ಮಂಗಳವಾರ, ಅಕ್ಟೋಬರ್ 26, 2021
20 °C
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ್

ಕಲಬುರಗಿ: ತಾಂಡಾ ನಿವಾಸಿಗಳಿಗೆ ಮೂರು ತಿಂಗಳಲ್ಲಿ ಹಕ್ಕುಪತ್ರಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಬಂಜಾರ ಸಮುದಾಯದವರು ವಾಸಿಸುವ ತಾಂಡಾಗಳಿಗೆ ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕುಡಚಿ ಶಾಸಕ ಪಿ. ರಾಜೀವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಕಂದಾಯ ಸಚಿವ ಆರ್‌. ಅಶೋಕ ಅವರು ಕಲಬುರಗಿ ಜಿಲ್ಲೆಯಲ್ಲಿರುವ ತಾಂಡಾಗಳ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಗಡುವು ನೀಡಿದ್ದಾರೆ. ಹೀಗಾಗಿ, ಮೂರು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದರು.

‘ಜಿಲ್ಲೆಯಲ್ಲಿ ಕಂದಾಯ ಇಲಾಖೆ ಗುರುತಿಸಿದ ಪ್ರಕಾರ 439 ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಆದರೆ, ತಾಂಡಾ ಅಭಿವೃದ್ಧಿ ನಿಗಮವು 483 ತಾಂಡಾಗಳನ್ನು ಗುರುತಿಸಿದೆ. ನಿಗಮವು ಗುರುತಿಸಿದ ತಾಂಡಾಗಳ ಬಗ್ಗೆ ಅಭಿವೃದ್ಧಿ ಅಧಿಕಾರಿಗಳು ಆಯಾ ತಾಲ್ಲೂಕುಗಳ ತಹಶೀಲ್ದಾರ್‌ಗಳಿಗೆ ಪ್ರಸ್ತಾವ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಅವರು ಪರಿಶೀಲಿಸಿ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾಡಳಿತವು ತಾಂಡಾಗಳನ್ನು ಅಳತೆ ಮಾಡಲು ಸರ್ವೆಯರ್‌ಗಳನ್ನು ನೀಡಬೇಕು. ಸರ್ವೆ ಕಾರ್ಯ ಮುಗಿದ ಬಳಿಕ ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಳ್ಳಲಿವೆ ಎಂದರು.

ನ್ಯಾಯಬೆಲೆ ಅಂಗಡಿ: ಒಂದು ತಾಂಡಾದಲ್ಲಿ ಕನಿಷ್ಟ 100 ಜನರಿದ್ದರೆ ಅಲ್ಲಿ ಒಂದು ನ್ಯಾಯಬೆಲೆ ಅಂಗಡಿಯನ್ನು ಆರಂಭಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕಲಬುರಗಿ ಜಿಲ್ಲೆಯ ವಿವಿಧ ತಾಂಡಾಗಳಲ್ಲಿ ನ್ಯಾಯಬೆಲೆ ಅಂಗಡಿಗಳ ಆರಂಭಕ್ಕಾಗಿ ಅಧಿಸೂಚನೆ ಹೊರಡಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ತಿಳಿಸಿದರು.

ಶಾಸಕ ಡಾ. ಅವಿನಾಶ್ ಜಾಧವ್ ಮಾತನಾಡಿ, ‘ಚಿಂಚೋಳಿ ತಾಲ್ಲೂಕಿನ ಶೇರಿಭಿಕನಳ್ಳಿ ತಾಂಡಾದಲ್ಲಿ ಮೂಲಸೌಕರ್ಯಗಳಿಲ್ಲ. ಹೀಗಾಗಿ ಸ್ಥಳಾಂತರ ಮಾಡಬೇಕು ಎಂಬ ಮನವಿಗೆ ಇನ್ನೂ ಸ್ಪಂದನೆ ಸಿಕ್ಕಿಲ್ಲ’ ಎಂದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಜ್ಯೋತ್ಸ್ನಾ, ‘ಈ ಬಗ್ಗೆ ಸೇಡಂ ಉಪವಿಭಾಗಾಧಿಕಾರಿ ಅವರು ಕಾರ್ಯಪ್ರವೃತ್ತರಾಗಿದ್ದಾರೆ’ ಎಂದು ಹೇಳಿದರು.

ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಪರಿವರ್ತಿಸುವ ಪ್ರಕ್ರಿಯೆ ಈಗಾಗಲೇ ಮುಗಿಯಬೇಕಿತ್ತಾದರೂ ಕೋವಿಡ್‌ ಸೋಂಕಿನ ಭೀತಿಯಿಂದಾಗಿ ವಿಳಂಬವಾಯಿತು. ಇನ್ನು ಮೇಲೆ ತ್ವರಿತಗತಿಯಲ್ಲಿ ಕೆಲಸಗಳು ಆಗಲಿವೆ ಎಂದು ಭರವಸೆ ವ್ಯಕ್ತಪಡಿಸಿದರು.

ಉಪವಿಭಾಗಾಧಿಕಾರಿಗಳಾದ ಮೋನಾ ರೋಟ್, ಅಶ್ವಿಜಾ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಸಮಾಜ ಕಲ್ಯಾಣ ಇಲಾಖೆ, ತಾಂಡಾ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.