ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರದಲ್ಲಿ 26,242 ಮತದಾರರು, 147 ಮತಗಟ್ಟೆ

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಕುರಿತು ಚುನಾವಣಾಧಿಕಾರಿ ಡಾ.ಎನ್.ವಿ.ಪ್ರಸಾದ್ ಮಾಹಿತಿ
Last Updated 5 ಅಕ್ಟೋಬರ್ 2020, 14:48 IST
ಅಕ್ಷರ ಗಾತ್ರ

ಕಲಬುರ್ಗಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಈ ಬಾರಿ 26,242 ಶಿಕ್ಷಕರು ಮತದಾನ ಮಾಡಲು ಅರ್ಹತೆ ಪಡೆದಿದ್ದು, ಆರು ಜಿಲ್ಲೆಗಳಲ್ಲಿ 147 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಕೋವಿಡ್–19 ಸುರಕ್ಷತಾ ಕ್ರಮಗಳೊಂದಿಗೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಯೂ ಆದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ. ಪ್ರಸಾದ್‌ ತಿಳಿಸಿದರು.

ಸೋಮವಾರ ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ‘ಕೋವಿಡ್‌ ಸಂದರ್ಭದಲ್ಲಿಯೂ ನಮ್ಮ ಸಿಬ್ಬಂದಿ ಶಿಕ್ಷಕರ ಮಧ್ಯೆ ತಿಳಿವಳಿಕೆ ನೀಡಿ 6 ಸಾವಿರ ಮತದಾರರನ್ನು ಹೊಸದಾಗಿ ಸೇರ್ಪಡೆ ಮಾಡಿಸಿದ್ದಾರೆ. ಅಕ್ಟೋಬರ್ 1ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಅಕ್ಟೋಬರ್ 8ರವರೆಗೆ ನಾಮಪತ್ರ ಸಲ್ಲಿಸಬಹುದು. 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ 12ರವರೆಗೆ ನಾಮಪತ್ರಗಳನ್ನು ವಾಪಸ್ ಪಡೆಯಲು ಅವಕಾಶವಿದೆ. 28ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಚುನಾವಣೆ ನಡೆಯಲಿದೆ. ನವೆಂಬರ್‌ 2ರಂದು ಮತಗಳ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.

ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿ ಕೆಲಸ ನಿರ್ವಹಿಸಲಿದ್ದಾರೆ. ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಡಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಕೋವಿಡ್ ಇರುವುದರಿಂದ ಕಡ್ಡಾಯವಾಗಿ ಮತಗಟ್ಟೆ ಬರುವ ಶಿಕ್ಷಕ ಮತದಾರರು ಮಾಸ್ಕ್‌ಗಳನ್ನು ಧರಿಸಿಕೊಂಡು ಬರಬೇಕು. ಮತಗಟ್ಟೆಗಳ ಬಳಿ ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗಿರುತ್ತದೆ. ಚುನಾವಣಾ ಬಹಿರಂಗ ಸಭೆಗಳನ್ನು ನಡೆಸುವುದಕ್ಕೂ ಮುನ್ನ ಕಡ್ಡಾಯವಾಗಿ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕು. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾಕಷ್ಟು ಜನ ಮತದಾರರಾಗಲು ಅರ್ಹತೆಯುಳ್ಳವರು ಉಳಿದುಕೊಂಡಿದ್ದಾರೆ ಎಂಬ ಅಭ್ಯರ್ಥಿಗಳ ಆಕ್ಷೇಪದ ಕುರಿತು ಪ್ರತಿಕ್ರಿಯೆ ನೀಡಿದ ಪ್ರಸಾದ್, ‘ನಮ್ಮ ಸಿಬ್ಬಂದಿ ಪ್ರತಿ ಶಿಕ್ಷಣ ಸಂಸ್ಥೆಗೆ ತೆರಳಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವಂತೆ ಜಾಗೃತಿ ಮೂಡಿಸಿದ್ದಾರೆ. ಇಷ್ಟಾಗಿಯೂ ಅಗತ್ಯ ದಾಖಲೆಗಳನ್ನು ವಿಫಲವಾದರೆ ಅಧಿಕಾರಿಗಳು ಏನು ಮಾಡಲು ಸಾಧ್ಯ’ ಎಂದರು.

ಪ್ರಾದೇಶಿಕ ಆಯುಕ್ತರ ಕಚೇರಿ ಅಧಿಕಾರಿ ಜಹೀರಾ ನಸೀಂ ಸುದ್ದಿಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT