ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಕೋಲಿ ಸಮಾಜ ಎಸ್‌ಟಿ ಸೇರ್ಪಡೆ; ಬೃಹತ್ ಸಮಾವೇಶ

Published 27 ಜೂನ್ 2023, 13:09 IST
Last Updated 27 ಜೂನ್ 2023, 13:09 IST
ಅಕ್ಷರ ಗಾತ್ರ

ಕಲಬುರಗಿ: ‘ಕೋಲಿ ಸಮಾಜವನ್ನು ಪರಿಶಿಷ್ಟ ಜಾತಿ(ಎಸ್‌ಟಿ) ಸೇರ್ಪಡೆಗೆ ಒತ್ತಾಯಿಸಿ ಜಿಲ್ಲೆಯಲ್ಲಿ ಸಮುದಾಯದ ಬೃಹತ್ ಸಮಾವೇಶ ನಡೆಸಲಾಗುವುದು’ ಎಂದು ವಿಧಾನ ಪರಿಷತ್ತಿನ ನೂತನ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಹೇಳಿದರು.

ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳವಾರ ನಗರಕ್ಕೆ ಆಗಮಿಸಿದ ಅವರು, ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ಸಮಾವೇಶದ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರಕ್ಕೂ ಎಸ್‌ಟಿ ಸೇರ್ಪಡೆಯ ಬಗ್ಗೆ ಮನವರಿಕೆ ಮಾಡಿಕೊಡಲು ನಿಯೋಗ ತೆಗೆದುಕೊಂಡು ಹೋಗುವಂತೆ ರಾಜ್ಯ ಸರ್ಕಾರಕ್ಕೆ ಕೋರಲಾಗುವುದು’ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ಆಶೀರ್ವಾದದಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಕಳೆದ ಬಾರಿ ಒಂಬತ್ತು ತಿಂಗಳ ನೇಮಕವಾಗಿದ್ದರಿಂದ ಈ ಭಾಗದ ಸಮಸ್ಯೆಗಳ ಬಗ್ಗೆ ಮಾತನಾಡಲು ಸಾಕಷ್ಟು ಅವಕಾಶ ಸಿಗಲಿಲ್ಲ. ಈ ಬಾರಿ ಸ್ಥಳೀಯ ಸಮಸ್ಯೆಗಳನ್ನು ಪರಿಷತ್ತಿನಲ್ಲಿ ಪ್ರಸ್ತಾಪಿಸಿ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಅಫಜಲಪುರ ಶಾಸಕ ಎಂ.ವೈ.ಪಾಟೀಲ ಮಾತನಾಡಿ, ‘ಕಮಕನೂರ ಅವರು ಜನರೊಂದಿಗೆ ಅನ್ಯೋನ್ಯವಾಗಿ ಬೆರೆಯುವಂತಹ ಗುಣ ಇರುವ ಸರಳ ಜೀವಿ. ನೇರ ಮಾತುಗಾರ. ಜಿಲ್ಲೆಯ ಸಮಸ್ಯೆಗಳನ್ನು ಚೆನ್ನಾಗಿ ಅರಿತಿದ್ದು, ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕಿ ಕನೀಜ್ ಫಾತಿಮಾ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಕೋಲಿ ಸಮಾಜದ ಮುಖಂಡ ರಾಜಗೋಪಾಲರೆಡ್ಡಿ, ಮುಖಂಡರಾದ ನೀಲಕಂಠರಾವ ಮೂಲಗೆ, ಮಜರ್ ಆಲಂ ಖಾನ್, ಶಿವಾನಂದ ಹೊನಗುಂಟಿ, ಸಂತೋಷ ಪಾಟೀಲ ಡಣ್ಣೂರ್, ಸಂದೇಶ ಕಮಕನೂರ, ಬಾಬುರಾವ್ ಜಾಗೀರದಾರ್, ಲಿಂಗರಾಜ ತಾರಫೈಲ್, ಲಿಂಗರಾಜ ಕಣ್ಣಿ, ಹುಲಿಗೆಪ್ಪ ಕನಕಗಿರಿ, ಮಾಪಣ್ಣ ಗಂಜಗಿರಿ, ಚಂದ್ರಿಕಾ ಪರಮೇಶ್ವರ, ಧರ್ಮರಾಜ ಹೇರೂರ, ರವಿ ಬಿರಾದಾರ, ಈರಣ್ಣ ಝಳಕಿ, ಲಚ್ಚಪ್ಪ ಜಮಾದಾರ, ರಮೇಶ ಕಮಕನೂರು ಇದ್ದರು.

ಖರ್ಗೆ ಪ್ರಧಾನಿ ಹುದ್ದೆಗೆ ಏರಬಹುದು: ತಿಪ್ಪಣ್ಣಪ್ಪ ಕಮಕನೂರು

‘ಈ ಬಾರಿ ಪ್ರಧಾನಿ ನರೇಂದ್ರ ಮೋದಿ ವರ್ಸಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಂಬಂತಾಗಿದೆ. ಇಲ್ಲಿ(ಲೋಕಸಭೆ) ಗೆದ್ದರೆ ಖರ್ಗೆ ಅವರು ಪ್ರಧಾನಿ ಹುದ್ದೆಗೆ ಏರಬಹುದು’ ಎಂದು ತಿಪ್ಪಣ್ಣಪ್ಪ ಕಮಕನೂರು ಭವುಷ್ಯ ನುಡಿದರು.

‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಿದರೆ ಕನಿಷ್ಠ ಒಂದು ಲಕ್ಷಕ್ಕೂ ಹೆಚ್ಚಿನ ಮತಗಳಿಂದ ಗೆಲ್ಲಿಸಿಕೊಂಡು ಬರಬೇಕು’ ಎಂದರು. ‘ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಅವರ ಹಾದಿಯಲ್ಲಿ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ನಡೆಯುತ್ತಿದ್ದಾರೆ. ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.

ಕಲಬುರಗಿಯಲ್ಲಿ ಮಂಗಳವಾರ ವಿಧಾನ ಪರಿಷತ್ತಿನ ನೂತನ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರ ಮೇಲೆ ಪುಷ್ಪಾರ್ಚನೆ ಮಾಡಿ ಬರ ಮಾಡಿಕೊಂಡ ಬೆಂಬಲಿಗರು
ಕಲಬುರಗಿಯಲ್ಲಿ ಮಂಗಳವಾರ ವಿಧಾನ ಪರಿಷತ್ತಿನ ನೂತನ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರ ಮೇಲೆ ಪುಷ್ಪಾರ್ಚನೆ ಮಾಡಿ ಬರ ಮಾಡಿಕೊಂಡ ಬೆಂಬಲಿಗರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT