ಕೇಂದ್ರದ ವಿರುದ್ಧ ಕಾರ್ಮಿಕರ ಆಕ್ರೋಶ

7
ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರ್‍ಯಾಲಿ

ಕೇಂದ್ರದ ವಿರುದ್ಧ ಕಾರ್ಮಿಕರ ಆಕ್ರೋಶ

Published:
Updated:
Prajavani

ಮಡಿಕೇರಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ನಗರದಲ್ಲಿ ಬುಧವಾರ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಯಿತು. ನಗರದ ಚೌಕಿಯಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿವಿಧ ಸಂಘಟನೆಗಳ ಕಾರ್ಮಿಕರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸಮಿತಿಯ ಜಿಲ್ಲಾ ಸಂಚಾಲಕ ಟಿ.ಪಿ. ರಮೇಶ್ ಮಾತನಾಡಿ, ಕೇಂದ್ರ ಸರ್ಕಾರವು ತಮಗೆ ಬೇಕಾದ ರೀತಿಯಲ್ಲಿ ನೀತಿ ರೂಪಿಸುತ್ತಾ ಕಾರ್ಮಿಕರನ್ನು ಕಡೆಗಣಿಸಿದೆ. ಕಾರ್ಮಿಕ ನೀತಿಗಳ ತಿದ್ದುಪಡಿಯಿಂದ ಉದ್ಯಮಿಗಳಿಗೆ ಅನುಕೂಲ ಆಗಿದೆಯೇ ಹೊರತು ಕಾರ್ಮಿಕರಿಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರ ಹೊರಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದೆ. ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಸುಪ್ರಿಂ ಕೋರ್ಟ್ ಆದೇಶವಿದ್ದರೂ ಕನಿಷ್ಠ ವೇತನ ಪಾವತಿಸದೇ ವಂಚಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಿತಿಯ ಮುಖಂಡ ಈ.ರಾ. ದುರ್ಗಾಪ್ರಸಾದ್‌ಮಾತನಾಡಿ, ರಾಜ್ಯದಲ್ಲಿ ಸರ್ಕಾರಿ ನೌಕರರಿಗಿಂತ ಗುತ್ತಿಗೆ ನೌಕರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಲವು ವರ್ಷಗಳಿಂದ ಕಾರ್ಮಿಕರ ಸಮಸ್ಯೆಯ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿದ್ದರೂ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಿಲ್ಲ ಎಂದು ದೂರಿದರು.

ದೇಶದ ಹಲವು ಕಾರ್ಮಿಕರಿಗೆ ಬೋನಸ್, ಪಿಎಫ್, ಇಎಸ್ಐ, ಗುರುತಿನ ಚೀಟಿ ಮತ್ತು ಸೇವಾ ಭದ್ರತೆಗಳು ಸಿಗುತ್ತಿಲ್ಲ. ಕಾರ್ಮಿಕರ ಹಕ್ಕನ್ನು ನಿರಂತರ ಹೋರಾಟಗಳ ಮೂಲಕ ಪಡೆಯುವುದು ಅನಿವಾರ್ಯ ಆಗಿದೆ ಎಂದು ದುರ್ಗಪ್ರಸಾದ್‌ ಹೇಳಿದರು.

ಗ್ರಾಮ ಪಂಚಾಯಿತಿ ನೌಕಕರ ಅಧ್ಯಕ್ಷ ಪಿ.ಆರ್. ಭರತ್ ಮಾತನಾಡಿ, ಡಾ.ಬಿ.ಆರ್‌. ಅಂಬೇಡ್ಕರ್‌ಅವರು ಕಾನೂನು ಮಂತ್ರಿಯಾಗಿದ್ದಾಗ ಕಾರ್ಮಿಕರ ಪರವಾಗಿ ಜಾರಿಗೆ ತಂದಿರುವ 44 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೆಲವನ್ನು ವಿಲೀನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಐಎನ್‌ಟಿಯುಸಿ ಮುಖಂಡ ನಾಗರಾಜ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎಚ್.ಬಿ. ರಮೇಶ್, ಎಯುಟಿಯುಸಿ ಜಿಲ್ಲಾ ಸಂಘಟಕಿ ಆಶಾ, ಜಿಲ್ಲಾ ಆಸ್ಪತ್ರೆಯ ಸ್ವಚ್ಛತಾ ಕಾರ್ಮಿಕರ ಸಂಘದ ಅಧ್ಯಕ್ಷೆ ಜಾನಕಿ, ಅಂಚೆ ನೌಕರರ ಸಂಘದ ಬೇಬಿ, ಜೀವವಿಮಾ ನಿಗಮದ ಅಧ್ಯಕ್ಷ ಅನಂತ ಸರಳಾಯ, ಬಿಎಸ್‌ಎನ್‌ಎಲ್ ನೌಕರರ ಸಂಘದ ಅಧ್ಯಕ್ಷ ವಿ.ಜೆ. ಅಂಥೋಣಿ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷೆ ಕೆ.ಪಿ. ಕಾವೇರಮ್ಮ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !