ಕುಡಿಯುವ ನೀರಿನ ಕಾಮಗಾರಿ ತ್ವರಿತಗೊಳಿಸಿ: ಪ್ರಿಯಾಂಕ್ ಖರ್ಗೆ ಸೂಚನೆ

7
ಕೆಡಿಪಿ ಸಭೆ

ಕುಡಿಯುವ ನೀರಿನ ಕಾಮಗಾರಿ ತ್ವರಿತಗೊಳಿಸಿ: ಪ್ರಿಯಾಂಕ್ ಖರ್ಗೆ ಸೂಚನೆ

Published:
Updated:
Deccan Herald

ಕಲಬುರ್ಗಿ: ‘ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿಗಳನ್ನು ತ್ವರಿತಗೊಳಿಸಬೇಕು. ಕಳಪೆ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ಮುಂದುವರಿದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಜೇವರ್ಗಿ ಮತ್ತು ಚಿತ್ತಾಪುರದಲ್ಲಿ ಕಾಮಗಾರಿಗಳು ಮಂದಗತಿಯಲ್ಲಿ ಸಾಗಿವೆ. ಅವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಹಳ್ಳಿಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಓವರ್ ಹೆಡ್‌ ಟ್ಯಾಂಕ್‌ಗಳನ್ನು ತೆರವುಗೊಳಿಸಿ, ಹೊಸದಾಗಿ ನಿರ್ಮಿಸಬೇಕು. ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

‘ಡಾಬಾ, ಕಿರಾಣಿ ಅಂಗಡಿ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವ್ಯಾಪಕವಾಗಿದ್ದು, ಅದನ್ನು ತಡೆಗಟ್ಟಬೇಕು. ಪದೇ ಪದೇ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು. ಮದ್ಯ ಮಾರಾಟ ಅಂಗಡಿಗಳ ಪಕ್ಕದಲ್ಲೇ ಮದ್ಯ ಸೇವನೆಗೆ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳ ಶ್ರೀರಕ್ಷೆಯಿಂದ ಈ ದಂಧೆ ನಡೆಯುತ್ತಿದೆ. ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು’ ಎಂದು ಸೂಚಿಸಿದರು.

‘ಕುಡಿಯುವ ನೀರಿನಲ್ಲಿನ ಆರ್ಸೆನಿಕ್ ಮತ್ತು ಫ್ಲೋರೈಡ್ ಪ್ರಮಾಣವನ್ನು ಪತ್ತೆ ಹಚ್ಚಬೇಕು. 10 ವರ್ಷಗಳ ದತ್ತಾಂಶವನ್ನು ಸಂಗ್ರಹಿಸಿ ಕೊಡಬೇಕು. ಆಗ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.

‘ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಕಾರ್ಯ ಕುಂಟುತ್ತ ಸಾಗುತ್ತಿದೆ. ಈ ಬಗ್ಗೆ ಕೂಡಲೇ ಗಮನಹರಿಸಬೇಕು. ಜಾಗ ಅಥವಾ ಇತರೆ ಸಮಸ್ಯೆಗಳಿದ್ದಲ್ಲಿ ಆ ಕ್ಷೇತ್ರದ ಶಾಸಕರನ್ನು ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬೇಕು’ ಎಂದು ತಿಳಿಸಿದರು.

‘ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಒಳಚರಂಡಿ ಮತ್ತು ಮ್ಯಾನ್‌ಹೋಲ್‌ಗಳ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ನಗರ ಸೇರಿದಂತೆ ಹಳ್ಳಿ ಹಳ್ಳಿಗಳಲ್ಲಿ ಜೂಜಾಟ, ಮಟ್ಕಾ ದಂಧೆ ಜೋರಾಗಿದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ನಿಗಾವಹಿಸಬೇಕು’ ಎಂದು ಸೂಚಿಸಿದರು.

ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿರಸಗಿ, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಇದ್ದರು.

ಹಾಲಿನ ತರಹ ಮದ್ಯ ಮಾರಾಟ!

‘ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವ್ಯಾಪಕವಾಗಿದೆ. ಹಾಲಿನ ತರಹ ಮದ್ಯವನ್ನು ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು’ ಎಂದು ಶಾಸಕ ಡಾ. ಉಮೇಶ ಜಾಧವ ಒತ್ತಾಯಿಸಿದರು.

‘ಅಕ್ರಮ ಮದ್ಯ ಮಾರಾಟ ತಡೆಗಟ್ಟಿದರೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತದೆ. ಅಲ್ಲದೆ, ಸಾಮಾಜಿಕ ಸಮಸ್ಯೆಗಳನ್ನು ಹೋಗಲಾಡಿಸಬಹುದಾಗಿದೆ’ ಎಂದರು.

ಇದಕ್ಕೆ ದನಿಗೂಡಿಸಿದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿರಸಗಿ, ‘ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ಗೋಳಾಡುತ್ತಿದ್ದಾರೆ’ ಎಂದು ಹೇಳಿದರು.

‘ಅಧಿಕಾರಿಗಳನ್ನು ನೀವೇ ಹಾಕಿಸಿಕೊಂಡಿದ್ದೀರಿ’

‘ತಾಲ್ಲೂಕು ಮಟ್ಟದ ಅಧಿಕಾರಿಗಳು ನಮ್ಮ ಮಾತು ಕೇಳುವುದಿಲ್ಲ, ಆದ್ದರಿಂದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿ ತಾಲ್ಲೂಕಿಗೆ ಭೇಟಿ ನೀಡಬೇಕು’ ಎಂದು ಚಿಂಚೋಳಿ ಶಾಸಕ ಡಾ. ಉಮೇಶ ಜಾಧವ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ‘ಏಕೆ ಮಾತು ಕೇಳುವುದಿಲ್ಲ, ಅಧಿಕಾರಿಗಳನ್ನು ನೀವೆ ಹೇಳಿ ಹಾಕಿಸಿಕೊಂಡಿದ್ದೀರಿ’ ಎಂದಾಗ ಸಭೆಯಲ್ಲಿ ನಗುವಿನ ಅಲೆ ಕೇಳಿ ಬಂದಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !