ಬುಧವಾರ, ಡಿಸೆಂಬರ್ 1, 2021
21 °C

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಒತ್ತು: ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ಅತಿ ಹೆಚ್ಚು ಬಡವರು, ಗುಳೆಹೋಗುವವರು ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚಾಗಿದ್ದಾರೆ. ಹೀಗಾಗಿ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ’ ಎಂದು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಹಿಂದಿನ ಅವಧಿಯಲ್ಲಿ ಕಲಬುರ್ಗಿಯಲ್ಲಿ ಸಂಪುಟ ಸಭೆ ನಡೆಸಿ, ಈ ಭಾಗದ ಯೋಜನೆಗಳಿಗೆ ಅನುದಾನ ನೀಡಿದ್ದರು. ಗುಲಾಮಗಿರಿಯ ಸಂಕೇತ ಕಳಚಲು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ವರ್ಷದ ಹಿಂದೆ ನಾಮಕರಣ ಮಾಡಿದ್ದಾರೆ. ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ’ ಎಂದು ಬಣ್ಣಿಸಿದರು.

‘ಸಮಾಜ ಕಲ್ಯಾಣ ಇಲಾಖೆಯಿಂದ ಈ ಭಾಗದಲ್ಲಿ ₹30 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಿದ್ದು, ಕೆಲವೊಂದು ಪೂರ್ಣಗೊಂಡಿವೆ. ಅವುಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ನೆರವೇರಿಸಿದರು’ ಎಂದರು.

‘ಕಳೆದ ವರ್ಷ ರಾಜ್ಯದಲ್ಲಿ ಬರ, ನೆರೆ ಮತ್ತು ಪ್ರವಾಹದ ಸಂಕಷ್ಟ ಇತ್ತು. ಈ ವರ್ಷ ನೆರೆ ಮತ್ತು ಕೊರೊನಾ ಸಂಕಷ್ಟ ಎದುರಾಗಿದೆ. ಈ ಸಂಕಷ್ಟಗಳ ಮಧ್ಯೆಯೂ ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ’ ಎಂದು ಹೇಳಿದರು.

ಉಕ್ಕಿನ ಮನುಷ್ಯ: ಹೈದರಾಬಾದ್‌ ನಿಜಾಮನಿದಂದ ಈ ಪ್ರದೇಶವನ್ನು ವಿಮೋಚನೆಗೊಳಿಸಿದ್ದು ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರು.  ಈ ಭಾಗಕ್ಕೆ ಮರುನಾಮಕರಣ ಮಾಡಿರುವ ಯಡಿಯೂರಪ್ಪ ಸಹ ಉಕ್ಕಿನ ಮನುಷ್ಯ  ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಬಣ್ಣಿಸಿದರು.

ದೆಹಲಿಗೆ ಮುಖ್ಯಮಂತ್ರಿ

ವಿಮಾನ ನಿಲ್ದಾಣದತ್ತ ತೆರಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಲ್ಲಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ತೆರಳಲಿದ್ದಾರೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರೂ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು