ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ವಜಾಕ್ಕೆ ಪ್ರಿಯಾಂಕ್ ಖರ್ಗೆ ಒತ್ತಾಯ

Last Updated 12 ಏಪ್ರಿಲ್ 2022, 9:24 IST
ಅಕ್ಷರ ಗಾತ್ರ

ಕಲಬುರಗಿ: ಗುತ್ತಿಗೆದಾರ, ಬೆಳಗಾವಿಯ ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ವಜಾಗೊಳಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂತೋಷ ಪಾಟೀಲ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ. ಮರಣ ಪತ್ರದಲ್ಲಿ ಸಚಿವ ಈಶ್ವರಪ್ಪನವರ ಹೆಸರು ಉಲ್ಲೇಖವಿರುವುದರಿಂದ ಅವರನ್ನ ವಜಾ ಮಾಡಬೇಕು. ಗುತ್ತಿಗೆದಾರರು ಈ ಮುಂಚೆ ಸರ್ಕಾರ ಶೇ 40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಆದರೂ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಪ್ರತಿಯೊಂದಕ್ಕೂ ಸರ್ಕಾರ ದಾಖಲೆ ಕೇಳುತ್ತಿದೆ. ಈಗ ಒಂದು ಜೀವ ಹೋಗಿದೆ. ಇದಕ್ಕಿಂದ ಪುರಾವೆ ಬೇಕಾ? ಇದಕ್ಕೆ ಯಾರು ಹೊಣೆ’ ಎಂದು ಪ್ರಶ್ನಿಸಿದರು.

40 ಪರ್ಸೆಂಟ್ ಕಮಿಷನ್ ಬಗ್ಗೆ ಈ ಹಿಂದೆ ಅನೇಕ ಬಾರಿ ಸಂತೋಷ ಹೇಳಿದ್ದರು. ಆದರೆ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರಲಿಲ್ಲ. ನಾ ಖಾವುಂಗಾ ಖಾನೇಕೋಭಿ ನಹಿ ದೇವುಂಗಾ ಎಂದು ಪ್ರಧಾನಿ ಹೇಳಿದ್ದರು. ಆದರೆ, ಸರ್ಕಾರದಲ್ಲಿ ಎಲ್ಲವೂ ನಡೆಯುತ್ತಿದೆ. ಈ ವಿಷಯವನ್ನ ಬೆಳಗಾವಿ, ಬೆಂಗಳೂರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೆವು. ಆದರೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ದುರ್ದೈವವೆಂದರೆ ಚರ್ಚೆ ಮಾಡಲು ನಿಮ್ಮ ಬಳಿ ಸಾಕ್ಷಿ ಇದೆಯಾ ಅಂತಾ ಕೇಳಿದ್ದರು ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆರ್‌ಎಸ್‌ಎಸ್ ಕೈಗೊಂಬೆಯಾಗಿದ್ದು, ಅಸಹಾಯಕರಾಗಿದ್ದಾರೆ. ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದವರ ಮೇಲೆ ಕ್ರಮ ತೆಗೆದುಕೊಳ್ಳದ ಮುಖ್ಯಮಂತ್ರಿ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರಾ? ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನರ ಹಿತ ಬಲಿ ಕೊಡುತ್ತಿದ್ದಾರೆ ಎಂದು‌ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT