ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಥಮಿಕ ಹಂತದಿಂದಲೇ ಇಂಗ್ಲಿಷ್‌ಗೆ ವಿರೋಧ

ಸಿಪಿಎಂ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
Last Updated 27 ಮೇ 2019, 10:04 IST
ಅಕ್ಷರ ಗಾತ್ರ

ಕಲಬುರ್ಗಿ: ಪ್ರಾಥಮಿಕ ಶಾಲಾ ಹಂತದಿಂದಲೇ ಇಂಗ್ಲಿಷ್‌ ಮಾಧ್ಯಮ ಶಿಕ್ಷಣವನ್ನು ಜಾರಿಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಭಾರತೀಯ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ–ಸಿಪಿಐ–ಎಂ)ದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಮಿತಿ ಸದಸ್ಯ ಮಾರುತಿ ಮಾನ್ಪಡೆ, ‘2018–19ರ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದಂತೆ ಶೈಕ್ಷಣಿಕ ವರ್ಷದಿಂದಲೇ ಪ್ರಾಥಮಿಕ ಹಂತದಿಂದಲೇ ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾಯೋಗಿಕವಾಗಿ ರಾಜ್ಯದಾದ್ಯಂತ ಆರಂಭಿಸಲು ಸರ್ಕಾರ ಮುಂದಾಗಿದೆ. ಮಾತೃಭಾಷೆಯಲ್ಲಿ ಶಿಕ್ಷಣ ನೀಡಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಿದ್ದ ಸರ್ಕಾರವೇ ಕನ್ನಡದ ಮೇಲೆ, ಕನ್ನಡಿಗರ ಮೇಲೆ ಹಾಗೂ ಭಾಷಾವಾರು ಪ್ರಾಂತ ರಚನೆಯ ಘನ ಉದ್ದೇಶದ ಮೇಲೆ ನಡೆಸುತ್ತಿರುವ ಗಂಭೀರ ದಾಳಿಯಾಗಿದೆ’ ಎಂದು ಟೀಕಿಸಿದರು.

ಈ ಕೂಡಲೇ ಪ್ರಸ್ತಾವವನ್ನು ಹಿಂದಕ್ಕೆ ಪಡೆಯಬೇಕು. ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ‌

‘ಇಂಗ್ಲಿಷ್‌ ಶಿಕ್ಷಣವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುತ್ತಿರುವ ಲೂಟಿಕೋರ ಬಹುರಾಷ್ಟ್ರೀಯ ಸಂಸ್ಥೆಗಳ ಪರವಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣ ನೀತಿಗಳ ಮುಂದುವರಿಕೆಯಾಗಿದೆ. ಎಲ್ಲೆಲ್ಲೂ ಇಂಗ್ಲಿಷ್‌ ಭಾಷೆ ಅನಿವಾರ್ಯವೆಂಬ ಹುಸಿ ಭಾವನೆಯನ್ನು ಹುಟ್ಟುಹಾಕಿ ನಾಗರಿಕರನ್ನು ಲೂಟಿಗೊಳಿಪಡಿಸಲಾಗುತ್ತದೆ’ ಎಂದರು.

ಪಬ್ಲಿಕ್‌ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ವಿರೋಧ: ಅಂಗನವಾಡಿ ಕೇಂದ್ರಗಳನ್ನು ಬಂದ್‌ ಮಾಡುವ ನಿಟ್ಟಿನಲ್ಲಿ ಸರ್ಕಾರ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಎಲ್‌ಕೆಜೆ, ಯುಕೆಜಿ ಶಿಕ್ಷಣ ನೀಡಲು ಮುಂದಾಗಿರುವ ಕ್ರಮಕ್ಕೆ ಸಿಪಿಎಂನ ಕಾರ್ಮಿಕ ಮುಂದಳ ಸಿಐಟಿಯು ಅಧೀನದಲ್ಲಿರುವ ಕರ್ನಾಟಕ ರಾಝ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಶಾಲೆಗಳಲ್ಲಿ ಪೂರ್ವಪ್ರಾಥಮಿಕ ಶಾಲೆಗಳನ್ನು ತೆರೆದು ಮೂರೂವರೆ ವರ್ಷ ಮೀರಿದ ಮಕ್ಕಳಿಗೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಶಾಲೆ ನಡೆಸುವ ಆದೇಶದಿಂದ ಅಂಗನವಾಡಿಗಳಿಗೆ ಕುತ್ತು ಬರಲಿದೆ ಎಂದು ಕಾರ್ಯಕರ್ತೆಯರು ಆತಂಕ ವ್ಯಕ್ತಪಡಿಸಿದರು.

ಆದೇಶ ಜಾರಿಗೊಳಿಸುವ ಪೂರ್ವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ, ಶಿಕ್ಷಣ ತಜ್ಞರೊಂದಿಗೆ, ಸಂಘಟನೆಗಳೊಂದಿಗೆ ಸಂವಾದ ನಡೆಸದೇ ಏಕಮುಖವಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಇರುವ ಅಂಗನವಾಡಿ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಬದಲಿಗೆ, ಇದೇ ತರಹದ ಮತ್ತೊಂದು ವ್ಯವಸ್ಥೆಯನ್ನು ತರುವುದರಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಲಿದೆ. ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಅಂಗನವಾಡಿಯಲ್ಲೇ ನಡೆಸಬೇಕು. ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿ ಕೊಡಬೇಕು ಎಂದು ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮ್ಮಶೆಟ್ಟಿ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಗೌರಮ್ಮ ಪಾಟೀಲ, ಪ್ರಧಾನ ಕಾರ್ಯದರ್ಶಿ ಗಂಗಮ್ಮ ಬಿರಾದಾರ ಹಾಗೂ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT