ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಾ ಅಧ್ಯಕ್ಷರಾಗಿ ದಯಾಘನ ಅಧಿಕಾರ ಸ್ವೀಕಾರ

ಅಭಿವೃದ್ಧಿಗೆ ಅಗತ್ಯ ನೆರವು: ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ಭರವಸೆ
Last Updated 5 ನವೆಂಬರ್ 2020, 15:50 IST
ಅಕ್ಷರ ಗಾತ್ರ

ಕಲಬುರ್ಗಿ: ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ದಯಾಘನ ಧಾರವಾಡಕರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

2008ರಲ್ಲಿ ಚಂದ್ರಶೇಖರ ಪಾಟೀಲ ರೇವೂರ ಅವರು ಶಾಸಕರಾಗಿದ್ದ ಅವಧಿಯಲ್ಲಿ ದಯಾಘನ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ಇದೀಗ ಎರಡನೇ ಅವಧಿಗೆ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಚಂದ್ರಶೇಖರ ಪಾಟೀಲ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಬಳಿಕವೇ ಅಧಿಕಾರ ಸ್ವೀಕರಿಸುವ ಕಡತಕ್ಕೆ ಸಹಿ ಹಾಕಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಮಾಜಿ ಸದಸ್ಯ ಅಮರನಾಥ ಪಾಟೀಲ ಈ ಸಂದರ್ಭದಲ್ಲಿ ಹಾಜರಿದ್ದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಿದ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ‘ನಗರದಲ್ಲಿ ಉದ್ಯಾನವನಗಳು ಸೂಕ್ತ ನಿರ್ವಹಣೆ ಇಲ್ಲದೇ ಹಾಳಾಗಿವೆ. ಅವುಗಳನ್ನು ಅಭಿವೃದ್ಧಿಪಡಿಸುವುದು ಪ್ರಾಧಿಕಾರದ ಆದ್ಯತೆಯಾಗಬೇಕು. ಜೊತೆಗೆ, ಕಣ್ಣಿ ಮಾರ್ಕೆಟ್‌ ಅಭಿವೃದ್ಧಿಗೆ ಹೀರಾಪುರದಲ್ಲಿ ಜಾಗ ಗುರುತಿಸಲಾಗಿದ್ದು, ಪ್ರಾಧಿಕಾರ ಹಾಗೂ ಎಪಿಎಂಸಿಗಳು ಜಂಟಿಯಾಗಿ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುತ್ತಿವೆ. ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯಬಿದ್ದರೆ ಕೆಕೆಆರ್‌ಡಿಬಿಯಿಂದ ಅಗತ್ಯ ಅನುದಾನವನ್ನು ನೀಡಲಾಗುವುದು’ ಎಂದು ಭರವಸೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ದಯಾಘನ ಧಾರವಾಡಕರ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಸತಿ ಬಡಾವಣೆಗಳಿಗೆ ಅನುಮತಿ ಕೊಡಲು ಅವಕಾಶವಿಲ್ಲ. ಇನ್ನು ಮುಂದೆ ಹೀಗಾಗಲು ಅವಕಾಶ ನೀಡುವುದಿಲ್ಲ. ಅಕ್ರಮ ಲೇಔಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪ್ರಾಧಿಕಾರವು ರೈತರಿಂದ ಭೂಮಿ ಪಡೆದು ನಿವೇಶನಗಳನ್ನು ಅಭಿವೃದ್ಧಿಪಡಿಸಿ ಅವುಗಳಲ್ಲಿ ಅರ್ಧ ನಿವೇಶನಗಳನ್ನು ರೈತರಿಗೆ ನೀಡಲಾಗುವುದು. ನನ್ನ ಉದ್ದೇಶ ಬರೀ ಲೇಔಟ್‌ಗಳಿಗೆ ಅನುಮೋದನೆ ಕೊಡುವುದಲ್ಲ. ಅವುಗಳಿಗೆ ಮೂಲಸೌಕರ್ಯ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸುತ್ತೇನೆ. ನಗರದ ರಸ್ತೆಗಳು, ವೃತ್ತಗಳ ಸೌಂದರೀಕರಣಕ್ಕೆ ಒತ್ತು ನೀಡಲಾಗುವುದು’ ಎಂದರು.

ಪ್ರಾಧಿಕಾರದ ಆಯುಕ್ತ ರಾಚಪ್ಪ, ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ಸಿದ್ದಾಜಿ ಪಾಟೀಲ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ‍ಪಕ್ಷದ ವಕ್ತಾರ ಅರುಣ ಕುಲಕರ್ಣಿ, ಮುಖಂಡ ಪ್ರಲ್ಹಾದ್‌ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT