ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್, ಬಿಜೆಪಿ ನಿರಂತರ ಯತ್ನ

ಬೆಂಗಳೂರಿಗೆ ಸ್ಥಳಾಂತರಗೊಂಡ ಚಟುವಟಿಕೆ
Last Updated 8 ಸೆಪ್ಟೆಂಬರ್ 2021, 3:25 IST
ಅಕ್ಷರ ಗಾತ್ರ

ಕಲಬುರ್ಗಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸರಳ ಬಹುಮತಕ್ಕೆ ಬೇಕಾಗುವಷ್ಟು ಸ್ಥಾನಗಳನ್ನು ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ಜೆಡಿಎಸ್‌ನ ನಾಲ್ವರು ಸದಸ್ಯರ ಬೆಂಬಲ ಪಡೆಯಲು ಎರಡೂ ಪಕ್ಷಗಳು ಪ್ರಯತ್ನವನ್ನು ಇನ್ನಷ್ಟು ಬಿರುಸುಗೊಳಿಸಿದ್ದು, ರಾಜಕೀಯ ಚಟುವಟಿಕೆ ಬೆಂಗಳೂರಿಗೆ ಸ್ಥಳಾಂತರಗೊಂಡಿದೆ.

ಜೆಡಿಎಸ್‌ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ನಾಲ್ವರು ಸದಸ್ಯರನ್ನು ಮಂಗಳವಾರ ಬೆಂಗಳೂರಿಗೆ ಕರೆಸಿಕೊಂಡು ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಜೆಡಿಎಸ್‌ನಿಂದ ಆಯ್ಕೆಯಾದ ಅಲಿಮುದ್ದೀನ್ ಪಟೇಲ್, ವಿಶಾಲ ನವರಂಗ್, ಸಾಜಿದ್ ಕಲ್ಯಾಣಿ, ವಿಜಯಲಕ್ಷ್ಮಿ ಅವರು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ ಅವರು ಈಗಾಗಲೇ ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಕಲಬುರ್ಗಿಯಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಮತ್ತೊಂದೆಡೆ 27 ಸ್ಥಾನಗಳನ್ನೂ ಪಡೆದರೂ ಅಧಿಕಾರದಿಂದ ವಂಚಿತವಾಗುವ ಪರಿಸ್ಥಿತಿ ಬಂದೊದಗಿದ್ದನ್ನು ಸವಾಲಾಗಿ ಸ್ವೀಕರಿಸಿರುವ ಕಾಂಗ್ರೆಸ್‌ ತಾನೂ ಪ್ರಯತ್ನ ಮುಂದುವರಿಸಿದೆ.

‘ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೆಡಿಎಸ್ ಬೆಂಬಲ ಪಡೆಯುವ ಹೊಣೆಯನ್ನು ವಹಿಸಲಾಗಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕುಮಾರಸ್ವಾಮಿ ಅವರಿಗೆ ಕರೆ ಮಾಡಿರುವ ಖರ್ಗೆ ಅವರು ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ’ ಎಂದು ಆ ಪಕ್ಷದವರು ಹೇಳುತ್ತಿದ್ದಾರೆ.

ಈ ಬೆಳವಣಿಗೆಗಳ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ದೇವೇಗೌಡ, ‘ಜೆಡಿಎಸ್ ಬೆಂಬಲ ಬೇಕು ಎಂದು ಖರ್ಗೆ ಅವರು ಕರೆ ಮಾಡಿದ್ದಾರೆ. ಈ ಕುರಿತು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚಿಸಲಿ. ಆಮೇಲೆ ನೋಡೋಣ. ಸ್ಥಳೀಯ ಮುಖಂಡರ ಅಭಿಪ್ರಾಯ ಕೇಳದೇ ಯಾವುದೇ ತೀರ್ಮಾನ ಕೈಗೊಳ್ಳದಂತೆ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ’ ಎಂದಿದ್ದಾರೆ.

ಪಕ್ಷದ ಅಭ್ಯರ್ಥಿಗಳನ್ನು ಕರೆಸಿಕೊಳ್ಳುವ ಉದ್ದೇಶದ ಹಿಂದೆ ಬೇರೆ ಪಕ್ಷದವರು ತಮ್ಮ ಸದಸ್ಯರನ್ನು ಹೈಜಾಕ್ ಮಾಡದಂತೆ ತಡೆಯುವ ತಂತ್ರಗಾರಿಕೆಯೂ ಇದೆ ಎನ್ನಲಾಗಿದೆ.

ಡಿ.ಕೆ. ಶಿವಕುಮಾರ್‌ಗೆ ಪ್ರತಿಷ್ಠೆಯ ಪ್ರಶ್ನೆ
‘ಹುಬ್ಬಳ್ಳಿ–ಧಾರವಾಡ, ಬೆಳಗಾವಿಯಲ್ಲಿ ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಅಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಕನಸು ಕಮರಿದೆ. ಇದ್ದುದರಲ್ಲಿ ಕಲಬುರ್ಗಿಯಲ್ಲಿ ಈ ಆಸೆ ಜೀವಂತವಾಗಿದೆ. ಅಲ್ಲದೇ, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್‌ ಅವರಿಗೆ ಕಲಬುರ್ಗಿ ಪಾಲಿಕೆಯ ಕಾಂಗ್ರೆಸ್ ಅಧಿಕಾರಕ್ಕೆ ತರುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿಮಲ್ಲಿಕಾರ್ಜುನ ಖರ್ಗೆ ಅವರ ಮೂಲಕ ಡಿ.ಕೆ. ಶಿವಕುಮಾರ್‌ ಅವರು ಜೆಡಿಎಸ್‌ ವರಿಷ್ಠರು ಮನವೊಲಿಸಲು ಪ್ರಯತ್ನ ಮುಂದುವರಿಸಿದ್ದಾರೆ’ ಎಂಬುದು ಕಾಂಗ್ರೆಸ್‌ ಮೂಲಗಳ ಮಾಹಿತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT