ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ಹಗರಣ: ಡಿಸಿ ಕಚೇರಿ ಮುತ್ತಿಗೆ ಯತ್ನ, ಬಿಜೆಪಿ ಮುಖಂಡರು ವಶಕ್ಕೆ

ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
Published 28 ಜೂನ್ 2024, 16:12 IST
Last Updated 28 ಜೂನ್ 2024, 16:12 IST
ಅಕ್ಷರ ಗಾತ್ರ

ಕಲಬುರಗಿ: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ₹ 187 ಕೋಟಿ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಶಹರ ಘಟಕದ ಅಧ್ಯಕ್ಷ ಚಂದು ಪಾಟೀಲ ಸೇರಿದಂತೆ ಇತರ ಮುಖಂಡರು, ಕಾರ್ಯಕರ್ತರನ್ನು ಪೊಲೀಸ್ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಬಿಜೆಪಿ ರಾಜ್ಯ ಘಟಕದ ಕರೆಯ ಮೇರೆಗೆ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.

ಹಣಕಾಸು ಖಾತೆಯನ್ನೂ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಬಾರದೇ ಇಂತಹ ಹಗರಣ ನಡೆಯಲು ಸಾಧ್ಯವೇ ಇಲ್ಲ. ಹಾಗಾಗಿ, ಇದರಲ್ಲಿ ಅವರೂ ಶಾಮೀಲಾಗಿರುವ ಸಾಧ್ಯತೆ ಇದ್ದು, ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

‘ರಾಜ್ಯದಲ್ಲಿ ದಿನದಿಂದ ದಿನಕ್ಕೆ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ. ಅದರಿಂದ ಒಬ್ಬ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಾಮಾಣಿಕ ಅಧಿಕಾರಿಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಾವಿನ ಭಾಗ್ಯ ನೀಡುತ್ತಿದೆ’ ಎಂದು ಆರೋಪಿಸಿದರು. ಅಲ್ಲದೇ, ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಸಹ ರಾಜೀನಾಮೆ ನೀಡಬೇಕು ಎಂದರು.

ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ, ಮುಖಂಡರಾದ ಅಶೋಕ ಬಗಲಿ, ಮಹಾದೇವ, ಬೆಳಮಗಿ, ಉಮೇಶ ಪಾಟೀಲ, ಶಿವಯೋಗಿ ನಾಗನಹಳ್ಳಿ, ಶರಣು ಸಜ್ಜನ್ಶೆಟ್ಟಿ, ಅಶೋಕ್ ಮಾನಕರ, ಮಲ್ಲಿಕಾರ್ಜುನ್ ಓಕುಳಿ, ಮಂಜುನಾಥ್ ಚಿಲಶೆಟ್ಟಿ, ಮಲ್ಲಣ್ಣ ಕುಲಕರ್ಣಿ, ಸುಧೀರ ಉಪಾಧ್ಯ, ರೇವಣಸಿದ್ದಪ್ಪ ಸಂಕಾಲಿ, ಶಿವ ಅಷ್ಠಗಿ, ಲಿಂಗರಾಜ್, ಗಂಗಾಧರ ಬಿಲಗುಂದಿ, ವೀರು ರಾಯಕೋಡ ಇತರರು ಭಾಗವಹಿಸಿದ್ದರು. 

ಸಂಚಾರದಲ್ಲಿ ವ್ಯತ್ಯಯ

ಸದಾ ಗಿಜಿಗುಡುವ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ಮಾಡಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿ ಬಸ್ ಕಾರು ಬೈಕ್‌ನಲ್ಲಿದ್ದ ಪ್ರಯಾಣಿಕರು ಹಲವು ನಿಮಿಷ ನಿಂತಲ್ಲೇ ನಿಲ್ಲಬೇಕಾಯಿತು. ಎಸ್‌ವಿಪಿ ವೃತ್ತದಿಂದ ಜಗತ್ ವೃತ್ತಕ್ಕೆ ಹೋಗುವವರು ರಸ್ತೆ ತಡೆಯಿಂದಾಗಿ ಪರದಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT