ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಟಿ ಮೀಸಲಾತಿಗಾಗಿ ಜ.4ಕ್ಕೆ ಉಪವಾಸ ಸತ್ಯಾಗ್ರಹ: ಪ್ರಣವಾನಂದ ಸ್ವಾಮೀಜಿ

Published 29 ಡಿಸೆಂಬರ್ 2023, 13:31 IST
Last Updated 29 ಡಿಸೆಂಬರ್ 2023, 13:31 IST
ಅಕ್ಷರ ಗಾತ್ರ

ಕಲಬುರಗಿ: ‘ಈಡಿಗ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಜ.4ರಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ನಾರಾಯಣಗುರು ಶಕ್ತಿ ಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜದ ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಹೋರಾಟ ಮಾಡುತ್ತಿದ್ದು, ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳ ಎದುರು ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಈಗಾಗಲೇ 6 ಜಿಲ್ಲೆಗಳಲ್ಲಿ ಮುಗಿದಿದೆ’ ಎಂದು ಹೇಳಿದರು.

‘ರಾಜ್ಯ ಕಾಂಗ್ರೆಸ್‌ ಸರ್ಕಾರ ಈಡಿಗ ಸಮಾಜವನ್ನು ಕಡೆಗಣಿಸುತ್ತಿದೆ. ಕಳೆದ ಬಿಜೆಪಿ ಸರ್ಕಾರ ನಾರಾಯಣ ಗುರು ನಿಗಮ ಘೋಷಣೆ ಮಾಡಿ ₹25 ಲಕ್ಷವನ್ನು ಕುಲಶಾಸ್ತ್ರ ಅಧ್ಯಯನಕ್ಕೆ ಘೋಷಿಸಿತ್ತು. ಕಾಂಗ್ರೆಸ್‌ ಸರ್ಕಾರ ಏಳು ನಿಗಮಕ್ಕೆ ಹಣ ಘೋಷಣೆ ಮಾಡಿದೆ. ಆದರೆ, ನಾರಾಯಣ ಗುರು ನಿಗಮಕ್ಕೆ ಹಣ ಘೋಷಣೆ ಮಾಡಿಲ್ಲ. ಕುಲಶಾಸ್ತ್ರ ಅಧ್ಯಯನವನ್ನೂ ಮಾಡುತ್ತಿಲ್ಲ’ ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರ ಸಮುದಾಯದವರಿಗೆ 2 ಸಚಿವ ಸ್ಥಾನ, 3 ನಿಗಮಗಳಿಗೆ ಅಧ್ಯಕ್ಷ ಸ್ಥಾನ ನೀಡಿತ್ತು. ಕಾಂಗ್ರೆಸ್ ಸರ್ಕಾರ ಒಂದೇ ಸಚಿವ ಸ್ಥಾನ ನೀಡಿದೆ. ಕಾಂಗ್ರೆಸ್ ಸರ್ಕಾರ ಈಡಿಗ ಸಮುದಾಯದ ನೋವುಗಳನ್ನು ಅರ್ಥೈಸಿಕೊಳ್ಳುತ್ತಿಲ್ಲ. ವಿಧಾನಸಭೆಯಲ್ಲಿ 10 ಸ್ಥಾನ ಕೇಳಿದರೆ, 7 ಜನರಿಗೆ ಟಿಕೆಟ್ ನೀಡಲಾಗಿತ್ತು. 4 ಜನ ಗೆದ್ದಿದ್ದಾರೆ. ಕಾಂಗ್ರೆಸ್‌ ಸರ್ಕಾರ ಸಮಾಜದ ಬೇಡಿಕೆಗಳನ್ನು ಕಡೆಗಣಿಸಿದರೆ, ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಬೆಟ್ಟದಬಾಳಕುಂದಿ ಗ್ರಾಮದಿಂದ ಬೆಂಗಳೂರು ವಿಧಾನಸೌಧದವರೆಗೆ ಮಾರ್ಚ್‌ ಎರಡನೇ ವಾರದಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

‘ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಹಣ ಮಂಜೂರು ಮಾಡಬೇಕು, ಎಸ್‌ಟಿ ಮೀಸಲಾತಿಗಾಗಿ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬುದೂ ಸೇರಿ 16 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸತ್ಯಾಗ್ರಹ ನಡೆಸುತ್ತೇವೆ’ ಎಂದರು.

ವೆಂಕಟೇಶ ಕಡೇಚೂರ, ಆರ್ಯ ಈಡಿಗ ಹೋರಾಟ ಸಮಿತಿ ಪದಾಧಿಕಾರಿ ಕುಪೇಂದ್ರ ಗುತ್ತೇದಾರ, ರಾಜೇಶ ಗುತ್ತೇದಾರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT