ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಿ

ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹ
Last Updated 21 ಅಕ್ಟೋಬರ್ 2020, 16:28 IST
ಅಕ್ಷರ ಗಾತ್ರ

ಚಿತ್ತಾಪುರ: ಮಳೆ ಮತ್ತು ಪ್ರವಾಹದಿಂದ ಸಂತ್ರಸ್ತರಾದ ಜನರಿಗೆ ಸರ್ಕಾರ ಶೀಘ್ರ ಪರಿಹಾರ ನೀಡಬೇಕು ಎಂದು ಶಾಸಕ ಪ್ರಿಯಾಂಕ್ ಎಂ.ಖರ್ಗೆ ಅವರು ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಬುಧವಾರ ಪತ್ರ ಬರೆದಿರುವ ಅವರು, ಪ್ರವಾಹದಿಂದ ಮುಳುಗಡೆಯಾಗಿರುವ ಗ್ರಾಮಗಳ ಸ್ಥಳಾಂತರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ಪ್ರವಾಹದಿಂದ ಕುಸಿದ ಮನೆಗಳ ಪುನರ್ ನಿರ್ಮಾಣಕ್ಕೆ ಹಾಗೂ ಹಾನಿಯಾದ ಮನೆಗಳ ದುರಸ್ತಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಳೆ ಮತ್ತು ಪ್ರವಾಹದ ನೀರು ಮನೆಗಳಿಗೆ ನುಗ್ಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಧವಸಧಾನ್ಯ ನೀರು ಪಾಲಾಗಿದೆ. ಅಂತಹ ಮನೆಗಳ ಜನರಿಗೆ ಕೂಡಲೇ ಪಡಿತರ ವಿತರಣೆ ಮಾಡಬೇಕು. ಬದುಕು ಸಾಗಿಸಲು ರಸ್ತೆ ಬದಿಯಲ್ಲಿ ಜನರು ಇಟ್ಟುಕೊಂಡಿದ್ದ ಅಂಗಡಿಗಳು ಪ್ರವಾಹಕ್ಕೆ ಹಾನಿಯಾಗಿವೆ. ಕೃಷಿ, ತೋಟಗಾರಿಕೆ ಬೆಳೆ ಅಪಾರ ಹಾನಿಯಾಗಿದೆ.

ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ, ಜಲಸಂಪನ್ಮೂಲ, ಶಿಕ್ಷಣ, ಆರೋಗ್ಯ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಮೂಲಸೌಲಭ್ಯಗಳು ಹಾನಿಯಾಗಿವೆ. ತಕ್ಷಣ ದುರಸ್ತಿ ಕೆಲಸಕ್ಕೆ ಅನುದಾನ ಬಿಡುಗಡೆ ಮಾಡಬೇಕು. ಮುಂದೆ ಪ್ರವಾಹ ಬಂದರೂ ಹಾನಿಯಾಗದ ರೀತಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು.

ಪ್ರವಾಹದಿಂದ ಕುಡಿಯುವ ನೀರು ಕಲುಷಿತಗೊಂಡಿದೆ. ಜನರಿಗೆ ಶುದ್ಧ ನೀರು ಒದಗಿಸಬೇಕು. ಪ್ರವಾಹಪೀಡಿತ ಗ್ರಾಮಗಳಲ್ಲಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಕೊರೊನಾ ಟೆಸ್ಟಿಂಗ್ ಡೈವ್ ಮತ್ತು ಆರೋಗ್ಯ ತಪಾಸಣಾ ಶಿಬಿರ ಆರಂಭಿಸಬೇಕು. ಮಳೆ, ಪ್ರವಾಹದಿಂದ ಹಾಳಾದ ಆಸ್ತಿ, ಶಿಕ್ಷಣ ದಾಖಲೆಗಳನ್ನು ಹೊಸದಾಗಿ ತಾಲ್ಲೂಕು ಕೇಂದ್ರದಲ್ಲೆ ನೀಡುವ ವ್ಯವಸ್ಥೆ ಮಾಡಬೇಕು. ವಿದ್ಯುತ್ ದುರಸ್ತಿ ಕೆಲಸ ಕೈಗೊಳ್ಳಬೇಕು ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT