ಮಂಗಳವಾರ, ಜನವರಿ 18, 2022
27 °C
ಉನ್ನತಮಟ್ಟದ ತನಿಖೆಗೆ ರಾಜ್ಯ ಗುತ್ತಿಗೆದಾರರ ಸಂಘದ ಆಗ್ರಹ

ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ‘ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತು ಉನ್ನತಮಟ್ಟದ ತನಿಖೆ ನಡೆಸಬೇಕು’ ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ, ರಾಜ್ಯ ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ನೂರಾರು ಗುತ್ತಿಗೆದಾರರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಮಾವೇಶಗೊಂಡ ಸಂಘದ ಮುಖಂಡರು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

‘ಗುತ್ತಿಗೆದಾರರು ಮಾಡುವ ಭ್ರಷ್ಟಾಚಾರ ಆರೋಪಕ್ಕೆ ಆಧಾರಗಳನ್ನು ನೀಡಬೇಕು ಎಂದು ಕೆಲವು ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಇಂಥ ಕಮಿಷನ್‌ ಕೇಳುವವರಿಗೆ ಯಾವುದೂ ಆಧಾರ ಇರುವುದಿಲ್ಲ. ಆದ್ದರಿಂದ ಶೀಘ್ರ ಈ ಬಗ್ಗೆ ತನಿಖೆ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿ ಸರ್ಕಾರ ಬದಲಾದಂತೆಲ್ಲ ಕಮಿಷನ್‌ ಪ್ರಮಾಣ ಹೆಚ್ಚುತ್ತಲಿದೆ. ಹಲವು ಶಾಸಕರು ಶೇ 40ರಷ್ಟು ಕಮಿಷನ್‌ ಕೇಳುತ್ತಾರೆ. ಇದರಿಂದಾಗಿ ಗುಣಮಟ್ಟದ ಕಾಮಗಾರಿ ನಡೆಸಲು ಸಾಧ್ಯವಾಗುತ್ತಿಲ್ಲ. ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌, ಸಣ್ಣ ನೀರಾವರಿ, ಬಿಬಿಎಂಪಿ ಮುಂತಾದ ಕಡೆಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಇದನ್ನು ಖಂಡಿಸಿ ತಿಂಗಳಾಂತ್ಯದಲ್ಲಿ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.

‘₹ 10 ಕೋಟಿಗಿಂತ ಹೆಚ್ಚಿನ ವೆಚ್ಚದ ಕಾಮಗಾರಿಗಳ ಟೆಂಡರ್‌ ಹಾಗೂ ಬಿಲ್‌ ಪಾವತಿಯ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ಆದರೆ, ಭ್ರಷ್ಟಾಚಾರದ ಬಗ್ಗೆ ಇದೂವರೆಗೆ ಮೌನವಾಗಿದ್ದಾರೆ. ಬಿಲ್‌ ಪಾವತಿ ಹಾಗೂ ಟೆಂಡರ್‌ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಕಾಪಾಡಲು, ಹೊಸ ತಂತ್ರಜ್ಞಾನದ ವ್ಯವಸ್ಥೆ ಜಾರಿಗೊಳಿಸಬೇಕು. ಗುತ್ತಿಗೆದಾರರ ಪ್ರತಿಭಟನೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೇ, ಸಮಸ್ಯೆ ಬಗೆಹರಿಸಬೇಕು’ ಎಂದೂ ಆಗ್ರಹಿಸಿದರು.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಶೇಗಜಿ, ಪ್ರಧಾನ ಕಾರ್ಯದರ್ಶಿ ಜೆ.ಎಂ.ರವೀಂದ್ರ ನೇತೃತ್ವದಲ್ಲಿ ಹಲವು ಗುತ್ತಿಗೆದಾರರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.