ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪದವೀಧರ ಮತದಾರರು ತಪ್ಪದೇ ಮತ ಹಾಕಿ’

ಈಶಾನ್ಯ ಕರ್ನಾಟಕ ಪದವೀಧರ ಮತದಾರರಿಗೆ ಮತದಾನ ಜಾಗೃತಿ
Published 30 ಮೇ 2024, 7:00 IST
Last Updated 30 ಮೇ 2024, 7:00 IST
ಅಕ್ಷರ ಗಾತ್ರ

ಕಲಬುರಗಿ: ‘ವಿಧಾನ ಪರಿಷತ್ತಿನ ಈಶಾನ್ಯ ಕರ್ನಾಟಕ ಪದವೀಧರರ ಮತಕ್ಷೇತ್ರಕ್ಕೆ ಜೂನ್‌ 3ರಂದು ನಡೆಯಲಿರುವ ಚುನಾವಣೆಯಲ್ಲಿ ಪದವೀಧರರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮತದಾನ ಮಾಡಬೇಕು’ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರೂ ಆಗಿರುವ ಮತ ಕ್ಷೇತ್ರದ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ಕೋರಿದರು.

ನಗರದ ಡಾ.ಎಸ್.ಎಂ.ಪಂಡಿತ್‌ ರಂಗಮಂದಿರದಲ್ಲಿ ಬುಧವಾರ ಭಾರತದ ಚುನಾವಣಾ ಆಯೋಗ, ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿ,, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಈಶಾನ್ಯ ಕರ್ನಾಟಕ ಪದವೀಧರ ಮತದಾರರಿಗೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಜಿಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ‘ಪರಿಷತ್‌ ಚುನಾವಣೆಯಲ್ಲಿ ಮತದಾನವು ಮತಪತ್ರದ ಮೂಲಕ ನಡೆಯುತ್ತದೆ. ಪ್ರಾಶಸ್ತ್ಯ ನೀಡುವಾಗ ಸ್ವಲ್ಪ ತಪ್ಪಾದರೂ, ಮತ ತಿರಸ್ಕೃತವಾಗಬಹುದು. ಹೀಗಾಗಿ ನಿಮ್ಮ ಮತ ತಿರಸ್ಕೃತವಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಮತದಾರರಿಗೆ ಸಲಹೆ ನೀಡಿದರು.

ಪಾಲಿಕೆ ಆಯುಕ್ತ ಭುವನೇಶ ಪಾಟೀಲ ಮಾತನಾಡಿದರು. ಇದೇ ಸಂದರ್ಭದಲ್ಲಿ ಪದವೀಧರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದ ತರಬೇತಿದಾರರಾದ ಶಶಿಶೇಖರ ರೆಡ್ಡಿ ತರಬೇತಿ ನೀಡಿದರು.

ಕಲಬುರಗಿ ವೃತ್ತದ ಉಪಸಂರಕ್ಷಣಾಧಿಕಾರಿ ಸುಮಿತಕುಮಾರ ಪಾಟೀಲ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಬ್ದುಲ್ ಅಜೀಮ್, ಜಿಲ್ಲಾ ಪಂಚಾಯಿತಿ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಮಧುಮತಿ, ಡಿಡಿಪಿಯು ಶಿವಶರಣಪ್ಪ ಮೂಳೆಗಾಂವ, ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ಸೇರಿದಂತೆ ಅಧಿಕಾರಿಗಳು ಹಾಗೂ ಶಾಲಾ– ಕಾಲೇಜುಗಳ ಮುಖ್ಯಸ್ಥರು, ನೋಂದಾಯಿತ ಪದವೀಧರರು ಪಾಲ್ಗೊಂಡಿದ್ದರು.

ಮತ ಎಣಿಕೆ ಅಧಿಕಾರಿ-ಸಿಬ್ಬಂದಿಗೆ ತರಬೇತಿ

ಕಲಬುರಗಿ: ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಜೂನ್‌ 6ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತಎಣಿಕೆ ಅಧಿಕಾರಿ-ಸಿಬ್ಬಂದಿಗೆ ತರಬೇತಿ ನೀಡಲಾಯಿತು. ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಮತ್ತು ಸಹಾಯಕ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸಮ್ಮುಖದಲ್ಲಿ ರಾಷ್ಟ್ರೀಯಮಟ್ಟದ ಮಾಸ್ಟರ್ ಟ್ರೇನರ್ ಶಶಿಶೇಖರ ರೆಡ್ಡಿ ಅವರು ಎಣಿಕೆ ಸಿಬ್ಬಂದಿಗೆ ತರಬೇತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ಸೇರಿದಂತೆ ಮತ ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿ-ಸಿಬ್ಬಂದಿ ತರಬೇತಿಯಲ್ಲಿ ಭಾಗಿಯಾಗಿದ್ದರು.

ಮತ ಎಣಿಕೆ ಕೇಂದ್ರಕ್ಕೆ ಭೇಟಿ ಪರಿಶೀಲನೆ

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಜೂನ್‌ 4 ಹಾಗೂ ವಿಧಾನ ಪರಿಷತ್ತಿನ ಪದವೀಧರರ ಮತಕ್ಷೇತ್ರದ ಮತ ಎಣಿಕೆ ಜೂನ್‌ 6ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ಎರಡೂ ಮತಕ್ಷೇತ್ರಗಳ ಚುನಾವಣಾಧಿಕಾರಿಗಳಾದ ಕೃಷ್ಣ ಬಾಜಪೇಯಿ ಹಾಗೂ ಫೌಜಿಯಾ ತರನ್ನುಮ್ ಅವರು ಬುಧವಾರ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಮತ ಎಣಿಕೆ ಕಾರ್ಯದ ಸಿದ್ಧತೆಯನ್ನು ಪರಿಶೀಲಿಸಿದರು. ಲೋಕಸಭಾ ಚುನಾವಣೆಯ ಮತ ಎಣಿಕೆ ವಿವಿಧ ಐದು ಕಟ್ಟಡಗಳಲ್ಲಿ ನಡೆಯಲಿದ್ದು ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಹೇಮರಡ್ಡಿ ಮಲ್ಲಮ್ಮ ಸಂಶೋಧನಾ ಕೇಂದ್ರದ ಕಟ್ಟಡದಲ್ಲಿ ನಡೆಯಲಿದೆ. ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ಡಿಸಿಪಿ ಕನಿಕಾ ಸಿಕ್ರಿವಾಲ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ ಪಾಟೀಲ ಕಲಬುರಗಿ ತಹಶೀಲ್ದಾರ್‌ ಮಧುರಾಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT