ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಪರಿಕರ ವಿತರಣೆಗೆ ಗಮನಹರಿಸಿ

ಜಿ.ಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಸೂಚನೆ
Last Updated 11 ಡಿಸೆಂಬರ್ 2019, 17:30 IST
ಅಕ್ಷರ ಗಾತ್ರ

ವಿಜಯಪುರ: ‘ರೈತರ ಬೇಡಿಕೆಗೆ ಅನುಗುಣವಾಗಿ ಕೃಷಿ ಉಪಕರಣಗಳ ಪೂರೈಕೆಗೆ ಅವಶ್ಯಕ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜರುಗಿದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಸ್ಪ್ರಿಂಕ್ಲರ್, ಚಾಪ್ಸ್ ಕಟರ್ ಸೇರಿದಂತೆ ಇತರ ಉಪಕರಣಗಳನ್ನು ಪೂರೈಸಬೇಕು. ಗಿರಿಜನ ಉಪಯೋಜನೆಯಡಿ ಇಂತಹ ಉಪಕರಣಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಈ ಕುರಿತಂತೆ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಕಚೇರಿಗೆ ಶಿಫಾರಸು ಮಾಡಬೇಕು’ ಎಂದು ಹೇಳಿದರು.

‘ಕೃಷ್ಣಾ ಭಾಗ್ಯ ಜಲ ನಿಗಮ (ಕೆಬಿಜೆಎನ್‌ಎಲ್‌)ದ ವ್ಯಾಪ್ತಿಯ ಆಲಮಟ್ಟಿ ಮತ್ತು ರಾಂಪುರ ವಿಭಾಗದ ಸೂಪರಿಂಟೆಂಡೆಂಟ್‌ ಎಂಜಿನಿಯರ್ ಅವರು ಮುಂದಿನ ಸಭೆಗೆ ಹಾಜರಾಗಿ ವರದಿ ಸಲ್ಲಿಸಬೇಕು. ಅದರಂತೆ ಆಯಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರುಗಳು ಸಭೆಗೆ ಸೂಕ್ತ ಮಾಹಿತಿ ನೀಡಬೇಕು’ ಎಂದು ಸೂಚಿಸಿದರು.

‘ವಿವಿಧ ಯೋಜನೆಗಳಡಿ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಿಗದಿತ ಗುರಿ ಸಾಧಿಸಬೇಕು. ತೋಟಗಾರಿಕೆ, ನೀರಾವರಿ ವಿವಿಧ ಅಭಿವೃದ್ಧಿ ನಿಗಮಗಳ ಮತ್ತು ಸರ್ಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು. ಸಾಧಿಸಿದ ಪ್ರಗತಿ ವರದಿಯನ್ನು ಸಲ್ಲಿಸುವ ಜೊತೆಗೆ ಕಡ್ಡಾಯವಾಗಿ ಕಚೇರಿ ಮುಖ್ಯಸ್ಥರೇ ಸಭೆಗೆ ಹಾಜರಾಗಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ‘ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆ ಮೇಲೆ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು. ಜಲಧಾರೆ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅರ್ಹತಾ ವಲಯಗಳ ಪರಿಶೀಲನೆಗಾಗಿ ಈಗಾಗಲೇ ಜಲಧಾರೆ ತಂಡವು ಆಲಮಟ್ಟಿ, ನಾರಾಯಣಪುರ, ಇಂಡಿ ಸೇರಿದಂತೆ ವಿವಿಧ ಭಾಗಗಳಲ್ಲಿ ಅಧ್ಯಯನ ನಡೆಸುತ್ತಿದ್ದು, ಯೋಜನೆ ಅನುಷ್ಠಾನಕ್ಕೆ ಮಾಹಿತಿ ವಿನಿಮಯವನ್ನು ಸಹ ಈ ತಂಡದೊಂದಿಗೆ ಮಾಡಲಾಗುವುದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ 228 ಮಲ್ಟಿ ಚೆಕ್‌ ಡ್ಯಾಂಗಳು ಸುಸ್ಥಿತಿಯಲ್ಲಿದ್ದು, ಈ ಕುರಿತು ಪರಿಶೀಲನೆ ಸಹ ನಡೆಸಲಾಗಿದೆ. ಈ ಹಿಂದಿನ ಮಲ್ಟಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳನ್ನು ಮುಂದುವರೆಸುವಂತೆ ಸೂಚಿಸಲಾಗಿದೆ’ ಎಂದರು.

ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಲ್ಲಪ್ಪ ಕೊಡಬಾಗಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಜೈಸಿಂಗ್ ನಾಯಿಕ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎನ್.ಕೆ.ಗೋಠೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT