ಸೋಮವಾರ, ಮೇ 16, 2022
22 °C
ಸಫಾಯಿ ಕರ್ಮಚಾರಿಗಳಿಗೆ ಒಂದು ದಿನದ ಕಾರ್ಯುಗಾರ

ಸ್ವಚ್ಛತಾ ಕಾರ್ಯದಲ್ಲಿ ಮುಂಜಾಗ್ರತೆ ಅವಶ್ಯ: ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಮನುಷ್ಯನಿಗೆ ಜೀವ ತುಂಬಾ ಮುಖ್ಯ. ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯ ಎಂದು ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಹೇಳಿದರು.

ಸೋಮವಾರ ನಗರದಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮ್ಯಾನುವೆಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆ–2013ರ ಅನುಷ್ಠಾನ ಮತ್ತು ಪುನರ್ವಸತಿ ಕುರಿತು ಸಫಾಯಿ ಕರ್ಮಚಾರಿಗಳಿಗೆ ಮತ್ತು ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅರಿವು ಮೂಡಿಸುವ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು ಅಗತ್ಯವಿರುವ ಸುರಕ್ಷತಾ ವಸ್ತುಗಳನ್ನು ಬಳಸಿಕೊಂಡು ಕಾರ್ಯನಿರ್ವಹಣೆ ಮಾಡಬೇಕು. ಸರಕ್ಷತಾ ಪರಿಕರವಿಲ್ಲದೆ ಕೆಲಸ ಮಾಡುವುದು ಅಪಾಯಕ್ಕೆ ಆಹ್ವಾನ ನೀಡಿದಂತಾಗುತ್ತದೆ ಎಂದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯೆ ಗೀತಾ ವಾಡೇಕರ್ ಮಾತನಾಡಿ, ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರು ತಮ್ಮ ಕೆಲಸ ಏನೆಂದು ತಿಳಿದುಕೊಂಡು ಕಾರ್ಯನಿರ್ವಹಣೆ ಮಾಡಬೇಕು. ತರಬೇತಿಯಿಂದ ಸಫಾಯಿ ಕರ್ಮಚಾರಿಗಳಿಗೆ ತುಂಬಾ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಮೇಲ್ವಿಚಾರಣೆ ಸಮಿತಿ ಸದಸ್ಯ ಹಾಗೂ ರಾಜ್ಯ ಸಂಚಾಲಕ ಡಾ. ಕೆ.ಬಿ.ಓಬಳೇಶ ಮಾತನಾಡಿ, ‘ಮ್ಯಾನುವೆಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆ–2013 ಪ್ರಕಾರ ಯಾರನ್ನೂ ಬಲವಂತವಾಗಿ ಮ್ಯಾನ್‍ಹೋಲ್‍ಗೆ ಇಳಿಸಿ ಕೆಲಸ ಮಾಡಿಸಿಕೊಳ್ಳುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ ಕಾಯ್ದೆಯನ್ವಯ ಅಂಥವರನ್ನು ಶಿಕ್ಷೆಗೆ ಗುರಿ ಪಡಿಸಬಹುದಾಗಿದೆ’ ಎಂದರು.

ಕಾಯ್ದೆ ಪ್ರಕಾರ ಗ್ರಾಮೀಣ, ಪಟ್ಟಣ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯಲ್ಲಿರುವ ಅರೆ ನೈರ್ಮಲ್ಯ ಶೌಚಾಲಯಗಳನ್ನು ಗುರುತಿಸಿ ನಾಶ ಮಾಡಬೇಕು. ತೆರೆದ ಶೌಚಾಲಯಗಳು ಕಂಡು ಬಂದಲ್ಲಿ ದಂಡ ವಿಧಿಸಲಾಗುತ್ತದೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಯಾರನ್ನೂ ಮ್ಯಾನ್‍ಹೋಲ್ ಶುಚಿಗೊಳಿಸಲು ಇಳಿಸಬಾರದು. ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದರೆ ₹ 50 ಸಾವಿರ ದಂಡ, ಎರಡನೇ ಬಾರಿಗೆ ₹ 1 ಲಕ್ಷ ದಂಡ ಹಾಗೂ 2 ವರ್ಷ ಜಾಮೀನು ರಹಿತ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ ಎಂದು ವಿವರಿಸಿದರು.

ಮೇಲ್ವಿಚಾರಣೆ ಸಮಿತಿ ಸದಸ್ಯ ರಾಮಚಂದ್ರ ಅವರು ಕಾಯ್ದೆ ಕುರಿತು ಸಫಾಯಿ ಕರ್ಮಚಾರಿಗಳಿಗೆ ಸಮಗ್ರ ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಭಕ್ಷ್, ಸಹಾಯಕ ಆಯುಕ್ತ ಬಲರಾಮ ಲಮಾಣಿ, ಬೆಂಗಳೂರಿನ ರಾಜ್ಯ ಕಾನೂನು ಕಾಲೇಜಿನ ಡಾ.ಆರ್.ವಿ ಚಂದ್ರಶೇಖರ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಅನೀಲಕುಮಾರ ಚಕ್ರ. ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.

ಆರ್.ಜೆ ಮಂಜು ನಿರೂಪಣೆ ಮಾಡಿದರು. ಡಿಯುಡಿಸಿ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗೇರಿ ಸ್ವಾಗತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು