ಸಂತ್ರಸ್ತರ ಮನೆ ನಿರ್ಮಾಣ ತ್ವರಿತಕ್ಕೆ ಸೂಚನೆ

7
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಅಧ್ಯಕ್ಷತೆಯಲ್ಲಿ ಸಭೆ

ಸಂತ್ರಸ್ತರ ಮನೆ ನಿರ್ಮಾಣ ತ್ವರಿತಕ್ಕೆ ಸೂಚನೆ

Published:
Updated:
Prajavani

ಮಡಿಕೇರಿ: ಜಿಲ್ಲೆಯಲ್ಲಿ ಎರಡು ತಿಂಗಳಲ್ಲಿ ಮುಂಗಾರು ಮಳೆ ಆರಂಭವಾಗಲಿದ್ದು, ಪ್ರಕೃತಿ ವಿಕೋಪದ ಸಂತ್ರಸ್ತರ ಮನೆ, ರಸ್ತೆ, ಸೇತುವೆ, ತಡೆಗೋಡೆ ಮತ್ತಿತರ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮಾದಾಪುರ, ಮದೆ ಮತ್ತು ಕರ್ಣಂಗೇರಿಗಳಲ್ಲಿ ಮನೆ ನಿರ್ಮಿಸುವ ಕಾರ್ಯ ನಡೆಯುತ್ತಿದೆ; ಮನೆ ನಿರ್ಮಾಣ ಕಾರ್ಯವನ್ನು ಇನ್ನಷ್ಟು ಚುರುಕು ಮಾಡಬೇಕು. ಮನೆ ನಿರ್ಮಾಣ ಸಂದರ್ಭದಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಸೆಸ್ಕ್ ಎಂಜಿನಿಯರ್‌ಗೆ ಸೂಚಿಸಿದರು.    

ಸಂತ್ರಸ್ತರಿಗೆ ಮನೆ–ಬೆಳೆ ಹಾನಿಯ ಪರಿಹಾರ ತಲುಪಿದೆಯೇ ಎಂಬ ಬಗ್ಗೆ ಪರಿಶೀಲಿಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಂತ್ರಸ್ತರು ವಾಸಿಸುತ್ತಿರುವ ಹತ್ತಿರದ ಪ್ರದೇಶಗಳಲ್ಲಿ ಉದ್ಯೋಗ, ಕೃಷಿ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ₹ 10 ಸಾವಿರ ಮನೆ ಬಾಡಿಗೆ ಭತ್ಯೆಯನ್ನು ಭರಿಸುತ್ತಿರುವುದು ಇಡೀ ದೇಶದಲ್ಲಿಯೇ ಮೊದಲು. ಆದ್ದರಿಂದ, ಸರ್ಕಾರದ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ದೊರೆಯಬೇಕು. ಜಿಲ್ಲಾ ವೆಬ್‌ಸೈಟ್‌ನಲ್ಲಿ ವಿವಿಧ ಕಾಮಗಾರಿಗಳು, ಪರಿಹಾರ ಮತ್ತಿತರ ಮಾಹಿತಿ ಅಪ್‌ಡೇಟ್ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ ಮಾಡಿದರು.      

ಪ್ರಕೃತಿ ವಿಕೋಪ ಹಾಗೂ ಇತರ ಯೋಜನೆಯ ಅಡಿ ಬಿಡುಗಡೆಯಾಗಿರುವ ಅನುದಾನವನ್ನು ಸಕಾಲದಲ್ಲಿ ಖರ್ಚು ಮಾಡಬೇಕು. ಯಾವುದೇ ಕಾರಣಕ್ಕೂ ಅನುದಾನ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.  

ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅರ್ಹರಿಗೆ ಸೌಲಭ್ಯಗಳು ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದ ವರ್ಗದವರಿಗೆ ಬಿಡುಗಡೆಯಾಗಿರುವ ಅನುದಾನವನ್ನು ಖರ್ಚು ಮಾಡಬೇಕು. ಸಮಾಜದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ವಿನಿಯೋಗಿಸಬೇಕು ಎಂದು ಅನ್ಬುಕುಮಾರ್ ಅವರು ಸೂಚನೆ ನೀಡಿದರು. 

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರ ಕುಟುಂಬದ ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಲೋಕಾಯುಕ್ತರು ಸಲಹೆ ಮಾಡಿದ್ದರು. ಅದರಂತೆ ಎಷ್ಟು ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರ್ಪಡೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಜಿಲ್ಲಾಧಿಕಾರಿ ಅವರ ಮೂಲಕ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ‘ಸಂತ್ರಸ್ತರ ಖಾತೆಗೆ ಪರಿಹಾರದ ಮೊತ್ತ ಜಮೆಯಾಗಿಲ್ಲ ಎಂಬ ದೂರಿದೆ. ಆದ್ದರಿಂದ, ಈ ಬಗ್ಗೆ ಬ್ಯಾಂಕ್‌ಗಳಿಂದ ಮಾಹಿತಿ ಪಡೆದು ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರು 3,916 ವಾಸದ ಮನೆ ಹಾನಿಗೆ ₹ 10.60 ಕೋಟಿ ಪರಿಹಾರ ವಿತರಿಸಲಾಗಿದೆ. ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಡಿ ₹ 5.10 ಕೋಟಿ ಬಿಡುಗಡೆಯಾಗಿದೆ. ಮನೆ ಕಳೆದುಕೊಂಡ ಅರ್ಹ ಸಂತ್ರಸ್ತರಿಗೆ ನವೆಂಬರ್‌ನಿಂದ ₹ 10 ಸಾವಿರ ಭತ್ಯೆ ನೀಡಲಾಗುತ್ತಿದೆ. ₹ 48 ಲಕ್ಷ ಬಿಡುಗಡೆಯಾಗಿದೆ’ ಎಂದು ಮಾಹಿತಿ ನೀಡಿದರು.      

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ರೇವಣ್ಣವರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಜಗದೀಶ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಬಾಬು, ಭೂದಾಖಲೆಗಳ ಸಹಾಯಕ ನಿರ್ದೇಶಕ ಷಂಶುದ್ದೀನ್, ನಗರಾಭಿವೃದ್ಧಿ ಯೋಜನಾ ಶಾಖೆ ಯೋಜನಾ ನಿರ್ದೇಶಕ ಗೋಪಾಲಕೃಷ್ಣ, ಪೌರಾಯುಕ್ತ ರಮೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹೇಮಂತ್‌ ಕುಮಾರ್ ಹಾಜರಿದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !