ರೋಗ ಪತ್ತೆಗೆ ಸಮೀಕ್ಷೆ ಅವಶ್ಯ: ಜಿಲ್ಲಾ ಪಂಚಾಯಿತಿ ಸಿಇಒ ದಿಲೀಷ್ ಶಶಿ

ಕಲಬುರ್ಗಿ: ಜಿಲ್ಲೆಯಲ್ಲಿ ಡೆಂಗಿ, ಚಿಕೂನ್‌ಗುನ್ಯ ಹಾಗೂ ಮಲೇರಿಯಾದಂತ ರೋಗಗಳನ್ನು ಪತ್ತೆ ಹಚ್ಚಲು ಸಮೀಕ್ಷೆ ನಡೆಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ ಸೂಚಿಸಿದರು.
ನಗರದ ಜಿಲ್ಲಾ ಸರ್ವೇಕ್ಷಣಾ ಕಚೇರಿಯಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ, ರಾಷ್ಟ್ರೀಯ ಅರೋಗ್ಯ ಅಭಿಯಾನ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ನಡೆದ ಮಲೇರಿಯಾ, ಡೆಂಗಿ, ಚಿಕೂನ್‌ಗುನ್ಯ ರೋಗಗಳ ಕುರಿತ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರಿಂದ ಸಮೀಕ್ಷೆ ನಡೆಸಿ ಈ ರೋಗಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳು ಹೆಚ್ಚು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಇವುಗಳಿಂದ ಡೆಂಗಿ, ಮಲೇರಿಯಾದಂತಹ ರೋಗಗಳು ಬರುತ್ತವೆ. ಹೀಗಾಗಿ ಪ್ರತಿ ತಾಲ್ಲೂಕು ಪಂಚಾಯಿತಿಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಬೇಕು ಎಂದರು.
ಕೋವಿಡ್ ಪ್ರಕರಣಗಳು ಕಡಿಮೆ ಆಗಿರುವುದರಿಂದ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಡೆಂಗಿ, ಮಲೇರಿಯಾ, ಚಿಕೂನ್‌ಗುನ್ಯ ರೋಗಗಳು ಹರಡುವ ಬಗ್ಗೆ ಮತ್ತು ಅವುಗಳ ನಿಯಂತ್ರಣಕ್ಕೆ ಅರಿವು ಮೂಡಿಸಬೇಕು. ಅಲ್ಲದೆ, ಸಮೀಕ್ಷೆ ನಂತರ ತಮ್ಮ ತಾಲ್ಲೂಕುಮಟ್ಟದ ಅಧಿಕಾರಿಗಳಿಗೆ ಸಮೀಕ್ಷೆ ವರದಿ ಸಲ್ಲಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಡೆಸಬೇಕು. ಸಭೆಗೆ ತಹಶೀಲ್ದಾರ್ ಅವರನ್ನು ಆಹ್ವಾನಿಸಿ ರೋಗಗಳ ಕುರಿತು ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ರೋಗ ನಿಯಂತ್ರಣಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾ ಪಂಚಾಯಿತಿ ವತಿಯಿಂದ ಇದಕ್ಕೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು. ಮುಂದಿನ ಸಭೆಯಲ್ಲಿ ಪ್ರತಿ ತಾಲ್ಲೂಕಿನ ಸಂಪೂರ್ಣ ಮಾಹಿತಿ ಸಲ್ಲಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಉಪ ನಿರ್ದೇಶಕ ಡಾ.ಹಬೀಬ್ ಉಸ್ಮಾನ್, ಕಾರ್ಯಕ್ರಮ ಅಧಿಕಾರಿ ಡಾ. ಬಸವರಾಜ ಗುಳಗಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.