ಗುರುವಾರ , ಜೂನ್ 30, 2022
25 °C
34 ಗ್ರಾಮ ಪಂಚಾಯಿತಿಗಳಲ್ಲಿ ಕಡಿಮೆ ಪ್ರಕರಣ: ಶಾಸಕ ಕೆ.ಜಿ.ಬೋಪಯ್ಯ

‘ನಿಯಂತ್ರಣಕ್ಕೆ ಬಂದ ಕೋವಿಡ್‌ ಪ್ರಕರಣ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿರಾಜಪೇಟೆ: ‘ದಕ್ಷಿಣ ಕೊಡಗಿನ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ ಉಳಿದ 34 ಗ್ರಾಮ ಪಂಚಾಯಿತಿಗಳಲ್ಲಿ ಕೊರೊನಾ ಸೋಂಕು ಬಹುತೇಕ ನಿಯಂತ್ರಣಕ್ಕೆ ಬಂದಿದೆ ’ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದರು.

ಪಟ್ಟಣದ ಮಿನಿವಿಧಾನ ಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ ಕೋವಿಡ್‌ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪಲು, ಪೊನ್ನಂಪೇಟೆ, ಸಿದ್ದಾಪುರ ಹಾಗೂ ಬಾಳೆಲೆ ಪಂಚಾಯಿತಿಗಳಲ್ಲಿ 10ಕ್ಕೂ ಅಧಿಕ ಸೋಂಕಿತರಿದ್ದಾರೆ. ಅಮ್ಮತ್ತಿ ಹಾಗು ಸಿದ್ದಾಪುರ ವ್ಯಾಪ್ತಿಯ ಕೆಲ ಎಸ್ಟೇಟ್‌ಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ ಎಂದು
ಹೇಳಿದರು.

ಕೆಲ ತೋಟದ ಮಾಲೀಕರು ಸಹಕರಿಸುತ್ತಿಲ್ಲ. ಸರ್ಕಾರದ ನಿಯಮ ಗಳನ್ನು ಪಾಲಿಸದಿರುವವರ ವಿರುದ್ಧ ಕಾನೂನು ಕ್ರಮ ಅನಿವಾರ್ಯ. ಇನ್ನೂ ಒಂದು ವಾರ ಲಾಕ್‌ಡೌನ್‌ ಇದೆ. ಕಟ್ಟುನಿಟ್ಟಾಗಿ ನಿಯಮ ಪಾಲಿಸಿದರೆ ದಕ್ಷಿಣ ಕೊಡಗು ಸೋಂಕು ಮುಕ್ತವಾಗಲಿದೆ ಎಂದು ಅಭಿಪ್ರಾಯಪಟ್ಟರು. 

ಅಮ್ಮತ್ತಿ ಹಾಗೂ ಸಿದ್ದಾಪುರ ಭಾಗದ ತೋಟಗಳ ಕಾರ್ಮಿಕರಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದ ಶಾಸಕರು, ಅಸಮಾಧಾನ ವ್ಯಕ್ತಪಡಿಸಿದರು.

ತಹಶೀಲ್ದಾರ್ ಆರ್.ಯೋಗಾನಂದ್ ಮಾತನಾಡಿ, ಅಮ್ಮತ್ತಿ ಭಾಗದ ತೋಟವೊಂದರಲ್ಲಿ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಾಗ ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರಿಂದ 40 ಮಂದಿಗೆ ಸೋಂಕು ಹರಡಿದೆ. ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ತಾಲ್ಲೂಕು ಆಸ್ಪತ್ರೆಯನ್ನು ಸಂಪರ್ಕಿಸಿದರೆ ಸೂಕ್ತ ಚಿಕಿತ್ಸೆ ನೀಡಲಾಗುವುದು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಮಾತನಾಡಿ, ಕಳೆದೆರೆಡು ದಿನದಿಂದ ಪಟ್ಟಣದ ವ್ಯಾಪ್ತಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಮುಂದಿನ ಒಂದು ವಾರದಲ್ಲಿ ಸಂಪೂರ್ಣ ಹತೋಟಿಗೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿಶ್ವನಾಥ್ ಸಿಂಪಿ ಮಾತನಾಡಿದರು. ಪೊನ್ನಂಪೇಟೆ ತಹಶೀಲ್ದಾರ್ ಕಾವ್ಯಾರಾಣಿ, ಡಿವೈಎಸ್ಪಿ ಜಯ ಕುಮಾರ್ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.