ಗುರುವಾರ , ಜುಲೈ 29, 2021
27 °C

ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಅಶ್ವತ್ಥ ನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಹೇಳಿದರು.

ನಗರದಲ್ಲಿ ಸೋಮವಾರ ನಡೆದ ಬಿಜೆಪಿ ನಗರ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು. ’ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದಿಂದ ಶೇ 50ರಷ್ಟು ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ನೀಡಲಾಗುವುದು. ಈಗಿನಿಂದಲೇ ಅಭ್ಯರ್ಥಿಗಳನ್ನು ಗುರುತಿಸಬೇಕು‘ ಎಂದರು.

’ಯಾವುದೇ ಸಂದರ್ಭದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಸ್ಥಳೀಯ ಸಂಸ್ಥೆಗಳಲ್ಲಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಆಗ ಮಾತ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಸಾಧ್ಯ.

’ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ನೀಡುತ್ತಿದ್ದಾರೆ. 20 ಕೋಟಿ ಮಹಿಳೆಯರಿಗೆ ತಲಾ ₹1,500 ಘೋಷಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಹ ಅಸಂಘಟಿತ ವಲಯದ 14 ಲಕ್ಷ ಕಾರ್ಮಿಕರಿಗೆ ₹860 ಕೋಟಿಯನ್ನು ನೀಡಿದ್ದಾರೆ. ಅಲ್ಲದೆ, ಬೀದಿ ಬದಿ ವ್ಯಾಪಾರಿಗಳಿಗೂ ನೆರವು ನೀಡಿದ್ದಾರೆ.

’ಜಲ ಜೀವನ ಮಿಷನ್ ಯೋಜನೆ ಅಡಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಸಂಕಲ್ಪವನ್ನು ಕೇಂದ್ರ ಸರ್ಕಾರ ಮಾಡಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ₹5 ಸಾವಿರ ಕೋಟಿಯನ್ನು ಬಿಡುಗಡೆ ಮಾಡಿದೆ. 2024ರ ಜನವರಿ ಒಳಗೆ 94 ಲಕ್ಷ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಗುರಿ ಹೊಂದಲಾಗಿದೆ‘ ಎಂದರು.

ವಿಧಾನ ಪರಿಷತ್‌ ಸದಸ್ಯ ತುಳಸಿ ಮುನಿರಾಜುಗೌಡ ಮಾತನಾಡಿ, ’ಪಕ್ಷವನ್ನು ತಳಮಟ್ಟದಲ್ಲಿ ಬಲಿಷ್ಠಗೊಳಿಸಬೇಕು. ಆ ನಿಟ್ಟಿನಲ್ಲಿ ಕಾರ್ಯಕಾರಣಿ ಸಭೆಗಳನ್ನು ಏರ್ಪಡಿಸಲಾಗುತ್ತಿದೆ. ಜುಲೈ 16ರ ನಂತರ ಮಂಡಲ ಮಟ್ಟದ ಕಾರ್ಯಕಾರಿಣಿ ಸಭೆಗಳನ್ನು ನಡೆಸಲಾಗುವುದು. ಬೀದರ್ ಜಿಲ್ಲೆಯ ಬಸವಕ್ಯಾಣ ತಾಲ್ಲೂಕಿನಲ್ಲಿ ನಿರ್ಮಾಣವಾಗುತ್ತಿರುವ ಹುತಾತ್ಮರ ಸ್ಮಾಕರ ಕಾಮಗಾರಿ ಬಹುತೇಕ ಮುಗಿದಿದ್ದು ಶೀಘ್ರ ಉದ್ಘಾಟನೆಯಾಗಲಿದೆ‘ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ’ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಇರುವ ವ್ಯತ್ಯಾಸ‘ ಎಂದರು.

’ಹೀರಾಪುರ ಕ್ರಾಸ್ ಬಳಿ ನಿರ್ಮಿಸಿರುವ ಮೇಲ್ಸೇತುವೆಗೆ ಡಾ.ಬಿ.ಆರ್.ಅಂಬೇಡ್ಕರ್‌, ಜೇವರ್ಗಿ ಕ್ರಾಸ್‌ನಿಂದ ರಾಮಮಂದಿರ ರಸ್ತೆ ಮಾರ್ಗದಲ್ಲಿ ನಿರ್ಮಿಸಿರುವ ರೈಲ್ವೆ ಮೇಲ್ಸೇತುವೆಗೆ ಸ್ವಾಮಿ ವಿವೇಕಾನಂದ ಅವರ ಹೆಸರು ಇಡಲು ಮತ್ತು ಕುಸನೂರು ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಲೇಔಟ್‌ಗೆ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹೆಸರಿಡಲು ಶಿಫಾರಸು ಮಾಡಲಾಗಿದೆ‘ ಎಂದರು.

ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಾಜಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ, ಶಾಸಕ ಶರಣು ಸಲಗರ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಪಾಟೀಲ, ಈಶ್ವರಸಿಂಗ್ ಠಾಕೂರ, ರಾಜು ವಾಡೆಕರ್‌, ಅಭಿನಾಶ್ ಕುಲಕರ್ಣಿ, ಅರವಿಂದ ನವಲಿ, ಸುಂದರ ಕುಲಕರ್ಣಿ, ವಿಜಯಲಕ್ಷ್ಮಿ ಕಬ್ಬೂರ, ಸಾವಿತ್ರಿ ಕುಳಗೇರಿ, ಪದ್ಮಜಾ ರೆಡ್ಡಿ, ಸಂಗೀತಾ ಕಟ್ಟಿಮನಿ, ಅರುಣ್ ಕುಲಕರ್ಣಿ, ಶರಣು ಸಜ್ಜನ್, ಡಾ.ಶಂಭುಲಿಂಗ, ಮಲ್ಲಿಕಾರ್ಜುನ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು