ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಜಾತಿ ಪ್ರಮಾಣಪತ್ರದ ವಿರುದ್ಧ ಕ್ರಮ ಕೈಗೊಳ್ಳಿ: ಎ.ಸಿ.ತಿಪ್ಪೇಸ್ವಾಮಿ

Published 24 ಜುಲೈ 2023, 13:43 IST
Last Updated 24 ಜುಲೈ 2023, 13:43 IST
ಅಕ್ಷರ ಗಾತ್ರ

ಕಲಬುರಗಿ: ‘ಕಲ್ಯಾಣ ಕರ್ನಾಟಕ ಭಾಗದ ಅಧಿಕಾರಿಗಳು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ತಳವಾರ, ಪರಿವಾರ ಹಾಗೂ ಕುರುಬ ಸಮುದಾಯದವರಿಗೆ ಎಸ್‌ಟಿ ಪ್ರಮಾಣಪತ್ರ ನೀಡುವ ಮೂಲಕ ನಿಜವಾದ ಪರಿಶಿಷ್ಟ ಪಂಗಡದವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಒತ್ತಾಯಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ನಾಯಕ ಸಮುದಾಯದ ತಳವಾರ ಹಾಗೂ ಪರಿವಾರ ಉಪ ಪಂಗಡಗಳನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಿದೆ. ಈ ಉಪ ಪಂಗಡದವರು ಕಲ್ಯಾಣ ಕರ್ನಾಟಕದ ರಾಯಚೂರು, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿಲ್ಲ. ದಕ್ಷಿಣ ಹಾಗೂ ಮಧ್ಯ ಕರ್ನಾಟಕದಲ್ಲಿದ್ದಾರೆ. ಇಲ್ಲಿ ಇರುವ ತಳವಾರ ಹಾಗೂ ಪರಿಹಾರ ಪಂಗಡಗಳು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿವೆ. ಇದನ್ನು ಅರ್ಥ ಮಾಡಿಕೊಳ್ಳದೆ ಅಧಿಕಾರಿಗಳು ಸುಳ್ಳು ಜಾತಿ ಪ್ರಮಾಣ ಪತ್ರ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಪ್ರವರ್ಗ–1 ರಲ್ಲಿರುವ ಜಾತಿಗಳಿಗೆ ಎಸ್‌ಟಿ ಪ್ರಮಾಣಪತ್ರ ನೀಡಿದ್ದಾರೆ. ಅವರು ಸುಳ್ಳು ದಾಖಲೆ ನೀಡಿ ಎಸ್‌ಟಿ ಸಮುದಾಯಗಳ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಅಲ್ಲದೆ, ಇದು ಸರ್ಕಾರದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಬೀದರ್ ಜಿಲ್ಲೆಯಲ್ಲಿ ಕುರುಬ ಸಮುದಾಯದಕ್ಕೆ ಸೇರಿದವರು ಗೊಂಡ ಹಾಗೂ ರಾಜಗೊಂಡ ಎಂದು ಹೇಳಿ ಎಸ್‌ಟಿ ಜಾತಿ ಪ್ರಮಾಣಪತ್ರ ಪಡೆದು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಈ ಪ್ರಮಾಣಪತ್ರ ನೀಡಿದ ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆಯ ಇತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ ಪರಿಶಿಷ್ಟರ ಪಟ್ಟಿಗೆ ಜಾತಿಗಳನ್ನು ಸೇರಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಸಂಗಪ್ಪ ಸೇದಿಮನಿ, ಸಂಘಟನಾ ಕಾರ್ಯದರ್ಶಿ ಸಾಯಿಬಣ್ಣ ವಾಲ್ಮೀಕಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಸುಬೇದಾರ, ಸಮುದಾಯದ ಮುಖಂಡರಾದ ರಘುವೀರ ನಾಯಕ, ಭೀಮರಾಯ ದೊರೆ, ಗುರುರಾಜ ದೊರೆ, ಗುರುರಾಜ ನರಬೋಳಿ ಹಾಗೂ ಮಲ್ಲಿಕಾರ್ಜುನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT