ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈಲ್ವೆ ವಿಭಾಗ ಕಚೇರಿ ಸ್ಥಾಪನೆಗೆ ಮನವಿ

Published 30 ಜೂನ್ 2024, 6:30 IST
Last Updated 30 ಜೂನ್ 2024, 6:30 IST
ಅಕ್ಷರ ಗಾತ್ರ

ಕಲಬುರಗಿ: ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕಲಬುರಗಿ ರೈಲ್ವೆ ವಿಭಾಗ ಕಚೇರಿ ಸ್ಥಾಪನೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದರು.

2014-15ರ ಮಧ್ಯಂತರ ಬಜೆಟ್‌ನಲ್ಲಿ ಕಲಬುರಗಿಗೆ ರೈಲ್ವೆ ವಿಭಾಗ ಕಚೇರಿ ಮಂಜೂರಾಗಿ, ₹ 5 ಕೋಟಿ ಅನುದಾನವೂ ತೆಗೆದಿರಿಸಲಾಗಿತ್ತು. ಯೋಜನೆಗೆ ಅಗತ್ಯವಿರುವ ಜಮೀನನ್ನು ರಾಜ್ಯ ಸರ್ಕಾರ ಉಚಿತವಾಗಿ ಒದಗಿಸಿತ್ತು. ವಿಭಾಗ ಕಚೇರಿ ಸ್ಥಾಪನೆಗೆ ಕೂಡಲೇ ರೈಲ್ವೆ ಪ್ರಾಧಿಕಾರ ಅಥವಾ ಸಂಬಂಧಿಸಿದವರ ಗಮನಕ್ಕೆ ತಂದು ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಸದರು ಪತ್ರದಲ್ಲಿ ಕೋರಿದ್ದಾರೆ.

ಯಾದಗಿರಿ ಜಿಲ್ಲೆಯ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 150 ಎಕರೆಯಲ್ಲಿ ಸ್ಥಾಪನೆಯಾದ ರೈಲ್ವೆ ಬೋಗಿ ಕಾರ್ಖಾನೆಯಿಂದ ಅಗತ್ಯವಿರುವಷ್ಟು ಬೋಗಿಗಳು ತಯಾರಾಗುತ್ತಿಲ್ಲ. ಹಲವು ವರ್ಷಗಳು ಕಳೆದರೂ ಕಾಮಗಾರಿ ಕೈಗೆತ್ತಿಕೊಂಡಿಲ್ಲ. ಸದರಿ ಕಾರ್ಖಾನೆಯ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಕಲಬುರಗಿ ರೈಲು ನಿಲ್ದಾಣದ ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಎರಡು ಪಿಟ್ ಲೈನ್‌ಗಳು ಮಂಜೂರಾಗಿವೆ. ದಕ್ಷಿಣ ಭಾಗದಲ್ಲಿ ಪಿಟ್ ಲೈನ್ ಕಾಮಗಾರಿ ಪೂರ್ಣಗೊಂಡು ಕಾರ್ಯನಿರ್ವಹಿಸುತ್ತಿದೆ. ಆದರೆ, ಉತ್ತರ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಮುಂಬೈ ಕರ್ನಾಟಕದೊಂದಿಗೆ ಸಂಪರ್ಕಿಸುವ ಗದಗ–ವಾಡಿ ನೂತನ ರೈಲ್ವೆ ಮಾರ್ಗದ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಸದರಿ ಕಾಮಗಾರಿ ತೀವ್ರಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 150 ಪೂರ್ಣಗೊಂಡಿದ್ದು, ಇಕ್ಕೆಲಗಳ ರಸ್ತೆಗಳು ಸಂಚಾರಕ್ಕೆ ಮುಕ್ತವಾಗಿವೆ. ಆದರೆ, ರೈಲ್ವೆ ಮೇಲ್ಸೇತುವೆ ಕಾಮಗಾರಿ ಇನ್ನೂ ಪ್ರಾರಂಭಗೊಂಡಿಲ್ಲ. ಈ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಬೇಕು. ಕಲಬುರಗಿ ಮತ್ತು ಬೆಂಗಳೂರು ನಡುವೆ ಹೆಚ್ಚಿನ ಸಂಖ್ಯೆಯ ರೈಲುಗಳನ್ನು ಓಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT