ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹ

ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದಿಂದ ಜಿಲ್ಲಾಡಳಿತದ ಭವನದ ಎದುರು ಪ್ರತಿಭಟನೆ
Published 23 ಜೂನ್ 2024, 5:27 IST
Last Updated 23 ಜೂನ್ 2024, 5:27 IST
ಅಕ್ಷರ ಗಾತ್ರ

ಕಲಬುರಗಿ: ‘ಕನ್ನಡಿಗರ ಬದುಕು ಹಸನಾಗಿಸಲು ರಾಜ್ಯ ಸರ್ಕಾರ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಕಲಬುರಗಿ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟಿಸಲಾಯಿತು.

ಸೇನೆಯ ಮುಖಂಡರು, ಸದಸ್ಯರು ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಜಿಲ್ಲಾಡಳಿತ ಭವನದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬಳಿಕ ಜಿಲ್ಲಾಡಳಿತ ಭವನದ ಎದುರು ಮಾತನಾಡಿದ ಸಂಘಟನೆಯ ಕಲಬುರಗಿ ವಿಭಾಗೀಯ ಅಧ್ಯಕ್ಷ ಪ್ರವೀಣ ಕಟ್ಟಿಮನಿ, ‘1984ರಲ್ಲಿ ಸಮಿತಿ ರಚನೆಯಾಗಿ, 1986ರಲ್ಲಿ ವರದಿ ಸಲ್ಲಿಕೆಯಾದರೂ, ಈತನಕ ಯಾವುದೇ ಸರ್ಕಾರಗಳು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಿಲ್ಲ. ಸರ್ಕಾರ, ಜನಪ್ರತಿನಿಧಿಗಳು ಕನ್ನಡಿಗರ ಅಭಿವೃದ್ಧಿ ಬಯಸುವುದಾದರೆ, ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೊಡ್ಡಮನಿ ಮಾತನಾಡಿ, ‘ನೆರೆಯ ರಾಜ್ಯಗಳಾದ ತಮಿಳುನಾಡಿನಲ್ಲಿ ಸ್ಥಳೀಯ ಭಾಷಿಕರಿಗೆ ಶೇ90ರಷ್ಟು, ಆಂಧ್ರಪ್ರದೇಶದಲ್ಲಿ ಶೇ80ರಷ್ಟು ಮೀಸಲಾತಿ ಜಾರಿಗೆ ತಂದಿವೆ. ರಾಜ್ಯ ಸರ್ಕಾರವೂ ಕೂಡಲೇ ಮಹಿಷಿ ವರದಿ ಜಾರಿಗಳಿಸಿ ಕನ್ನಡಿಗರ ಉದ್ಯೋಗ ಪಡೆಯಲು ನೆರವಾಗಬೇಕು’ ಎಂದು ಒತ್ತಾಯಿಸಿದರು.

ಮಲ್ಲಿಕಾರ್ಜುನ ಗಂವಾರ ಮಾತನಾಡಿದರು. ಬಳಿಕ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT