ಆಳಂದ: ಪಶ್ಚಿಮ ಬಂಗಾಳದಲ್ಲಿ ಈಚೆಗೆ ನಡೆದ ಅತ್ಯಚಾರ, ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಮಂಗಳವಾರ ದಲಿತ ಸೇನೆ ರಾಮ ವಿಲಾಸ ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟಿಸಲಾಯಿತು.
ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಧರ್ಮಾ ಬಂಗರಗಾ ಮಾತನಾಡಿ, ‘ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿ, ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.
ಹೋರಾಟಗಾರ ಮಲ್ಲಿಕಾರ್ಜುನ ಬೋಳಣಿ ಮಾತನಾಡಿ, ‘ಶಾಲೆ, ಕಾಲೇಜು, ವಸತಿ ನಿಲಯಗಳು, ಕಾರ್ಖಾನೆ ಹಾಗೂ ಆಸ್ಪತ್ರೆ ಸೇರಿ ವಿವಧೆಡೆ ಮಹಿಳೆಯರು ಇರುವ ಸ್ಥಳದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಹೆಣ್ಣುಮಕ್ಕಳಿಗೆ ಸೂಕ್ತ ಭದ್ರತೆ ಒದುಗಿಸಬೇಕು’ ಎಂದು ಆಗ್ರಹಿಸಿದರು.