ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಕೇಂದ್ರ ಸಚಿವ ಅಜಯ್‌ ಮಿಶ್ರಾ ವಜಾಗೊಳಿಸಿ- ಪ್ರತಿಭಟನೆ

ಸಂಯುಕ್ತ–ಹೋರಾಟ ಕರ್ನಾಟಕ ಸಂಚಾಲನ ಸಮಿತಿಯಿಂದ ಪ್ರತಿಭಟನೆ
Published 4 ಅಕ್ಟೋಬರ್ 2023, 6:20 IST
Last Updated 4 ಅಕ್ಟೋಬರ್ 2023, 6:20 IST
ಅಕ್ಷರ ಗಾತ್ರ

ಕಲಬುರಗಿ: ಲಖಿಂಪುರ ಖೇರಿ ರೈತರ ಹತ್ಯಾಕಾಂಡದ ಆರೋಪಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ–ಹೋರಾಟ ಕರ್ನಾಟಕ ಸಂಚಾಲನ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ವಿರುದ್ಧ ಘೋಷಣೆ ಕೂಗಲಾಯಿತು.

ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ಒಂದು ವರ್ಷ ಐತಿಹಾಸಿಕ ಹೋರಾಟ ನಡೆಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಮಗ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿದ್ದರು. ನಾಲ್ವರು ರೈತರು ಹಾಗೂ ಒಬ್ಬರು ಪತ್ರಕರ್ತರು ಮೃತಪಟ್ಟಿದ್ದರು. ಈ ಘಟನೆ ನಡೆದು ಎರಡು ವರ್ಷಗಳಾಗಿವೆ. ಅದಕ್ಕಾಗಿ ಇಂದು ದೇಶದಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಕರಾಳ ದಿನ ಆಚರಿಸಲಾಗುತ್ತಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ ತಿಳಿಸಿದರು.

ಘಟನೆ ಬಳಿಕ ಕೇಂದ್ರ ಹಾಗೂ ಅಲ್ಲಿಯ ರಾಜ್ಯ ಸರ್ಕಾರ ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡಿತು. ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶ ಮಾಡಿದ ಬಳಿಕ ಆರೋಪಿಗಳ ಮೇಲೆ ಮೊಕದ್ದಮೆ ದಾಖಲಿಸಲಾಯಿತು. ಆರೋಪ ಪಟ್ಟಿ ಸಲ್ಲಿಸಲಾಯಿತು ಎಂದು ಹೇಳಿದರು.

ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ ಬಂಧಿಸಬೇಕು. ರೈತರ ಹೋರಾಟದ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಬೇಕು. ವಿದ್ಯುತ್ ತಿದ್ದುಪಡಿ ಮಸೂದೆ ರದ್ದು ಮಾಡಬೇಕು. ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದು ಪಡಿಸಬೇಕು. ದೆಹಲಿ ಹೋರಾಟದ ಸಂದರ್ಭದಲ್ಲಿ ರೈತರ ಮೇಲೆ ಹಾಕಿದ ಕೇಸ್‌ಗಳನ್ನು ವಾಪಸ್ ಪಡೆಯಬೇಕು. ಪ್ರವಾಹ ಹಾಗೂ ಬರಗಾಲದಂಥ ಸಂದರ್ಭದಲ್ಲಿ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು. ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾಯ್ದೆ ಜಾರಿ ಮಾಡಬೇಕು. ಪ್ರತಿಯೊಬ್ಬ ನೌಕರರಿಗೂ ಕನಿಷ್ಠ ಮಾಸಿಕ ವೇತನ ನಿಗದಿ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಸಾರ್ವಜನಿಕ ಉದ್ಯಮಗಳ ಖಾಸಗೀಕರಣವನ್ನು ನಿಲ್ಲಿಸಬೇಕು. ಉದ್ಯೋಗ ಖಾತ್ರಿ ಯೋಜನೆಯ ಮಾನವ ದಿನಗಳನ್ನು 200ಕ್ಕೆ ಹೆಚ್ಚಿಸಬೇಕು. ₹600 ಕೂಲಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೌಲಾ ಮುಲ್ಲಾ, ಆರ್‌ಕೆಎಂಎಸ್‌ನ ಮಹೇಶ ಎಸ್‌.ಬಿ., ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಸಾಯಬಣ್ಣಾ ಗುಡುಬಾ, ನಾಗಯ್ಯ ಸ್ವಾಮಿ, ಮೇಘರಾಜ ಕಠಾರೆ, ಸುಧಾಮ ಧನ್ನಿ, ಪಾಂಡುರಂಗ ಮಾವಿನಕರ, ಭೀಮಾಶಂಕರ ಮಾಡಿಯಾಳ, ಸಾಜಿದ್ ಅಹಮ್ಮದ್ ದಿಗ್ಗಾಂವಕರ್ ಹಾಗೂ ಮಹಮ್ಮದ್ ಹುಸೇನಿ ಪಾಲ್ಗೊಂಡಿದ್ದರು.

ವಿದ್ಯುತ್ ತಿದ್ದುಪಡಿ ಮಸೂದೆ ರದ್ದು ಮಾಡಿ ರೈತರಿಗೆ ಸಮರ್ಪಕ ಪರಿಹಾರ ನೀಡಿ ರೈತರ ಸಾಲ ಮನ್ನಾ ಮಾಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT