ಎಚ್‌ಕೆಆರ್‌ಡಿಬಿಗೆ ಅಧ್ಯಕ್ಷರನ್ನು ನೇಮಿಸಿಲ್ಲ; ಹಣವನ್ನೂ ಬಿಡುಗಡೆ ಮಾಡಿಲ್ಲ

7
ರಾಜ್ಯ ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಎಚ್‌ಕೆಆರ್‌ಡಿಬಿಗೆ ಅಧ್ಯಕ್ಷರನ್ನು ನೇಮಿಸಿಲ್ಲ; ಹಣವನ್ನೂ ಬಿಡುಗಡೆ ಮಾಡಿಲ್ಲ

Published:
Updated:

ಕಲಬುರ್ಗಿ: ‘ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್‌ಕೆಆರ್‌ಡಿಬಿ)ಗೆ ರಾಜ್ಯ ಸರ್ಕಾರ ಅಧ್ಯಕ್ಷರನ್ನು ನೇಮಿಸಿಲ್ಲ. ಈ ವರ್ಷದ ಅನುದಾನ ಬಿಡುಗಡೆಯಾಗಿಲ್ಲ. ಈ ವರ್ಷದ ಕಾಮಗಾರಿಗಳೂ ಆರಂಭಗೊಂಡಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದರು.

‘ಮಂಡಳಿಗೆ ಈ ವರೆಗೆ ₹4,381 ಕೋಟಿ ಮಂಜೂರಾಗಿದ್ದು, ಅದರಲ್ಲಿ ಕೇವಲ ₹2,283 ಕೋಟಿ ಖರ್ಚಾಗಿದೆ ಎಂದು ಮುಖ್ಯಮಂತ್ರಿ ಕರೆದಿದ್ದ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಹಿಂದಿನ–ಈಗಿನ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕೂ ಹಣ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಸಭೆಯನ್ನೂ ಮಾಡಿಲ್ಲ. ಮುಖ್ಯಮಂತ್ರಿ ಬೆಂಗಳೂರು ಬಿಟ್ಟು ಹೊರಬಂದಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆ ಎಂಬ ನಂಬಿಕೆಯೇ ಜನಸಾಮಾನ್ಯರಲ್ಲಿ ಇಲ್ಲ’ ಎಂದು ಹರಿಹಾಯ್ದರು.

‘ರೈತರ ಸಾಲ ಮನ್ನಾ ಬಗ್ಗೆ ಮಾತನಾಡುತ್ತಿರುವವರು ಕುಮಾರಸ್ವಾಮಿಯೇ ಹೊರತು ನಾವಲ್ಲ. ಅವರು ಹಣದ ಗಿಡ ನೆಟ್ಟಿದ್ದಾರೆ ಎಂದು ನಾವೇನು ಹೇಳಿಲ್ಲ. ಈಗ ಅವರು ಮಾತು ಬದಲಿಸಿದರೆ ಹೇಗೆ? ರೈತರ ಸಾಲಮನ್ನಾ ವಿಷಯದಲ್ಲಿ ಉಂಟಾಗಿರುವ ಗೊಂದಲಗಳನ್ನು ರಾಜ್ಯ ಸರ್ಕಾರ ತಕ್ಷಣ ಪರಿಹರಿಸಬೇಕು. ರೈತರಿಗೆ ಹೊಸ ಸಾಲ ಸಿಗುವಂತಾಗಬೇಕು. ಇನ್ನು ಹತ್ತು ದಿನ ನೋಡಿ ನಾವು ಹೋರಾಟ ರೂಪಿಸುತ್ತೇವೆ’ ಎಂದರು.

‘ರಾಜ್ಯದ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಸಾಲಮನ್ನಾ ಮಾಡುತ್ತೇವೆ ಎಂದು ಚುನಾವಣೆಯ ಪ್ರಣಾಳಿಕೆಯಲ್ಲಿ ನಾವೂ ಹೇಳಿದ್ದೆವು. ಈ ರೀತಿಯ ಸಾಲಮನ್ನಾ ಮಾಡುತ್ತೇವೆ ಎಂದಿರಲಿಲ್ಲ. ಮನ್ನಾ ಮಾಡುವ ಸಾಲಕ್ಕೆ ಹಣಕಾಸಿನ ವ್ಯವಸ್ಥೆ ಮಾಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ’ ಎಂದು ಪ್ರತಿಕ್ರಿಯಿಸಿದರು.

‘ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲಿ 23 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ಶೇ 60ರಷ್ಟು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಕ್ಕೆ ಬರುತ್ತೇವೆ’ ಎಂದು ಹೇಳಿದರು.

ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಗೋವಿಂದ ಕಾರಜೋಳ, ಬೀದರ್‌ ಸಂಸದ ಭಗವಂತ ಖೂಬಾ, ಶಾಸಕರಾದ ಬಿ.ಜಿ.ಪಾಟೀಲ, ಸುಭಾಸ ಗುತ್ತೇದಾರ, ರಾಜಕುಮಾರ ಪಾಟೀಲ ತೆಲ್ಕೂರ, ಎನ್‌.ರವಿಕುಮಾರ, ಬಸವರಾಜ ಮತ್ತಿಮೂಡ, ದತ್ತಾತ್ರೇಯ ಪಾಟೀಲ, ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !