ಗುರುವಾರ , ಮಾರ್ಚ್ 30, 2023
32 °C
ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ: ಪ್ರತಿಕೃತಿ ದಹನ

ಕಲಬುರಗಿ: ಸಿದ್ದರಾಮಯ್ಯ ಕ್ಷಮೆಯಾಚನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಖಂಡಿಸಿ ಬಿಜೆಪಿ ಎಸ್.ಸಿ.ಮೋರ್ಚಾ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಸರ್ದಾರ್ ವಲ್ಲಭಭಾಯ್‌ ಪಟೇಲ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿದರು. ನಂತರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ನೀಡಿದ್ದಾರೆ. ಅದನ್ನು ಬಳಸಿಕೊಂಡು ಇಂದು ಸಾಕಷ್ಟು ಜನ ರಾಜಕೀಯವಾಗಿ ಮುಂದೆ ಬಂದಿ‌ದ್ದಾರೆ ಎಂದರು.

ಸಂವಿಧಾನ, ಪರಿಶಿಷ್ಟ ಜಾತಿಯವರ ಬೆಂಬಲದಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅಗಿದ್ದರು. ಆದರೆ, ಅದನ್ನು ಮರೆತು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.

ಸದಾ ಅಹಿಂದ ಹೆಸರು ಹೇಳುವ ಸಿದ್ದರಾಮಯ್ಯ ಅವರು ಈ ಎಲ್ಲ ಸಮುದಾಯಗಳಿಗೆ ನೋವುಂಟು ಮಾಡಿದ್ದಾರೆ. ಅವರು ಕೂಡಲೇ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಯ ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ. ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ನ ಎಲ್ಲ ನಾಯಕರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ ಮಾತನಾಡಿ, ಅಂಬೇಡ್ಕರ್, ಬುದ್ಧ, ಬಸವಣ್ಣ, ಕನಕದಾಸರ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು ಕೆಳಸಮುದಾಯದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ. ಅವರು ಪರಿಶಿಷ್ಟ ಸಮುದಾಯ, ಶೋಷಿತ ವರ್ಗವನ್ನು ಅವಮಾನಿಸಿದ್ದಾರೆ ಎಂದರು. ಬಿಜೆಪಿ ಎಸ್‌ಸಿ ಮೋರ್ಚಾ ನಗರ ಘಟಕದ ಅಧ್ಯಕ್ಷ ದೇವಿಂದ್ರ ಎಸ್.ಸಿನ್ನೂರ ಮಾತನಾಡಿ, ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿಗೆ ಬಂದಿದ್ದಾರೆ ಎಂದು ಹೇಳಿರುವ ಸಿದ್ದರಾಮಯ್ಯ ಅವರು ತಾವು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಯಾವ ಕಾರಣಕ್ಕೆ ಬಂದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.

ಮುಖಂಡರಾದ ನಾಮದೇವ ರಾಠೋಡ, ಶಾಂತವೀರ ಬಡಿಗೇರ, ದಿನೇಶ ಎನ್‌.ದೊಡ್ಡಮನಿ, ಹಣಮಂತ ಎಸ್‌.ಮುತ್ಯಾ, ಪಾಲಿಕೆ ಸದಸ್ಯ ವಿಶಾಲ ದರ್ಗಿ, ಅಂಬಾದಾಸ್, ವಿಕಾಸ ಕಿರಣಕಿ, ಪ್ರಲ್ಹಾದ ಹಡಗಿಲ, ದೀನೇಶ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.