ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರ, ವಿರೋಧದ ಮಧ್ಯೆ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

136 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ 43,175 ವಿದ್ಯಾರ್ಥಿಗಳು
Last Updated 25 ಜೂನ್ 2020, 6:50 IST
ಅಕ್ಷರ ಗಾತ್ರ

ಕಲಬುರ್ಗಿ: ಲಾಕ್‌ಡೌನ್‌ ಕಾರಣಕ್ಕೆ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇದೇ 25ರಂದು ಆರಂಭವಾಗಲಿದ್ದು, ಜಿಲ್ಲೆಯ 136 ಪರೀಕ್ಷಾ ಕೇಂದ್ರಗಳಲ್ಲಿ 43,175 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದಾರೆ.

ಪೋಷಕರ ಪರ ಹಾಗೂ ವಿರೋಧದ ಮಧ್ಯೆಯೂ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದಕ್ಕೆ ಪೂರಕವಾಗಿ ಎರಡು ದಿನಗಳಿಂದ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಜ್ ಮಾಡುವ, ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುವ ತಾಲೀಮನ್ನು ನಡೆಸಲಾಯಿತು.

ಕೋವಿಡ್‌–19 ಸೋಂಕಿನ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಮೂಡಿರುವ ಭಯವನ್ನು ಹೋಗಲಾಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಪರೀಕ್ಷೆಯ ಮುನ್ನಾ ದಿನವಾದ ಬುಧವಾರ ಪರೀಕ್ಷಾ ಕೇಂದ್ರಗಳಲ್ಲಿ ತಮ್ಮ ಆಸನಗಳು ಎಲ್ಲಿ ಇದೆ ಎಂಬುದನ್ನು ತಿಳಿದುಕೊಳ್ಳುವ ಅವಕಾಶವನ್ನು ಕಲ್ಪಿಸಿತ್ತು. ಈ ಬಗ್ಗೆ ಮಾಹಿತಿ ಪಡೆದ ಹಲವು ವಿದ್ಯಾರ್ಥಿಗಳು ನಗರದಲ್ಲಿರುವ ವಿವಿಧ ಪರೀಕ್ಷಾ ಕೇಂದ್ರಗಳಿಗೆ ತೆರಳಿ ತಮ್ಮ ಆಸನವನ್ನು ಪರಿಶೀಲಿಸಿದರು. ಹೀಗೆ ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಜ್ವರ ತಪಾಸಣೆ ಮಾಡಲಾಯಿತು.

ಬೇರೆ ಜಿಲ್ಲೆಗಳ ಪ್ರೌಢಶಾಲೆಗಳಲ್ಲಿ ಓದುತ್ತಿರುವ 632 ವಿದ್ಯಾರ್ಥಿಗಳು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಅದೇ ರೀತಿ ಜಿಲ್ಲೆಯ ಶಾಲೆಗಳಲ್ಲಿ ಓದಿದ 539 ವಿದ್ಯಾರ್ಥಿಗಳು ತಾವು ಬಯಸಿದ ಹೊರಜಿಲ್ಲೆಗಳಲ್ಲಿ ಪರೀಕ್ಷೆಯನ್ನು ಎದುರಿಸಲಿದ್ದಾರೆ.

ಎರಡು ಅತಿ ಸೂಕ್ಷ್ಮ, 27 ಸೂಕ್ಷ್ಮ: ಜಿಲ್ಲೆಯ 136 ಪರೀಕ್ಷಾ ಕೇಂದ್ರಗಳ ಪೈಕಿ ಎರಡು ಅತಿ ಸೂಕ್ಷ್ಮ ಹಾಗೂ 27 ಸೂಕ್ಷ್ಮ ಕೇಂದ್ರಗಳು ಉಳಿದ 91 ಸಾಮಾನ್ಯ ಕೇಂದ್ರಗಳೆಂದು ಶಿಕ್ಷಣ ಇಲಾಖೆ ವರ್ಗೀಕರಿಸಿದೆ. ಅತಿ ಸೂಕ್ಷ್ಮ ಹಾಗೂ ಸೂಕ್ಷ್ಮ ಕೇಂದ್ರಗಳಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿಯಾಗಿ 21 ಪರೀಕ್ಷಾ ಬ್ಲಾಕ್ ಗಳು ಮತ್ತು ಪ್ರತಿ ತಾಲೂಕಿನಲ್ಲಿ ಎರಡು ಮೀಸಲು ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ವಿದ್ಯಾರ್ಥಿಗಳಿಗೆ ವಿತರಿಸಲು 86,164 ಮಾಸ್ಕ್ ಹಾಗೂ ಸ್ಯಾನಿಟೈಸರ್, ತಪಾಸಣೆಗೆಂದು 250 ಥರ್ಮಲ್ ಸ್ಕ್ರೀನಿಂಗ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಡಿಡಿಪಿಐ ಎಸ್‌.ಪಿ.ಬಾಡಗಂಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT