ಕಲಬುರ್ಗಿ: ನಗರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಅವರು ಸೋಮವಾರ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಎರಡು, ಮೂರು ವರ್ಷಗಳಲ್ಲಿ ಸಂಸ್ಥೆಯನ್ನು ಲಾಭದಾಯಕವಾಗಿಸಲು ಶ್ರಮಿಸುವೆ.ಇನ್ನುಮುಂದೆ ನಷ್ಟ ಹಾಗೂ ಸೋರಿಕೆ ತಡೆಗೆ ಕ್ರಮ ಕೈಗೊಂಡು ಲಾಭದತ್ತ ಕೊಂಡೊಯ್ಯುವೆ ಎಂದರು.
ಇಲ್ಲಿಯವರೆಗೆ ಕೊರೊನಾ ಮಹಾಮಾರಿಯಿಂದಾಗಿ ಸಾರಿಗೆ ಸಂಸ್ಥೆಗಳು ಬಹಳಷ್ಟು ನಷ್ಟ ಅನುಭವಿಸಿದ್ದು, ಅದರಲ್ಲಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯೂ ಒಂದಾಗಿದೆ. ತೊಂದರೆ ಇದ್ದರೂ ಸಂಸ್ಥೆಯ ನೌಕರರಿಗೆ ಇದುವರಗೆ ನಮ್ಮ ಸರ್ಕಾರ ಸಂಬಳ ನೀಡುತ್ತಾ ಬಂದಿದೆ. ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಸಂಚರಿಸುವ ಬಸ್‌ಗಳು ಕೊರೊನಾದಿಂದ ನಿಲ್ಲಿಸಲಾಗಿದ್ದು, ತಕ್ಷಣ ಸೇವೆಗಳನ್ನು ಪ್ರಾರಂಭಿಸಬೇಕಾದ ದೊಡ್ಡ ಸವಾಲು ನಮ್ಮ ಮುಂದಿದೆ’ ಎಂದು ತಿಳಿಸಿದರು.
‘ಅನೇಕ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುತ್ತೇನೆ. ಪ್ರತಿಯೊಂದು ಹಳ್ಳಿ ಹಳ್ಳಿಗಳಿಗೆ ಬಸ್‍ಗಳನ್ನು ಕಲ್ಪಿಸಲು ಪ್ರಯತ್ನಿಸುತ್ತೇನೆ. ಹವಾನಿಯಂತ್ರಿತ ಬಸ್‌ಗಳನ್ನು ತರಲು ಪ್ರಯತ್ನಿಸುತ್ತೇನೆ. ಎಲ್ಲಾ ಸಂಸದರು ಮತ್ತು ಶಾಸಕರು ಅಭಿಪ್ರಾಯ ಪಡೆದುಕೊಂಡು ಕೆಲಸವನ್ನು ನಿರ್ವಹಿಸುತ್ತೇನೆ’ ಎಂದು ಭರವಸೆ ನೀಡಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚಿನಸೂರ, ಕಲಬುರ್ಗಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮೂಡ, ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ತಾಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಸಜ್ಜನ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಧಾರವಾಡ ಸಾರಿಗೆ ಹೆಚ್ಚುವರಿ ಆಯುಕ್ತ ಮಾರುತಿ ಸಾಂಬ್ರಾಣಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮರಾವ್, ಜಂಟಿ ಸಾರಿಗೆ ಇಲಾಖೆ ಆಯುಕ್ತ ಸಿ. ಮಲ್ಲಿಕಾರ್ಜುನ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.