೀರ್ಘಕಾಲದ ಯೋಜನೆ ಸಿದ್ಧಪಡಿಸಬೇಕಾಗಿರುವುದರಿಂದ ಯವುದೇ ಆತುರ ಬೇಡ ಎಂದು ಅಭಿಪ್ರಾಯಪಟ್ಟರು.

ಹಿರಿಯ ಐಎಎಸ್ ಅಧಿಕಾರಿ ಕೆ.ಎಂ. ಜಾನಕಿ ಮಾತನಾಡಿ, ಜಿಲ್ಲೆಯಲ್ಲಿ ಈಗಿರುವ ಮೂಲಸೌಕರ್ಯಗಳನ್ನೇ ಬಳಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಬೇಕಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಶಾಲಾಭಿವೃದ್ಧಿಯ ಸಾಮಾಜಿಕ ಹೊಣೆಗಾರಿಕೆ ನೀಡಬೇಕು. ನಿಸ್ವಾರ್ಥವಾಗಿ ಒಂದು ತಂಡವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಿದಲ್ಲಿ ಶಿಕ್ಷಣ ಕ್ಷೇತ್ರ ಸುಧಾರಣೆ ಸಾಧ್ಯ ಎಂದರು.

ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಮಾತನಾಡಿ, ವಿಜನ್-2050 ಕುರಿತಂತೆ ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ, ನೀರಾವರಿ, ಕೃಷಿ, ವಾಣಿಜ್ಯ ಮತ್ತು ಕೈಗಾರಿಕೆ, ಮೂಲಸೌಕರ್ಯಗಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕ್ರೀಡೆ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೌಶಲಾಭಿವೃದ್ಧಿ ಹೀಗೆ 14 ಉಪ ಸಮಿತಿಗಳನ್ನು ರಚಿಸಿ ಆರಂಭಿಕ ಸಭೆ ಸಹ ನಡೆಸಿ ಅಗತ್ಯ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಓ ಡಾ.ದಿಲೀಷ್ ಶಶಿ ಮಾತನಾಡಿ, ಶಿಕ್ಷಣ ಕ್ಷೇತ್ರ ಸುಧಾರಣೆ ನಿಟ್ಟಿನಲ್ಲಿ ಮುಂದಿನ 5 ವರ್ಷದಲ್ಲಿ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳನ್ನು ಒಳಗೊಂಡಂತೆ ಮೂಲಸೌಕರ್ಯ ಒದಗಿಸುವುದು, ಆಟದ ಮೈದಾನ ಹೀಗೆ ಹಂತ ಹಂತವಾಗಿ ಕಾಲಮಿತಿಯಲ್ಲಿ ಆಗಬೇಕಿದೆ. ಜೊತೆಗೆ ಶಿಕ್ಷಕರ ನೇಮಕಾತಿಗೂ ಚಾಲನೆ ನೀಡಬೇಕಿದೆ ಎಂದರು.

ಡಿಡಿಪಿಐ ಅಶೋಕ ಭಜಂತ್ರಿ ಮಾತನಾಡಿ, 2019-20ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 28ನೇ ಸ್ಥಾನದಿಂದ 22ನೇ ಸ್ಥಾನಕ್ಕೇರಿದ್ದು, ಶೇ 74.39ರಷ್ಟು ಫಲಿತಾಂಶ ಬಂದಿದೆ. ಕೋವಿಡ್ ಹಿನ್ನೆಲೆ ಭೌತಿಕವಾಗಿ ತರಗತಿಗಳು ಶುರುವಾಗದ ಕಾರಣ ಗ್ರಾಮೀಣ ಭಾಗದ ಮಕ್ಕಳಿಗೆ ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳುವಿಕೆ ಕಷ್ಟವಾಗುತ್ತಿದೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನೊಂದಿಗೆ ಜಿಲ್ಲೆಯನ್ನು ಟಾಪ್ 10ರಲ್ಲಿ ಕೊಂಡೊಯ್ಯುವ ವಿಶ್ವಾಸವಿದೆ ಎಂದರು.

ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್, ವಿಧಾನಪರಿಷತ್ ಸದಸ್ಯ ಶಶಿಲ್ ನಮೋಶಿ, ಕಲಬುರ್ಗಿ ಪೊಲೀಸ್ ಕಮಿಷನರ್ ಡಾ. ವೈ.ಎಸ್. ರವಿಕುಮಾರ್ ಮಾತನಾಡಿದರು.

ಸಂವಾದದಲ್ಲಿ ಸಂಸದ ಡಾ.ಉಮೇಶ ಜಾಧವ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ಎಂ.ವೈ. ಪಾಟೀಲ, ಸುಭಾಷ ಗುತ್ತೇದಾರ, ಕನೀಜ್ ಫಾತಿಮಾ, ಡಾ. ಅವಿನಾಶ್ ಜಾಧವ, ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ್, ಎಸ್ಪಿ ಡಾ. ಸಿಮಿ ಮರಿಯಮ್ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

‘ಟಿಇಟಿ ತರಬೇತಿ ಕೇಂದ್ರ ಬೇಕು’

‘ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಯಾವುದಕ್ಕೂ ಕೊರತೆಯಿಲ್ಲ. ಹಿಂದುಳಿದ ಪ್ರದೇಶ ಎನ್ನುವ ಕೀಳರಿಮೆ ಹೋಗಲಾಡಿಸಲು ಮಕ್ಕಳಲ್ಲಿ ಪ್ರೇರೇಪಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು. ಶಿಕ್ಷಣ ಕ್ಷೇತ್ರ ಸುಧಾರಣೆಗೆ ಮೂಲಸೌಕರ್ಯ ಬಲಪಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಬೇಕು’ ಎಂದು ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಅಭಿಪ್ರಾಯಪಟ್ಟರು.

ಇಲ್ಲಿ ಶಿಕ್ಷಕರ ಕೊರತೆ ದೊಡ್ಡ ಸಮಸ್ಯೆಯಾಗಿದೆ. ಶಿಕ್ಷಕರ ನೇಮಕಾತಿಗೆ ಮಾನದಂಡವಾಗಿರುವ ಟಿಇಟಿ ಪರೀಕ್ಷೆಯಲ್ಲಿ ಇಲ್ಲಿನ ಅಭ್ಯರ್ಥಿಗಳು ಉತ್ತೀರ್ಣರಾಗುತ್ತಿಲ್ಲ. ಪರೀಕ್ಷೆ ಉತ್ತೀಣರಾಗುವುದಕ್ಕಾಗಿಯೇ ಒಂದು ತರಬೇತಿ ಕೇಂದ್ರ ಆರಂಭಿಸಬೇಕು ಮತ್ತು ಇದಕ್ಕೆ 10 ನುರಿತ ಶಿಕ್ಷಕರನ್ನು ನಿಯೋಜಿಸಬೇಕು. ಗಣಿತ, ವಿಜ್ಞಾನ ಮತ್ತು ಆಂಗ್ಲ ವಿಷಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT