ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆಗಟ್ಟಿ: ದಲಿತ ಹಕ್ಕುಗಳ ಸಮಿತಿ

ಕಲಬುರ್ಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಮೇಲಿನ ಹಲ್ಲೆಗಳನ್ನು ತಡೆಗಟ್ಟಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಮುಖಂಡರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧೆಡೆ ಪರಿಶಿಷ್ಟರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಮೌನ ವಹಿಸಿದೆ. ಸ್ಥಳೀಯವಾಗಿ ಪೊಲೀಸ್ ಇಲಾಖೆ ರಾಜಕೀಯ ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣಿದು ದೌರ್ಜನ್ಯ ಎಸಗಿದವರ ಮೇಲೆ ಕ್ರಮಕೈಗೊಳ್ಳುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆ ಕೊರೊನಾ ಕಾಲದಲ್ಲೂ ಪರಿಶಿಷ್ಟರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುತ್ತಿಲ್ಲ. ಇಲಾಖೆಯಡಿರುವ ಅಭಿವೃದ್ದಿ ನಿಗಮ ಮತ್ತು ಮಂಡಳಿಗಳು ಸಂಪೂರ್ಣವಾಗಿ ನಿಷ್ಕ್ರಿಯವಾಗಿವೆ ಎಂದು ಪ್ರತಿಭಟನಾಕಾರರು ದೂರಿದರು.
ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಸುಧಾಮ ಧನ್ನಿ ಮಾತನಾಡಿ, ಕೋವಿಡ್ ಸಂಕಷ್ಟ ಕಾಲದಲ್ಲೂ ಪರಿಶಿಷ್ಟರ ಮೇಲೆ ದೌರ್ಜನ್ಯ ಮುಂದುವರಿದಿದೆ. ಪರಿಶಿಷ್ಟ ಸಮಾಜದವರಿಗೆ ವಾಸಿಸಲು ಮನೆಗಳಿಲ್ಲ, ಮೃತಪಟ್ಟರೆ ಅಂತ್ಯ ಸಂಸ್ಕಾರ ಮಾಡಲು ಸ್ಮಶಾನಗಳಿಲ್ಲ. ಮೊದಲೇ ಬಡತನ, ನಿರುದ್ಯೋಗದಿಂದ ಬಳಲುತ್ತಿದ್ದ ಪರಿಶಿಷ್ಟರು ಕೋವಿಡ್‌ನಿಂದ ಜೀವ ಮತ್ತು ಜೀವನ ಎರಡನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಕೂಡಲೇ ಮುಖ್ಯಮಂತ್ರಿ ರಾಜ್ಯಮಟ್ಟದ ಪರಿಶಿಷ್ಟರ ಮೇಲಿನ ದೌರ್ಜನ್ಯ ವಿರೋಧಿ ಸಮಿತಿ ಸಭೆ ಕರೆಯಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪರಿಶಿಷ್ಟರ ಮೇಲಿನ ದೌರ್ಜನ್ಯ ವಿರೋಧಿ ಸಮಿತಿಗಳನ್ನು ಕರೆದು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಎಸಗಿದವರನ್ನು ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಬಂಧಿಸಬೇಕು ಎಂದು ಒತ್ತಾಯಿಸಿದರು.
ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಬೇಕು. ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯನ್ನು ಪರಿಷ್ಕರಿಸಿ, ಸಮುದಾಯದ ಬಡವರಿಗೆ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಪಾಂಡುರಂಗ ಮಾವಿನಕೆರ, ಪೀರಪ್ಪ ಬಿ., ಕಾಶಿನಾಥ ಬಂಡಿ, ದಿಲೀಪ ನಾಗೂರೆ ಸೇರಿದಂತೆ ಸಮಿತಿಯ ಸದಸ್ಯರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.